ಗೋಣಿಕೊಪ್ಪಲು: ಜಿಲ್ಲೆಯಲ್ಲಿ ಮಾನವ ಹಾಗೂ ವನ್ಯಜೀವಿ ಸಂಘರ್ಷ ತಡೆಗಟ್ಟುವ ನಿಟ್ಟಿನಲ್ಲಿ ತಿತಿಮತಿಯಲ್ಲಿ ರೈತ ಸಂಘದ ನೇತೃತ್ವದಲ್ಲಿ ಅರಣ್ಯ ಭವನದ ಆವರಣದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳನ್ನು ಪ್ರತಿಭಟನಾಕಾರರು ತರಾಟೆಗೆ ತೆಗೆದುಕೊಂಡರು.
ಜಿಲ್ಲೆಯ ನಾನಾ ಭಾಗಗಳಿಂದ ಆಗಮಿಸಿದ್ದ ರೈತರು ಪ್ರತಿಭಟನೆ ನಡೆಸಿದರು. ಬಳಿಕ ನಡೆದ ಸಭೆಯಲ್ಲಿ ಕಾಡುಪ್ರಾಣಿಗಳ ಹಾವಳಿಯಿಂದ ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳ ಗಮನ ಸೆಳೆದರು.
ಕೊಡಗು ಜಿಲ್ಲಾ ರೈತ ಸಂಘದ ಅಧ್ಯಕ್ಷ ಕಾಡ್ಯಮಾಡ ಮನು ಸೋಮಯ್ಯ ಮಾತನಾಡಿ, ಕಾಡು ಪ್ರಾಣಿಗಳು ಕೃಷಿ ಫಸಲುಗಳನ್ನು ನಾಶ ಮಾಡುತ್ತಿವೆ. ಕಾರ್ಮಿಕರು, ಬೆಳೆಗಾರರು, ಶಾಲಾ ವಿದ್ಯಾರ್ಥಿಗಳಲ್ಲಿ ಆತಂಕ ಸೃಷ್ಟಿ ಮಾಡುತ್ತಿವೆ. ಜನರು ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಅರಣ್ಯ ಇಲಾಖೆ ಯಾವುದೇ ಶಾಶ್ವತ ಯೋಜನೆಗಳನ್ನು ರೂಪಿಸದೆ ಅವೈಜ್ಞಾನಿಕ ಕಾಮಗಾರಿಗಳನ್ನು ನಡೆಸುವ ಮೂಲಕ ಜನರ ತೆರಿಗೆ ಹಣವನ್ನು ಪೋಲು ಮಾಡುತ್ತಿದೆ. ಯೋಜನೆಯ ಹಣವನ್ನು ಅಧಿಕಾರಿಗಳು ಭ್ರಷ್ಟಾಚಾರದ ಮೂಲಕ ಕಬಳಿಸುತ್ತಿದ್ದಾರೆ ಎಂದು ಆರೋಪಿಸಿದ ಅವರು, ಜಿಲ್ಲೆಯ ಜನರ ತಾಳ್ಮೆ ಪರೀಕ್ಷೆ ಮಾಡದೆ ಕಾಡುಪ್ರಾಣಿಗಳ ಹಾವಳಿಯನ್ನು ಶಾಶ್ವತವಾಗಿ ತಡೆಗಟ್ಟದಿದ್ದಲ್ಲಿ ಬೃಹತ್ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.
ಕಾರ್ಮಿಕ ಸಂಘಟನೆ ಮುಖಂಡ ಪಿ.ಆರ್.ಭರತ್ ಮಾತನಾಡಿ, ಜಿಲ್ಲೆಯಲ್ಲಿ ಆನೆ ಮಾನವ ಸಂಘರ್ಷ ಮಿತಿ ಮೀರಲು ಅರಣ್ಯ ಇಲಾಖೆ ಅಧಿಕಾರಿಗಳೇ ಕಾರಣ. ವರ್ಷವಿಡೀ ಕಷ್ಟಪಟ್ಟು ಬೆಳೆದ ಕೃಷಿ ಫಸಲು ಕಾಡು ಪ್ರಾಣಿಗಳ ಪಾಲಾಗುತ್ತಿದ್ದು ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ಹೊಟ್ಟೆಪಾಡಿನ ಜೀವನಕ್ಕಾಗಿ ಕೆಲಸಕ್ಕೆ ತೆರಳುವ ಕಾರ್ಮಿಕರು ಕಾಡು ಪ್ರಾಣಿಗಳ ಹಾವಳಿಂದ ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದರು.
ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸೋನಾಲ್ ವೃಷ್ಠಿ ಮಾತನಾಡಿ, ತಿಂಗಳ ಹಿಂದಷ್ಟೇ ಜಿಲ್ಲೆಗೆ ಆಗಮಿಸಿದ್ದು ಕಾಡು ಪ್ರಾಣಿಗಳ ಹಾವಳಿ ಹಾಗೂ ಅರಣ್ಯ ಇಲಾಖೆಗೆ ಸಂಬಂಧಪಟ್ಟ ಮಾಹಿತಿ ಪಡೆದುಕೊಳ್ಳಲಾಗಿದೆ. ವೈಜ್ಞಾನಿಕ ಪರಿಹಾರ ಕಂಡುಕೊಳ್ಳಲು ಯೋಜನೆಗಳನ್ನು ರೂಪಿಸಲಾಗಿದೆ. ನಾಗರಹೊಳೆ ವ್ಯಾಪ್ತಿ ಸೇರಿದಂತೆ ಸುಮಾರು 421 ಕಿ.ಮೀ ಈಪಿಟಿ ಮಾಡಲಾಗಿದೆ. ಇದರಲ್ಲಿ 433 ಕಿ.ಮೀ ಸೋಲಾರ್ ಬೇಲಿ ನಿರ್ಮಿಸಿದ್ದು 141 ಕಿ.ಮೀ ರೈಲ್ವೆ ಬ್ಯಾರಿಕೇಡ್ ಅಳವಡಿಸಲಾಗಿದೆ. ರೇಡಿಯೋ ಕಾಲರ್ ಸೇರಿದಂತೆ ವಿನೂತನ ತಂತ್ರಜ್ಞಾನದ ಎ.ಐ ಕ್ಯಾಮರಾಗಳನ್ನು ಅಳವಡಿಸಿ ಕಾಡು ಪ್ರಾಣಿಗಳ ಹಾವಳಿ ಬಗ್ಗೆ ನಿಗಾ ವಹಿಸಲಾಗಿದ್ದು ಕಾಲಕಾಲಕ್ಕೆ ರೈತರಿಗೆ ಮಾಹಿತಿ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ ಮಾತನಾಡಿ, ಸರ್ಕಾರ ಆನೆಗಳ ಪುನರ್ವಸತಿಗಾಗಿ 2 ಸಾವಿರ ಎಕರೆ ಭೂಮಿಯಲ್ಲಿ ಕಾರ್ಯ ಯೋಜನೆ ರೂಪಿಸುತ್ತಿದ್ದು ಹಂತ ಹಂತವಾಗಿ ಸಮಸ್ಯೆ ಬಗ್ಗೆ ಹರಿಯಲಿದೆ ಎಂದು ಹೇಳಿದರು.
ಈ ಸಂದರ್ಭ ಆಕ್ರೋಶಗೊಂಡ ರೈತರು ಸಂಕೇತ್ ಪೂವಯ್ಯ ಅವರನ್ನೇ ತರಾಟೆಗೆ ತೆಗೆದುಕೊಂಡರು. ಬಳಿಕ ರೈತ ಮುಖಂಡರು ಮನವಿ ಪತ್ರವನ್ನು ಅರಣ್ಯ ಇಲಾಖೆ ಹಾಗೂ ಸರ್ಕಾರಕ್ಕೆ ಸಲ್ಲಿಸಿದರು. ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಅಧಿಕಾರಿ ಸೀಮಾ, ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್, ವಿರಾಜಪೇಟೆ ಉಪವಿಭಾಗದ ಅರಣ್ಯ ಸಂರಕ್ಷಣಾಧಿಕಾರಿ ಜಗನ್ನಾಥ್, ಉಪ ಅರಣ್ಯ ಸಂರಕ್ಷಣಾಧಿಕಾರಿ ನೆಹರು, ಕೊಡಗು ರೈತ ಸಂಘ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಟ್ರುಮಾಡ ಸುಜಯ್ ಬೋಪಯ್ಯ, ಜಿಲ್ಲಾ ಪ್ರಧಾನ ಸಂಚಾಲಕ ಪುಚ್ಚಿಮಾಡ ಸುಭಾಷ್ ಸುಬ್ಬಯ್ಯ, ಸಹ ಕಾರ್ಯದರ್ಶಿ ಅಜ್ಜಮಾಡ ಚಂಗಪ್ಪ, ಜಿಲ್ಲಾ ಖಜಾಂಚಿ ಇಟ್ಟೀರ ಸಭಿತ ಭೀಮಯ್ಯ, ವಿರಾಜಪೇಟೆ ತಾಲೂಕು ಅಧ್ಯಕ್ಷ ಬಾಚಮಾಡ ಭವಿ ಕುಮಾರ್, ಸೋಮವಾರಪೇಟೆ ಹೂವಯ್ಯ, ಪೊನ್ನಂಪೇಟೆ ತಾಲೂಕು ಅಧ್ಯಕ್ಷ ಅಲೆಮಾಡ ಮಂಜುನಾಥ್ ಹಾಜರಿದ್ದರು.