ಚಿತ್ರದುರ್ಗ: ಅಪ್ರಾಪ್ತಳ ಮೇಲೆ ಅತ್ಯಾಚಾರವೆಸಗಿದ್ದ ಅಪರಾಧಿಗೆ, ವಿಶೇಷ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಪೋಕ್ಸೋ) 10 ವರ್ಷ ಕಠಿಣ ಸಜೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ಬುಧವಾರ ತೀರ್ಪು ನೀಡಿದೆ.
ಚಳ್ಳಕೆರೆ ತಾಲೂಕಿನ ಗ್ರಾಮವೊಂದರ ನಿವಾಸಿ ಮನು ಆಲಿಯಾಸ್ ಮಲ್ಲಿಕಾರ್ಜುನ ಶಿಕ್ಷೆಗೆ ಒಳಗಾದ ಅಪರಾಧಿ. ಈತ, ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಆಗಾಗ್ಗೆ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದು, ಬಾಲಕಿ ಗರ್ಭಿಣಿಯಾಗಿದ್ದಳು. ಈ ಕುರಿತು ದೂರು ದಾಖಲಿಸಿಕೊಂಡು ತನಿಖೆ ನಡೆಸಿದ್ದ ಚಳ್ಳಕೆರೆ ಪೊಲೀಸ್ ಇನ್ಸ್‌ಪೆಕ್ಟರ್ ಆರ್.ಎಫ್.ದೇಸಾಯಿ ಅವರು ಕೋರ್ಟ್‌ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ್ದ ನ್ಯಾಯಾಧೀಶೆ ಬಿ.ಕೆ.ಕೋಮಲಾ ಅವರು, ಅಪರಾಧಿಗೆ ಕಠಿಣ ಸಜೆ, ದಂಡ ಹಾಗೂ ದಂಡ ಕಟ್ಟಲು ವಿಫಲವಾದಲ್ಲಿ ಆರು ತಿಂಗಳ ಸಾದಾ ಸಜೆ ವಿಧಿಸಿ ತೀರ್ಪು ನೀಡಿದ್ದಾರೆ. ನೊಂದ ಬಾಲಕಿಗೆ 4 ಲಕ್ಷ ರೂ. ಪರಿಹಾರ ಮತ್ತು ದಂಡದ ಮೊತ್ತ 50 ಸಾವಿರ ರೂ. ಕೊಡುವಂತೆ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಎಚ್.ಆರ್.ಜಗದೀಶ್ ವಾದಿಸಿದ್ದರು.