ಜಿಲ್ಲೆ

ಅರಸು ಸಾಮಾಜಿಕ ನ್ಯಾಯದ ಹರಿಕಾರ

ಕಲಬುರಗಿ: ಮಾಜಿ ಮುಖ್ಯಮಂತ್ರಿ ದಿ.ದೇವರಾಜ ಅರಸು ದೂರದೃಷ್ಟಿ ಆಡಳಿತದ ನಿರ್ಧಾರಗಳು ಕ್ರಾಂತಿಕಾರಿ ಬದಲಾವಣೆಗೆ ನಾಂದಿಯಾದವು. ಕರ್ನಾಟಕ ರಾಜಕೀಯ ಭೂದೃಶ್ಯವನ್ನು ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಸಾಮಾಜಿಕ ನ್ಯಾಯ ಮತ್ತು ಸಬಲೀಕರಣಕ್ಕಾಗಿ ಹೋರಾಡಿದ ಮಹಾನ್ ನಾಯಕ ಎಂದು ಸಂಸದ ಡಾ.ಉಮೇಶ ಜಾಧವ್ ಬಣ್ಣಿಸಿದರು.
ನಗರದ ಡಾ.ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಡಿ.ದೇವರಾಜ ಅರಸು ಹಿಂದುಳದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಹಾಗೂ ರಾಜ್ಯ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ ಸಹಯೋಗದಡಿ ಭಾನುವಾರ ಆಯೋಜಿಸಿದ್ದ ದೇವರಾಜ ಅರಸು ೧೦೮ನೇ ಜನ್ಮದಿನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸೇರಿ ಅಂಚಿನಲ್ಲಿರುವ ಸಮುದಾಯಗಳಿಗೆ ಮೀಸಲಾತಿ ನೀತಿ ಅನುಷ್ಠಾನ, ಸಮಾನ ಅವಕಾಶ ಒದಗಿಸಲು ಮತ್ತು ಅನನುಕೂಲ ಸ್ಥಿತಿಯಲ್ಲಿರುವ ಗುಂಪುಗಳ ಸಬಲೀಕರಣಕ್ಕೆ ಶಿಕ್ಷಣ, ಸರ್ಕಾರಿ ಉದ್ಯೋಗ ಮತ್ತು ರಾಜಕೀಯ ಪ್ರಾತಿನಿಧ್ಯದಲ್ಲಿ ಮೀಸಲಾತಿ ಕೋಟಾ ಪರಿಚಯಿಸಿದರು. ಈ ನೀತಿಗಳು ಸಮಾಜದ ವಿವಿಧ ವಿಭಾಗಗಳ ನಡುವಿನ ಅಂತರ ಕಡಿಮೆ ಮಾಡಲು ಮತ್ತು ಸಾಮಾಜಿಕ ಸಾಮರಸ್ಯ ಉತ್ತೇಜಿಸುವ ಗುರಿ ಹೊಂದಿವೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಶಾಸಕ ಅಲ್ಲವiಪ್ರಭು ಪಾಟೀಲ್ ಮಾತನಾಡಿದರು. ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಮಾತನಾಡಿ, ಹಿಂದುಳಿದ ವರ್ಗದವರ ಕಲ್ಯಾಣಕ್ಕಾಗಿ ಶ್ರಮಿಸಿದ್ದ ಅರಸು ಬಸವಣ್ಣನವರ ಸರ್ವರಿಗೆ ಸಮಬಾಳು, ಸಮಪಾಲು ತತ್ವದಡಿ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದರು. ದೀನ-ದುರ್ಬಲರ ಏಳಿಗೆಗಾಗಿ ಯೋಜನೆಗಳನ್ನು ಜಾರಿಗೆ ತಂದಿದ್ದರು ಎಂದರು.
ಹಿAದುಳಿದ ಜಾತಿಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಮಹಾಂತೇಶ ಕೌಲಗಿ ಮಾತನಾಡಿದರು. ಅರಸು ಜೀವನ ಸಾಧನೆ ಕುರಿತು ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕ ಡಾ.ಪದ್ಮರಾಜ ರಾಸಣಗಿ ವಿಶೇಷ ಉಪನ್ಯಾಸ ನೀಡಿದರು. ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಜಿಪಂ ಉಪ ಕಾರ್ಯದರ್ಶಿ ಲಕ್ಷ್ಮಣ ಶ್ರೀಗೇರಿ, ತಹಸೀಲ್ದಾರ್ ನಾಗಮ್ಮ ಕಟ್ಟಿಮನಿ, ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ನಾರಾಯಣರಾವ್ ಸುರವಸೆ, ಬಸವರಾಜ ಬೂದಿಹಾಳ, ಸವಿತಾ ಸಮಾಜದ ಮುಖಂಡ ಅಶೋಕ ಡೈಮಂಡ್ ಇತರರಿದ್ದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಸದಾಶಿವ ನಾರಾಯಣಕರ್ ಸ್ವಾಗತಿಸಿದರು. ಇದಕ್ಕೂ ಮುನ್ನ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಿಂದ ರಂಗಮಂದಿರವರೆಗೆ ಅರಸು ಭಾವಚಿತ್ರದ ಮೆರವಣಿಗೆ ನಡೆಯಿತು. ಮುರಾರ್ಜಿ ದೇಸಾಯಿ ವಸತಿ ಶಾಲೆ ಮಕ್ಕಳಿಂದ ನಾಟಕ ಪ್ರದರ್ಶನ ನಡೆಯಿತು. ೨೦೨೨-೨೩ರ ಎಸ್ಸೆಸ್ಸೆಲ್ಸಿ, ಪಿಯುಸಿ ದ್ವಿತೀಯ, ಪದವಿ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಸತಿ ಶಾಲೆ, ವಸತಿನಿಲಯ ವಿದ್ಯಾರ್ಥಿಗಳನ್ನು ಸತ್ಕರಿಸಲಾಯಿತು.