ಅರಕಲಗೂಡು: ತಾಲೂಕಿನ ಮಲ್ಲಿಪಟ್ಟಣ ಗ್ರಾಮ ಪಂಚಾಯಿತಿ ವತಿಯಿಂದ ಅಧ್ಯಕ್ಷ ಎಂ.ಆರ್.ರಂಗಸ್ವಾಮಿ ಅಧ್ಯಕ್ಷತೆಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಗ್ರಾಮಸಭೆಗೆ ಅರ್ಜಿಗಳನ್ನು ಸಲ್ಲಿಸಲು ಜನರ ನೂಕು ನುಗ್ಗಲು ಏರ್ಪಟ್ಟಿತ್ತು.
ಗ್ರಾಮದ ಸಮುದಾಯ ಭವನದಲ್ಲಿ ನಡೆದ ಸಭೆಯಲ್ಲಿ ಅಪಾರ ಜನರು ಸೇರಿದ್ದು 150ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾದವು. ವಸತಿ, ಕೊಟ್ಟಿಗೆ, ರಸ್ತೆ, ಚರಂಡಿ ನಿರ್ಮಾಣಕ್ಕೆ, ಬೀದಿ ದೀಪಗಳನ್ನು ಸರಿಪಡಿಸಲು ಹಾಗೂ ವಿವಿಧ ಇಲಾಖೆಗಳಿಂದ ಸಿಗುವ ಸವಲತ್ತುಗಳನ್ನು ಒದಗಿಸುವಂತೆ ಜನರು ಅಹವಾಲು ಸಲ್ಲಿಸಿದರು.
ಗ್ರಾಮಸಭೆ, ವಾರ್ಡ್ ಸಭೆಗಳಲ್ಲಿ ಜನರಿಂದ ಸ್ವೀಕರಿಸಿದ ಅರ್ಜಿಗಳನ್ನು ಪರಿಶೀಲಿಸಿ ಆದ್ಯತೆ ಮೇರೆಗೆ ಹಂತ ಹಂತವಾಗಿ ಸೌಲಭ್ಯಗಳನ್ನು ಒದಗಿಸಿ ಜನರ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ಕೈಗೊಳ್ಳುವುದಾಗಿ ಅಧ್ಯಕ್ಷ ರಂಗಸ್ವಾಮಿ ಭರವಸೆ ನೀಡಿದರು.
ಗ್ರಾಮಸಭೆ ನೋಡಲ್ ಅಧಿಕಾರಿ ಶಿವಕುಮಾರ್ ಮಾತನಾಡಿ, ಗ್ರಾಪಂ ಅಧ್ಯಕ್ಷರು ಮತ್ತು ಸದಸ್ಯರಿಗಿಂತ ಮುಖ್ಯವಾಗಿ ಪಂಚಾಯಿತಿ ಮಟ್ಟದಲ್ಲಿನ ಅಧಿಕಾರವನ್ನು ಜನರ ಬಳಿಗೆ ಕೊಂಡೊಯ್ಯುವ ಉದ್ದೇಶದಿಂದ ಸರ್ಕಾರ ಇಂತಹ ಸಭೆಗಳನ್ನು ನಡೆಸಲು ಆದೇಶಿಸಿದೆ. ವಾರ್ಡ್ ಸಭೆ ಹಾಗೂ ಗ್ರಾಮಸಭೆಗಳನ್ನು ಜನರು ಅಸ್ತ್ರಗಳನ್ನಾಗಿ ಬಳಸಿಕೊಂಡು ತಮ್ಮ ಅಹವಾಲುಗಳನ್ನು ಸಲ್ಲಿಸಿ ಸವಲತ್ತುಗಳನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು.