ಜಿಲ್ಲೆ

ಅಗ್ನಿ ಅವಘಡಗಳ ಕುರಿತು ಅರಿವು ಅತ್ಯಗತ್ಯ

ಚಾಮರಾಜನಗರ: ಗ್ರಾಮೀಣ ಭಾಗದ ಜನರಿಗೆ ಅಗ್ನಿ ಅವಘಡಗಳ ಕುರಿತು ಹೆಚ್ಚಿನ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ಚಾಮರಾಜನಗರ ವಿಶ್ವವಿದ್ಯಾನಿಲಯದ ಎನ್.ಎಸ್.ಎಸ್ ಸಂಯೋಜನಾಧಿಕಾರಿ ಡಾ.ಆರ್.ಮಹೇಶ್ ಹೇಳಿದರು.

ತಾಲೂಕಿನ ಯರಗನಹಳ್ಳಿ ಗ್ರಾಮದಲ್ಲಿ ಚಾಮರಾಜನಗರ ವಿಶ್ವವಿದ್ಯಾಲಯ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಸೋಮವಾರ ಆಯೋಜಿಸಿದ್ದ ಅಗ್ನಿ ಅವಘಡಗಳ ಕುರಿತು ಪ್ರಾತ್ಯಕ್ಷಿಕೆ ಹಾಗೂ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಗ್ರಾಮೀಣ ಪ್ರದೇಶಗಳಲ್ಲಿ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ಜನ ಜಾಗೃತಿ ಹೆಚ್ಚಾಗಲಿದೆ. ಪ್ರಾತ್ಯಕ್ಷಿಕೆ ಮತ್ತು ಉಪನ್ಯಾಸದ ಮೂಲಕ ಹೆಚ್ಚಿನ ಮಾಹಿತಿ ನೀಡುವುದರಿಂದ ಗ್ರಾಮಸ್ಥರಿಗೆ, ಶಿಬಿರಾರ್ಥಿಗಳಿಗೆ ಹಾಗೂ ವಿದ್ಯಾರ್ಥಿಗಳಿಗೆ ಮುನ್ನೆಚ್ಚರಿಕೆ ಕ್ರಮದ ಬಗ್ಗೆ ಅರಿವು ಮೂಡಿಸಲಾಗಿದೆ ಎಂದರು.

ಪ್ರಸ್ತುತ ದಿನಗಳಲ್ಲಿ ಅಗ್ನಿ ಅವಘಡಗಳಿಂದ ಅನಾಹುತಗಳು ಅಧಿಕವಾಗುತ್ತಿದ್ದು, ಈ ಬಗ್ಗೆ ಜನರಿಗೆ ಅರಿವಿನ ಕೊರತೆಯಿದೆ. ಇಂತಹ ಪ್ರಾತ್ಯಕ್ಷಿಕೆಗಳು ಮತ್ತು ವಿಶೇಷ ಉಪನ್ಯಾಸಗಳು ಪ್ರತಿಯೊಬ್ಬರಿಗೂ ಅನಿವಾರ್ಯ ಹಾಗೂ ಅರ್ಥಪೂರ್ಣವಾಗಿದೆ ಎಂದು ಹೇಳಿದರು.

ಶಿಬಿರದಲ್ಲಿ ಜಿಲ್ಲಾ ಅಗ್ನಿಶಾಮಕ ಠಾಣೆಯ ಸಹಾಯಕ ಠಾಣಾಧಿಕಾರಿ ಶಿವಾಜಿರಾವ್ ಪಾಟೀಲ್ ಹಾಗೂ ತಂಡದಿಂದ ಅಗ್ನಿ ಅವಘಡಗಳು, ಮುನ್ನೆಚ್ಚರಿಕೆ ಕ್ರಮಗಳ ಕುರಿತು ಪ್ರಾತ್ಯಕ್ಷಿಕೆ ಹಾಗೂ ಉಪನ್ಯಾಸ ನೀಡಲಾಯಿತು. ಈ ಸಂದರ್ಭದಲ್ಲಿ ಕನ್ನಡ ಉಪನ್ಯಾಸಕ ಯರಗನಹಳ್ಳಿ ಗುರುರಾಜು, ಶಿಕ್ಷಕರಾದ ನಾಗೇಶ್, ಶಿಬಿರಾರ್ಥಿಗಳು, ವಿದ್ಯಾರ್ಥಿಗಳು ಹಾಜರಿದ್ದರು.