ಜಿಲ್ಲೆ

ಅತಿಥಿ ಉಪನ್ಯಾಸಕರ ಕಾಯಂಗೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

ಹಾಸನ: ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ ತರಗತಿಗಳು ಶೀಘ್ರವೇ ಪ್ರಾರಂಭಿಸಬೇಕು ಮತ್ತು ಅತಿಥಿ ಉಪನ್ಯಾಸಕರ ಕಾಯಂಗೆ ಆಗ್ರಹಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಬುಧವಾರ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ನಗರದ ಸರಕಾರಿ ಕಲಾ ಕಾಲೇಜಿನ ಆವರಣದಿಂದ ಹೊರಟ ಪ್ರತಿಭಟನಾ ಮೆರವಣಿಗೆಯು ಆರ್.ಸಿ. ರಸ್ತೆ, ಬಿ.ಎಂ. ರಸ್ತೆ ಮೂಲಕ ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ಬಂದು ತಲುಪಿತು. ಇದೇ ವೇಳೆ ಸಂಘಟನೆಯ ಮುಖಂಡರು ಹಾಗೂ ವಿದ್ಯಾರ್ಥಿಗಳು ಮಾಧ್ಯಮದೊಂದಿಗೆ ಮಾತನಾಡಿ, ಅತಿಥಿ ಉಪನ್ಯಾಸಕರ ಮುಷ್ಕರದಿಂದ ಸರ್ಕಾರಿ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ ಕಳೆದ ಒಂದು ವಾರದಿಂದ ತರಗತಿಗಳು ನಡೆದಿಲ್ಲ. ಡಿ.27ರಿಂದ ಪರೀಕ್ಷೆ ಪ್ರಾರಂಭವಾಗುವ ಸೂಚನೆ ನೀಡಲಾಗಿದೆ. ಇದು ವಿದ್ಯಾರ್ಥಿಗಳ ಕಳವಳಕ್ಕೆ ಕಾರಣವಾಗಿದೆ ಮತ್ತು ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೂ ತೊಂದರೆಯಾಗುತ್ತಿದೆ ಎಂದರು.
ಶೀಘ್ರವೇ ಸರ್ಕಾರ ಹಾಗೂ ಸಂಬಂಧಪಟ್ಟ ಇಲಾಖೆ ಈ ಸಮಸ್ಯೆಯನ್ನು ಬಗೆಹರಿಸಿ ಅತೀ ಶೀಘ್ರವಾಗಿ ತರಗತಿಗಳನ್ನು ಪ್ರಾರಂಭಿಸಬೇಕು ಹಾಗೂ ಪರೀಕ್ಷಾ ದಿನಾಂಕವನ್ನು ಮುಂದೂಡಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರೀಷತ್ ಅಗ್ರಹಿಸುತ್ತಿದೆ. ಸಮಸ್ಯೆ ಶೀಘ್ರವಾಗಿ ಬಗೆಹರಿಯಲಿಲ್ಲವೆಂದರೇ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಎಚ್ಚರಿಸಿದರು.
ಸರ್ಕಾರಿ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರು ಕಳೆದ 20 ವರ್ಷಗಳಿಂದ ಯಾವುದೇ ಸೌಲಭ್ಯಗಳಿಲ್ಲದೆ, ಕಾಯಂಮಾತಿ ಇಲ್ಲದೆ ತಾತ್ಕಾಲಿಕ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿರುವ ಅವರ ಬದುಕು ದುಸ್ತರವಾಗಿದೆ. ಕೂಡಲೇ ಸರಕಾರವು ಗಮನವಹಿಸಿ ಬೇಡಿಕೆ ಈಡೇರಿಸಬೇಕೆಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಎಬಿವಿಪಿ ನಗರ ಕಾರ್ಯದರ್ಶಿ ವೇಣುಕುಮಾರ್, ಶ್ರೀನಿವಾಸ್ ಸಾವರ್ಕರ್, ಭರತ್ ಕುಮಾರ್, ಅನುಷಾ, ಅತಿಥಿ ಉಪನ್ಯಾಸಕರಾದ ಸುರೇಶ್, ಮಹಮ್ಮದ್ ಆರೀಫ್ ಕಾರ್ಲೇ, ಅರಸೀಹಳ್ಳಿ ಮಂಜುನಾಥ್, ಧರಣೇಂದ್ರ, ಚೇತನ್, ಕುಮಾರ್, ಮಂಜೇಗೌಡ ಇತರರು ಉಪಸ್ಥಿತರಿದ್ದರು.