ಜಿಲ್ಲೆ

ಅತಂತ್ರ ಸ್ಥಿತಿಯಲ್ಲಿ ಪದವಿ ವಿದ್ಯಾರ್ಥಿಗಳು

ಚಾಮರಾಜನಗರ: ಪ್ರಸ್ತುತ ಸಂದರ್ಭದಲ್ಲಿ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಪಾಲಿನ ಆಮ್ಲಜನಕವಾಗಿದ್ದ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡದೇ ವಿದ್ಯಾರ್ಥಿಗಳು ಅತಂತ್ರ ಸ್ಥಿತಿಯಲ್ಲಿದ್ದಾರೆ.

ಜಿಲ್ಲೆಯಲ್ಲಿ ಚಾಮರಾಜನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ಭೋಗಾಪುರದ ಸರ್ಕಾರಿ ವಸತಿ ಸಹಿತ ಪ್ರಥಮದರ್ಜೆ ಕಾಲೇಜು, ತಾಲೂಕಿನ ಕುದೇರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಹನೂರು ಸರ್ಕಾರಿ ಪ್ರಥಮದರ್ಜೆ ಕಾಲೇಜು, ಕೊಳ್ಳೇಗಾಲದ ಶ್ರೀಮಹದೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಯಳಂದೂರು ಮಲ್ಲಿಕಾರ್ಜುನಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಗುಂಡ್ಲುಪೇಟೆ ತಾಲೂಕಿನ ಕಬ್ಬಹಳ್ಳಿ ಶ್ರೀಮದ್ದಾನೇಶ್ವರ ಸರ್ಕಾರಿ ಪ್ರಥಮದರ್ಜೆ ಕಾಲೇಜು ಹಾಗೂ ಗುಂಡ್ಲುಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಒಳಗೊಂಡಂತೆ ಒಟ್ಟು 09 ಪದವಿ ಕಾಲೇಜುಗಳು ಇದೆ. ಈ ಕಾಲೇಜುಗಳಲ್ಲಿ ಸಾವಿರಾರು ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.

ಈ ಎಲ್ಲಾ ಕಾಲೇಜುಗಳಲ್ಲಿ 2024-25 ನೇ ಸಾಲಿನಲ್ಲಿ ಒಟ್ಟು 120 ಅತಿಥಿ ಉಪನ್ಯಾಸಕರು ಕರ್ತವ್ಯವನ್ನು ನಿರ್ವಹಿಸುವ ಮೂಲಕ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಪಾಲಿನ ಆಮ್ಲಜನಕವಾಗಿದ್ದರು. ಆದರೇ 2025-26 ನೇ ಸಾಲಿನಲ್ಲಿ ಪದವಿ ತರಗತಿಗಳಿಗೆ ಇಂದಿಗೂ ಅತಿಥಿ ಶಿಕ್ಷಕರನ್ನು ನೇಮಕ ಮಾಡದೇ ವಿದ್ಯಾರ್ಥಿಗಳಿಗೆ ಪಾಠ-ಪ್ರವಚನಗಳು ಸೂಕ್ತ ರೀತಿಯಲ್ಲಿ ನಡೆಯದೇ ಇರುವ ಪರಿಣಾಮವಾಗಿ ವಿದ್ಯಾರ್ಥಿಗಳು ಸಮಸ್ಯೆ ಅನುಭವಿಸುವಂತಾಗಿದೆ. ಮತ್ತೊಂದು ಕಡೆಯಲ್ಲಿ ಅತಿಥಿ ಉಪನ್ಯಾಸಕರುಗಳಿಗೆ ಉದ್ಯೋಗವಿಲ್ಲದೇ ಜೀವನ ನಿರ್ವಹಣೆ ನಡೆಸಲು ತೊಂದರೆ ಅನುಭವಿಸುವಂತಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ಕೂಡಲೇ ಇತ್ತ ಗಮನಹರಿಸಿ ಪದವಿ ವಿದ್ಯಾರ್ಥಿಗಳು ಹಾಗೂ ಅತಿಥಿ ಉಪನ್ಯಾಸಕರ ಸಮಸ್ಯೆಯನ್ನು ಬಗೆಹರಿಸಬೇಕು ಎಂಬ ಒತ್ತಾಯ ವಿದ್ಯಾರ್ಥಿ ವಲಯದಿಂದ ಕೇಳಿಬಂದಿದೆ.

ವಿದ್ಯಾರ್ಥಿಗಳಿಗಿಲ್ಲ ಪಾಠ:

ಜಿಲ್ಲೆಯ 09 ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರು ಇಲ್ಲದೇ, ವಿದ್ಯಾರ್ಥಿಗಳಿಗೆ ಪಾಠ ಪ್ರವಚನ ಸೂಕ್ತ ಸಮಯಕ್ಕೆ ಮುಗಿಯದ ಪರಿಸ್ಥಿತಿ ನಿರ್ಮಾಣವಾಗಿದೆ. ಸರ್ಕಾರಿ ಪದವಿ ಕಾಲೇಜುಗಳಲ್ಲಿ ಹೊಸ ಶೈಕ್ಷಣಿಕ ವರ್ಷ ಪ್ರಾರಂಭವಾಗಿ 1-2 ತಿಂಗಳು ಕಳೆದಿದ್ದು, ಅತಿಥಿ ಉಪನ್ಯಾಸಕರು ಇನ್ನೂ ನೇಮಕವಾಗಿಲ್ಲ. ಆಗಾಗಿ ಸರ್ಕಾರಿ ಕಾಲೇಜುಗಳಲ್ಲಿ ತಳಸಮುದಾಯಗಳು ಹಾಗೂ ಬಡ ವಿದ್ಯಾರ್ಥಿಗಳೇ ಹೆಚ್ಚು ವ್ಯಾಸಂಗ ಮಾಡುತ್ತಿದ್ದು, ಅವರ ಕಲಿಕೆಗೆ ಇದು ಪೆಟ್ಟು ಬಿದ್ದಂತಾಗಿದೆ. ನವೆಂಬರ್ ಕೊನೆಯ ವಾರದಲ್ಲಿ ಸೆಮಿಸ್ಟರ್ ಪರೀಕ್ಷೆ ಬರಲಿದ್ದು, ಸಮಯಕ್ಕೆ ಸರಿಯಾಗಿ ಸಿಲಬಸ್ ಮುಗಿಯದೇ ವಿದ್ಯಾರ್ಥಿಗಳು ಆತಂಕದಲ್ಲೇ ಕಾಲದೂಡುವಂತಾಗಿದೆ. ಪದವಿ ಕಾಲೇಜುಗಳಲ್ಲಿ ಇರುವ ಸರ್ಕಾರಿ ಉಪನ್ಯಾಸಕರು ಸಾಧ್ಯವಾದಷ್ಟು ಸಿಲಬಸ್ ಮುಕ್ತಾಯ ಮಾಡುತ್ತಿದ್ದು, ಅವರ ಮೇಲೆಯೂ ಹೆಚ್ಚಿನ ಹೊರೆ ಬಿದ್ದಂತಾಗಿದೆ. ಇದು ಪದವಿ ವಿದ್ಯಾರ್ಥಿಗಳ ಶೈಕ್ಷಣಿಕತೆಯ ಮೇಲೆ ಬಹುದೊಡ್ಡ ಪರಿಣಾಮವನ್ನು ಬೀರುತ್ತಿದೆ. ಆಗಾಗಿ ಕೂಡಲೇ ಸರ್ಕಾರ ಎಚ್ಚೆತ್ತುಕೊಂಡು ಪದವಿ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

ಸಂಕಷ್ಟದಲ್ಲಿ ಉಪನ್ಯಾಸಕರು:

ರಾಜ್ಯದ ಉನ್ನತ ಶಿಕ್ಷಣ ಇಲಾಖೆ 2025-26 ನೇ ಸಾಲಿಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳದೇ ಉಪನ್ಯಾಸಕರು ಸಂಕಷ್ಟಕ್ಕೆ ಸಿಲುಕಿದ್ದು, ಜೀವನ ನಿರ್ವಹಣೆ ಮಾಡಲು ಸಮಸ್ಯೆಯಾಗಿದೆ. ಯುಜಿಸಿ, ಯುಜಿಸಿಯೇತರ ನೇಮಕಾತಿ ಗೊಂದಲ, ಎಂಫಿಲ್ ಆದವರಿಗೆ ಎನ್‌ಇಟಿ, ಕೆ.ಸೆಟ್ ತತ್ಸಮಾನವಾಗಿ ಪರಿಗಣಿಸಬೇಕೆಂಬ ಒತ್ತಾಯ ಸೇರಿದಂತೆ ಹಲವಾರು ಕಾರಣಗಳಿಂದ ಪದವಿ ಕಾಲೇಜುಗಳಿಗೆ ಅತಿಥಿ ಉಪನ್ಯಾಸಲರ ನೇಮ ತಡವಾಗುತ್ತಿದೆ. ಆದರೇ ಜಿಲ್ಲೆಯ 120 ಅತಿಥಿ ಉಪನ್ಯಾಸಕರು ಕೂಡ ಗೊಂದಲಕ್ಕೆ ಸಿಲುಕ್ಕಿದ್ದು, ಉದ್ಯೋಗವಿಲ್ಲದೇ ಪರಿತಪಿಸುವಂತಾಗಿದೆ. ವಿವಿಧ ವಿದ್ಯಾರ್ಥಿ ಸಂಘಟನೆಗಳು ಹಾಗೂ ಅತಿಥಿ ಉಪನ್ಯಾಸಕರು ಅಲ್ಲಲ್ಲಿ ಪ್ರತಿಭಟನೆಯನ್ನು ನಡೆಸಿ ಮನವಿ ಸಲ್ಲಿಸುತ್ತಿದ್ದು, ಸರ್ಕಾರ ಅತಿಥಿ ಉಪನ್ಯಾಸಕರ ಸಮಸ್ಯೆಯನ್ನು ಬಗೆಹರಿಸಲು ಆದಷ್ಟು ಬೇಗ ಮುಂದಾಗಬೇಕು ಎಂದು ರಾಜ್ಯ ಅತಿಥಿ ಉಪನ್ಯಾಸಕರ ಸಮನ್ವಯ ಸಮಿತಿ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನಸ್ವಾಮಿ ವಿಜಯವಾಣಿ ಜತೆಗೆ ಮಾತನಾಡಿ ಅಭಿಪ್ರಾಯ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಧ್ಯೆ ಪ್ರವೇಶ ಮಾಡಿ, ಈ ಕೂಡಲೇ 2025-26ನೇ ಸಾಲಿನ ಪದವಿ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಲು ಕ್ರಮವಹಿಸಬೇಕು. ಅತಿಥಿ ಉಪನ್ಯಾಸಕರ ನೇಮಕದಲ್ಲಿ ಯಾವುದೇ ತಾರತಮ್ಯವನ್ನು ಮಾಡದೇ, ಇಷ್ಟು ವರ್ಷಗಳ ಕಾಲ ಸೇವೆ ಸಲ್ಲಿಸಿರುವ ಎಲ್ಲಾ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಬೇಕು. ಈ ಮೂಲಕ ಅತಿಥಿ ಉಪನ್ಯಾಸಕರ ಸಮಸ್ಯೆಯನ್ನು ಬಗೆಹರಿಸಬೇಕು.

-ಮಲ್ಲಿಕಾರ್ಜುನಸ್ವಾಮಿ, ಜಿಲ್ಲಾಧ್ಯಕ್ಷ, ರಾಜ್ಯ ಅತಿಥಿ ಉಪನ್ಯಾಸಕರ ಸಮನ್ವಯ ಸಮಿತಿ, ಚಾಮರಾಜನಗರ

ಪದವಿ ತರಗತಿಗಳು ಪ್ರಾರಂಭವಾಗಿ ಈಗಾಗಲೇ 2 ತಿಂಗಳು ಕಳೆದಿದೆ, ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳದೇ ಇರುವುದರಿಂದ 2-3 ಕ್ಲಾಸ್‌ಗಳು ಮಾತ್ರ ನಡೆಯುತ್ತಿದೆ. ಮೊದಲಿನಂತೆ ತರಗತಿಗಳು ನಡೆಯದೇ ಸಮಸ್ಯೆಯಾಗಿದೆ. ನವೆಂಬರ್ ಕೊನೆಯ ವಾರದಲ್ಲಿ ಸೆಮಿಸ್ಟರ್ ಪರೀಕ್ಷೆ ಇರುವುದರಿಂದ ಮತ್ತಷ್ಟು ಸಮಸ್ಯೆಯಾಗಿದೆ.

-ಮಹೇಶ್ವರಿ, ತೃತೀಯ ಬಿಎ, ಕುದೇರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಚಾಮರಾಜನಗರ