ಮೈಸೂರು: ಅಲೆಮಾರಿ ಹಾಗೂ ಆದಿವಾಸಿ ಸಮುದಾಯದ ಜನರು ನಿವೇಶನ, ಶೌಚಗೃಹ, ಕುಡಿಯುವ ನೀರು ಸೇರಿದಂತೆ ಹಲವಾರು ಸಮಸ್ಯೆ ಎದುರಿಸುತ್ತಿದ್ದು, ಈ ಸಮಸ್ಯೆಗಳಿಗೆ ಶೀಘ್ರದಲ್ಲಿ ಪರಿಹಾರ ಕಲ್ಪಿಸಿಕೊಡಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಹೇಳಿದರು.
ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲಾ ಪಂಚಾಯಿತಿ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಆದಿವಾಸಿ ಮತ್ತು ಹಿಂದುಳಿದ ವರ್ಗಗಳ ಅಲೆಮಾರಿ ಸಮುದಾಯಗಳ ಕುಂದುಕೊರತೆ ಸಭೆಯಲ್ಲಿ ಮಾತನಾಡಿದರು.
ಜಾತಿ ಪ್ರಮಾಣ ಪತ್ರದ ಸಮಸ್ಯೆ, ಭೂಮಿ ಸಮಸ್ಯೆ, ವಿದ್ಯುತ್ ಸಮಸ್ಯೆ, ಸ್ಮಶಾನ ಸಮಸ್ಯೆ ಸೇರಿದಂತೆ ಇನ್ನಿತರ ಸಮಸ್ಯೆಗಳ ಬಗ್ಗೆ ಮನವಿ ಸಲ್ಲಿಸಿದ್ದು, ಶೀಘ್ರದಲ್ಲಿ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುವುದು ಎಂದು ಹೇಳಿದರು.
ಅಲೆಮಾರಿಗಳ ಮನವಿಗಳನ್ನು ಸಂಬಂಧಿಸಿದ ತಹಸೀಲ್ದಾರ್ ಅವರಿಗೆ ಕಳುಹಿಸಲಾಗುವುದು. ತಮ್ಮ ಮನವಿಗಳಿಗೆ ನಂಬರ್ ಕೊಟ್ಟು ಅವುಗಳನ್ನು ಒಂದು ತಿಂಗಳ ಒಳಗೆ ಪರಿಹರಿಸಲಾಗುವುದು. ನಂತರ ಸಭೆ ಕರೆದು ಈ ಸಮಸ್ಯೆಗಳ ಪರಿಹಾರ ಕುರಿತು ಪರಿಶೀಲನಾ ಸಭೆ ನಡೆಸಲಾಗುವುದು ಎಂದು ತಿಳಿಸಿದರು.
ಜಿಲ್ಲೆಯ ಎಲ್ಲ ತಾಲೂಕಿನ ತಹಸೀಲ್ದಾರ್ ಹಾಗೂ ತಾಪಂ ಇಒಗಳು ತಮ್ಮ ತಮ್ಮ ವ್ಯಾಪ್ತಿಗೆ ಬರುವಂತಹ ಸಮಸ್ಯೆಗಳಿರುವ ಸ್ಥಳಗಳಿಗೆ ಭೇಟಿ ನೀಡಬೇಕು. ತಮ್ಮ ಹಂತದಲ್ಲಿ ಪರಿಹಾರಗೊಳ್ಳುವ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸಬೇಕು. ಅದರ ವರದಿಯನ್ನು ನೀಡಬೇಕು ಎಂದು ಡಿಸಿ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಆದಿವಾಸಿ ಮತ್ತು ಹಿಂದುಳಿದ ವರ್ಗಗಳ ಅಲೆಮಾರಿಯ ಕೊರಜ, ಅಕ್ಕಿ-ಪಿಕ್ಕಿ, ಯಳವ, ದೊಂಬರ, ಕೊರ್ಮ, ಜೇನುಕುರುಬ, ಸೋಲಿಗ ಸೇರಿದಂತೆ ಇನ್ನಿತರ ಸಮುದಾಯದ ಜನರು ತಮ್ಮಲ್ಲಿರುವ ನಿವೇಶನ, ಕುಡಿಯುವ ನೀರು, ಚರಂಡಿ, ಸ್ಮಶಾನ, ವಿದ್ಯುತ್ ಸೇರಿದಂತೆ ಹಲವಾರು ಸಮಸ್ಯೆಗಳ ಅಹವಾಲುಗಳನ್ನು ಲಿಖಿತ ರೂಪದಲ್ಲಿ ಜಿಲ್ಲಾಧಿಕಾರಿಗೆ ನೀಡಿದರು.
ಅಲೆಮಾರಿ ಬುಡಕಟ್ಟು ಮಹಾಸಭಾದ ಗೌರವಾಧ್ಯಕ್ಷ ಸಿ.ಎಸ್.ದ್ವಾರಕನಾಥ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕೆ.ಎಂ.ಸವಿತಾ, ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ. ಕೆ.ಎನ್.ಬಸವರಾಜು, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ರಂಗೇಗೌಡ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಪಿ.ಸಿ. ಕುಮಾರಸ್ವಾಮಿ ಇತರರು ಇದ್ದರು.