ಜಿಲ್ಲೆ

ಅಭ್ಯರ್ಥಿ ಗೆಲುವಿಗೆ ಕಾರ್ಯಕರ್ತರು ಸನ್ನದ್ಧರಾಗಿ

ನಂಜನಗೂಡು: ಕಾಂಗ್ರೆಸ್ ಗ್ಯಾರಂಟಿ ಕಾರ್ಡ್‌ಗಳನ್ನು ಮನೆ ಮನೆಗೆ ತಲುಪಿಸುವ ಮೂಲಕ ಪಕ್ಷದ ಕಾರ್ಯಕ್ರಮಗಳನ್ನು ಜನರಿಗೆ ಮನವರಿಕೆ ಮಾಡಿಕೊಟ್ಟು ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಶ್ರಮಿಸಲು ಕಾರ್ಯಕರ್ತರು ಸನ್ನದ್ಧರಾಗಬೇಕು ಎಂದು ಮಾಜಿ ಶಾಸಕ ಕಳಲೆ ಎನ್. ಕೇಶವಮೂರ್ತಿ ಹೇಳಿದರು.

ನಗರದ ರಾಷ್ಟ್ರಪತಿ ರಸ್ತೆಯ ಕಾಂಗ್ರೆಸ್ ಪಕ್ಷದ ಕಚೇರಿ ಮುಂಭಾಗ ಶುಕ್ರವಾರ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್‌ಗಳ ಭಿತ್ತಿಪತ್ರಗಳನ್ನು ಆಟೋ ರಿಕ್ಷಾಗಳಿಗೆ ಅಂಟಿಸುವ ಮೂಲಕ ಪ್ರಚಾರಕ್ಕೆ ಚಾಲನೆ ನೀಡಿ ಮಾತನಾಡಿದರು.

ಕಾಂಗ್ರೆಸ್ ಪಕ್ಷ ಈಗಾಗಲೇ ಗೃಹಲಕ್ಷ್ಮೀ ಯೋಜನೆ ಮೂಲಕ 2 ಸಾವಿರ ರೂ., 200 ಯೂನಿಟ್ ಉಚಿತ ವಿದ್ಯುತ್, 10 ಕೆಜಿ ಅಕ್ಕಿ ಉಚಿತವಾಗಿ ವಿತರಣೆ ಮಾಡುವುದಾಗಿ ತನ್ನ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೂ ನೀಡಿದ್ದ 165 ಭರವಸೆಗಳನ್ನು ಈಡೇರಿಸಲಾಗಿತ್ತು. ಆದ್ದರಿಂದ ಜನರಿಗೆ ಕಾಂಗ್ರೆಸ್ ಪಕ್ಷದ ಮೇಲೆ ನಂಬಿಕೆ ಬಂದಿದೆ. ರಾಜ್ಯದ ಎಲ್ಲೆಡೆ ಕಾಂಗ್ರೆಸ್ ಪಕ್ಷದ ಪರವಾದ ಅಲೆಯಿದ್ದು, ಕ್ಷೇತ್ರದಲ್ಲಿ ಜನರು ಬದಲಾವಣೆಯನ್ನು ಬಯಸಿದ್ದಾರೆ. ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ಘೋಷಣೆಗಳನ್ನು ಜನರಿಗೆ ತಿಳಿಸಿ ಮನವರಿಕೆ ಮಾಡಿಕೊಡುವ ಕೆಲಸ ಮಾಡಿ ಎಂದು ಕರೆ ನೀಡಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಎಂ. ಶಂಕರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಪ್ರಸಾದ್, ಪದ್ಮನಾಭ, ಮನೋಜ್, ನಗರಸಭಾ ಸದಸ್ಯರಾದ ಎಸ್.ಪಿ. ಮಹೇಶ್, ಮುಖಂಡರಾದ ಸಿಂಗಾರಿಪುರ ನಾಗರಾಜಯ್ಯ, ಶಿವಪ್ಪದೇವರು, ಸುರೇಶ್, ಶ್ರೀನಿವಾಸ್ ಇತರರಿದ್ದರು.