ಹೊಳೆನರಸೀಪುರ: ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ತೀರ್ಮಾನಿಸಿದೆ ಎಂದು ತಹಸೀಲ್ದಾರ್ ಕೆ.ಕೆ.ಕೃಷ್ಣಮೂರ್ತಿ ತಿಳಿಸಿದರು.
ತಾಲೂಕು ಕಚೇರಿಯ ಸಭಾಂಗಣದಲ್ಲಿ ಎಲ್ಲ ಇಲಾಖೆಯ ಅಧಿಕಾರಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳ ಜತೆ ಮಂಗಳವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಕಳೆದೆರಡು ವರ್ಷಗಳಿಂದ ಕೋವಿಡ್ ಕಾರಣದಿಂದ ರಾಷ್ಟ್ರೀಯ ಹಬ್ಬಗಳನ್ನು ವಿಜೃಂಭಣೆಯಿಂದ ಆಚರಿಸಲು ಆಗಿರಲಿಲ್ಲ. ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಿಸಲು ತೀರ್ಮಾನಿಸಿದ್ದು, ತಾಲೂಕಿನ ಎಲ್ಲ ಸಂಘ- ಸಂಸ್ಥೆಗಳ ಪದಾಧಿಕಾರಿಗಳು ಸಹಕರಿಸಬೇಕೆಂದು ಕೋರಿದರು.
ನಾಡಿನ ಅಧಿದೇವತೆ ಭುವನೇಶ್ವರಿ ಭಾವಚಿತ್ರವನ್ನು ತೆರೆದ ವಾಹನದಲ್ಲಿರಿಸಿ ಹೇಮಾವತಿ ವೃತ್ತದಿಂದ ಆರಂಭಿಸಿ ಮುಖ್ಯರಸ್ತೆ, ಸುಭಾಷ್ ವೃತ್ತ, ಅಂಬೇಡ್ಕರ್ ವೃತ್ತ, ಜಯಚಾಮರಾಜೇಂದ್ರ ವೃತ್ತ ಸೇರಿದಂತೆ ಮುಖ್ಯರಸ್ತೆಗಳಲ್ಲಿ ಸಂಚರಿಸಿ ಕಾರ್ಯಕ್ರಮ ನಡೆಯುವ ಬಯಲು ರಂಗಮಂದಿರಕ್ಕೆ ಪ್ರವೇಶಿಸಲಿದೆ ಹಾಗೂ ಇದರ ಜತೆ ಶಾಲಾ ವಿದ್ಯಾರ್ಥಿಗಳು ಶಿಸ್ತಿನ ಪಥಸಂಚಲನ ನಡೆಸಿಕೊಡಲಿದ್ದಾರೆ ಎಂದು ಹೇಳಿದರು.
ಬಯಲು ರಂಗಮಂದಿರದ ಧ್ವಜಸ್ತಂಭದಲ್ಲಿ ರಾಷ್ಟ್ರಧ್ವಜ ಹಾಗೂ ಕನ್ನಡ ಬಾವುಟವನ್ನು ಆರೋಹಣ ಮಾಡಲಾಗುವುದು ಎಂದರು. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವವರನ್ನು ಪರಿಗಣಿಸಿ ತಾಲೂಕು ಆಡಳಿತದ ವತಿಯಿಂದ ಸನ್ಮಾನಿಸಲಾಗುವುದು ಎಂದು ತಿಳಿಸಿದರು.
ಪೂರ್ವಭಾವಿ ಸಭೆಯಲ್ಲಿ ಪುರಸಭೆ ಅಧ್ಯಕ್ಷೆ ಜ್ಯೋತಿ ಮಂಜುನಾಥ್, ಉಪಾಧ್ಯಕ್ಷೆ ತ್ರಿಲೋಚನಾ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಗೋಪಾಲ್, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪುಟ್ಟೇಗೌಡ, ನೌಕರರ ಸಂಘದ ಅಧ್ಯಕ್ಷ ಕುಮಾರಸ್ವಾಮಿ, ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷೆ ಪ್ರೇಮಾ ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು.