ಜಿಲ್ಲೆ

ಅತಿಥಿ ಉಪನ್ಯಾಸಕರ ಪರ ವಿದ್ಯಾರ್ಥಿಗಳ ಪ್ರತಿಭಟನೆ

ಹಾಸನ: ಅತಿಥಿ ಉಪನ್ಯಾಸಕರ ಸೇವೆ ಕಾಯಂಗೊಳಿಸಬೇಕು ಎಂದು ಆಗ್ರಹಿಸಿ ಮಂಗಳವಾರ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಲಾಯಿತು.
ನಗರದ ಸರ್ಕಾರಿ ಕಲಾ ಕಾಲೇಜು, ಗಂಧದ ಕೋಠಿ ಮಹಿಳಾ ಕಾಲೇಜು, ಸರ್ಕಾರಿ ಮಹಿಳಾ ಕಾಲೇಜಿನ ನೂರಾರು ವಿದ್ಯಾರ್ಥಿಗಳು ಮೆರವಣಿಗೆ ಮೂಲಕ ಪ್ರತಿಭಟನೆಗೆ ಸಾಥ್ ನೀಡಿದರು. ಸೇವೆ ಕಾಯಂ ಹಾಗೂ ಭದ್ರತೆಗಾಗಿ ಅತಿಥಿ ಉಪನ್ಯಾಸಕರು ನ. 23ರಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಉಪನ್ಯಾಸಕರು ಕಾಲೇಜಿಗೆ ಗೈರು ಹಾಜರಾಗುತ್ತಿರುವುದರಿಂದ ವಿದ್ಯಾರ್ಥಿಗಳ ವ್ಯಾಸಂಗದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಪದವಿ ಪರೀಕ್ಷೆಗಳ ಮೇಲೂ ಉಪನ್ಯಾಸಕರ ಮುಷ್ಕರ ಪರಿಣಾಮ ಬೀರಿದೆ. ಜಿಲ್ಲೆಯಲ್ಲಿ 850ಕ್ಕೂ ಅಧಿಕ ಉಪನ್ಯಾಸಕರಿದ್ದು ಪ್ರತಿಭಟನೆಯಿಂದ ಭಾರೀ ತೊಂದರೆಯಾಗುತ್ತಿದೆ ಎಂದು ಅಳಲು ತೋಡಿಕೊಂಡರು.
ಅತಿಥಿ ಉಪನ್ಯಾಸಕರ ಕಾಯಂ ಮಾಡಿಕೊಳ್ಳುವ ವಿಚಾರದಲ್ಲಿ ಯೋಜನೆ ರೂಪಿಸಲಾಗುವುದೆಂದು ಕಾಂಗ್ರೆಸ್ ಪಕ್ಷ ಹೇಳಿತ್ತು. ಅಧಿಕಾರಕ್ಕೆ ಬಂದು ಆರು ತಿಂಗಳು ಕಳೆದರೂ ಆ ನಿಟ್ಟಿನಲ್ಲಿ ಯಾವ ಕ್ರಮ ಕೈಗೊಂಡಿಲ್ಲ. ಇತ್ತೀಚೆಗೆ ನಡೆದ ಬೆಳಗಾವಿ ಅಧಿವೇಶನದಲ್ಲಿಯಾದರೂ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಬೇಕಿತ್ತು. ಆದರೆ ಪರಿಗಣಿಸಲಿಲ್ಲ. ಅತಿಥಿ ಉಪನ್ಯಾಸಕರಿಗೆ ನೀಡುತ್ತಿರುವ ವೇತನ ಕೂಡ ಅತ್ಯಂತ ಕಡಿಮೆಯಾಗಿದ್ದು, ಅವರ ಜೀವನ ನಿರ್ವಹಣೆ ಕಷ್ಟವಾಗಿದೆ. ಆದ್ದರಿಂದ ವಿದ್ಯಾರ್ಥಿಗಳೆಲ್ಲರೂ ಅವರ ಪರವಾಗಿ ಹೋರಾಟ ನಡೆಸುತ್ತಿದ್ದೇವೆ ಎಂದರು.
ಪೊಲೀಸರ ತಡೆಗೆ ಆಕ್ರೋಶ:
ನಗರದ ಆರ್‌ಸಿ ರಸ್ತೆ ಮಾರ್ಗವಾಗಿ ಮೆರವಣಿಗೆಯಲ್ಲಿ ಬಂದ ವಿದ್ಯಾರ್ಥಿಗಳನ್ನು ಪೊಲೀಸರು ಜಿಲ್ಲಾಧಿಕಾರಿ ಕಚೇರಿ ಗೇಟ್‌ನಲ್ಲಿಯೇ ತಡೆದರು. ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸುತ್ತಿದ್ದರಿಂದ ವಿದ್ಯಾರ್ಥಿಗಳನ್ನು ಒಳಗಡೆ ಬಿಡಲಿಲ್ಲ. ಇದರಿಂದ ಮತ್ತಷ್ಟು ಆಕ್ರೋಶಗೊಂಡ ಪ್ರತಿಭಟನಾಕಾರರು ಜೋರಾಗಿ ಕೂಗಲು ಶುರು ಮಾಡಿದರು. ಆಗ ಸ್ಥಳಕ್ಕೆ ಬಂದ ಅಪರ ಜಿಲ್ಲಾಧಿಕಾರಿ ಕೆ.ಟಿ. ಶಾಂತಲಾ ಅವರು ಮನವಿ ಸ್ವೀಕರಿಸಿದರು.
ಪ್ರತಿಭಟನೆಯಲ್ಲಿ ಎಬಿವಿಪಿ ಪದಾಧಿಕಾರಿಗಳಾದ ಶ್ರೀನಿವಾಸ್, ಸುಶ್ಮಿತಾ, ತೇಜು, ಚರಣ್, ಗಿರೀಶ್, ಭರತ್ ಹಾಗೂ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.