ಬಳ್ಳಾರಿ : ಮಾಜಿ ಸಿಎಂ ಡಿ.ದೇವರಾಜು ಅರಸು ಅವರ ಜನ್ಮ ದಿನಾಚರಣೆಯನ್ನು ಆ. 20 ರಂದು ಜಿಲ್ಲಾಡಳಿತದಿಂದ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಎಡಿಸಿ ಮೊಹಮ್ಮದ್ ಝುಬೇರ್ ಹೇಳಿದರು.
ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಡಿ.ದೇವರಾಜು ಅರಸು ಅವರ 109 ನೇ ಜನ್ಮ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಬೆಳಗ್ಗೆ 10.30 ಕ್ಕೆ ನಗರದ ವಾಲ್ಮೀಕಿ ಭವನದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲಾಮಟ್ಟದ ಅಧಿಕಾರಿಗಳು, ಎಲ್ಲ ಸಂಘ ಸಂಸ್ಥೆಯ ಮುಖಂಡರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಶಿಷ್ಠಾಚಾರದಂತೆ ಆಹ್ವಾನ ಪತ್ರಿಕೆಯನ್ನು ಮುದ್ರಿಸಿ ಗಣ್ಯರನ್ನು ಆಹ್ವಾನಿಸಬೇಕು. ಕುಡಿಯುವ ನೀರಿನ ವ್ಯವಸ್ಥೆ , ಸ್ವಚ್ಛತೆ ಕೈಗೊಳ್ಳಬೇಕು ಎಂದು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.
ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ಮಕ್ಕಳಿಗೆ ವಿವಿಧ ಸ್ಪರ್ಧೆ ಆಯೋಜಿಸಿ ವಿಜೇತರಿಗೆ ಬಹುಮಾನ ವಿತರಿಸಲಾಗುವುದು. ಕಳೆದ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ ಮತ್ತು ಪಿಹೆಚ್‌ಡಿ ಪದವಿ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ಸಾವಯವ ಕೃಷಿ ಪದ್ಧತಿಯಲ್ಲಿ ಯಶಸ್ಸು ಗಳಿಸಿದ ಹಿಂದುಳಿದ ವರ್ಗಗಳ ರೈತರನ್ನು ಸನ್ಮಾನಿಸಲಾಗುವುದು ಎಂದರು.