ಜಿಲ್ಲೆ

ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಕಾಂಗ್ರೆಸ್ ಆಕ್ರೋಶ

ಬೆಳಗಾವಿ: ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ನಗರದ ಚನ್ನಮ್ಮ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಇಂಧನ, ಅಡುಗೆ ಎಣ್ಣೆ, ಎಲ್‌ಪಿಜಿ ಗ್ಯಾಸ್ ಮತ್ತಿತರ ವಸ್ತುಗಳ ಬೆಲೆ ಏರಿಕೆಗೆ ಆಕ್ರೋಶ ವ್ಯಕ್ತಪಡಿಸಿ ಗ್ಯಾಸ್, ತಟ್ಟೆ ಹಿಡಿದು ಪ್ರತಿಭಟಿಸಿದರು. ಕರೊನಾ ಹಾಗೂ ಲಾಕ್‌ಡೌನ್‌ನಿಂದಾಗಿ ಬಹಳಷ್ಟು ಜನ ಉದ್ಯೋಗ ಕಳೆದುಕೊಂಡಿದ್ದಾರೆ. ಕುಟುಂಬ ನಿರ್ವಹಣೆಗೆ ಮಾಡಲು ಸಾಧ್ಯವಾಗದೆ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಗಳು ನಡೆದಿವೆ. ಈ ಸಂಕಷ್ಟ ಕಾಲದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಜನಸಾಮಾನ್ಯರ ಬದುಕಿನ ಮೇಲೆ ಬರೆ ಏಳಿದಿದೆ ಎಂದು ದೂರಿದರು.

ಕರೊನಾದಿಂದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿತ್ತು. ಈಗ ಪರಿಸ್ಥಿತಿ ಸುಧಾರಣೆ ಆಗುತ್ತಿದೆ. 450 ರೂ. ಇದ್ದ ಎಲ್‌ಪಿಜಿ ಗ್ಯಾಸ್ ಬೆಲೆ 1,250 ರೂ. ದಾಟಿದೆ. ಅಡುಗೆ ಎಣ್ಣೆ, ತರಕಾರಿ, ತೈಲ ಬೆಲೆಯೂ ಏರಿಕೆ ಮಾಡಿ, ಸರ್ಕಾರ ಜನರ ಜೇಬಿಗೆ ಕತ್ತರಿ ಹಾಕುತ್ತಿದೆ ಎಂದು ಆರೋಪಿಸಿದರು. ಬೆಳಗಾವಿ ಕಾಂಗ್ರೆಸ್ ಗ್ರಾಮೀಣ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ, ಪರಶುರಾಮ ಒಗ್ಗಣ್ಣವರ, ಜಯಶ್ರೀ, ಪ್ರದೀಪ ಎಂ.ಜಿ., ವಿಜಯ ಹಂಪಣ್ಣವರ ಇತರರಿದ್ದರು.