ಬಳ್ಳಾರಿ : ಜಿಲ್ಲೆಯ ವಿವಿಧ ಇಲಾಖೆಗಳಡಿಯ ಕಾರ್ಯಕ್ರಮಗಳಿಗೆ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಅನುದಾನವನ್ನು ಸಮಪರ್ಕವಾಗಿ ಬಳಸಿಕೊಳ್ಳಬೇಕು ಎಂದು ಡಿಸಿ ಪ್ರಶಾಂತ ಕುಮಾರ ಮಿಶ್ರಾ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ನಗರದ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ 2024-25ನೇ ಸಾಲಿಗೆ ಅನುಸೂಚಿತ ಜಾತಿಗಳ ಉಪಯೋಜನೆ ಮತ್ತು ಅನುಸೂಚಿತ ಬುಡಕಟ್ಟು ಉಪಯೋಜನೆಯ ವಿವಿಧ ಇಲಾಖೆಗಳಡಿಯ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಅನುದಾನವನ್ನು ಪರಿಶಿಷ್ಟ ಜಾತಿಯ ಮತ್ತು ಪರಿಶಿಷ್ಟ ಪಂಗಡದವರ ಅಭಿವೃದ್ಧಿಗಾಗಿ ಉಪಯೋಗಿಸುತ್ತಿದ್ದು, ಪ್ರಗತಿಯಲ್ಲಿ ಹಿನ್ನಡೆಯಾಗಬಾರದು ಮತ್ತು ಉದ್ದೇಶಿತ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದರು.
ಜಿಲ್ಲೆಯ ಒಟ್ಟು ಎಸ್‌ಸಿಎಸ್‌ಪಿ ಅನುದಾನ 3977.90 ಲಕ್ಷ ರೂ. ಅನುದಾನ ಬಿಡುಗಡೆಯಾಗಿದೆ. ಟಿಎಸ್‌ಪಿ 5609.28 ಲಕ್ಷ ರೂ. ಅನುದಾನ ಬಿಡುಗಡೆಯಾಗಿದೆ. ಈ ಅನುದಾನವನ್ನು ಪರಿಶಿಷ್ಟರ ಅಭಿವೃದ್ಧಿಗೆ ಮೀಸಲಿಡಬೇಕು. ಯಾವುದೇ ರೀತಿಯಲ್ಲಿ ಹಣ ಪೋಲಾಗುವಂತಿಲ್ಲ ಎಂದು ಅಧಿಕಾರಿಗಳಿಗೆ ಸೂಚಿಸಿದರು. ಕೆಲ ಕಾಮಗಾರಿಗಳು ಹಾಗೂ ಪೂರ್ಣಗೊಳ್ಳದೇ ಇರುವ ಕಾಮಗಾರಿಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಜಿಲ್ಲಾಧಿಕಾರಿಗಳು, ತಮಗೆ ನೀಡಿದ ಕಾಮಗಾರಿಗಳನ್ನು ಸಕಾಲದಲ್ಲಿ ಪೂರ್ಣಗೊಳಿಸಬೇಕು ಮತ್ತು ಆ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು. ತಪ್ಪಿದಲ್ಲಿ ಅಧಿಕಾರಿಗಳೇ ಹೊಣೆ ಹೊರಬೇಕಾಗುತ್ತದೆ ಎಂದರು.