ಚಿತ್ರದುರ್ಗ: ಜನರ ಅಹವಾಲು ಸ್ವೀಕರಿಸಿ ಅವರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ಥಾಪಿಸಿರುವ ಶಾಶ್ವತ ಕೌಂಟರ್ ಫೆ. 1 ರಿಂದ ಕಾರ‌್ಯಾರಂಭವಾಗಲಿದೆ ಎಂದು ಡಿಸಿ ಟಿ.ವೆಂಕಟೇಶ್ ಹೇಳಿದರು.
ನಗರದಲ್ಲಿ ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಹತ್ತು ವರ್ಷಗಳ ಹಿಂದೆ ಉಪವಿಭಾಗಾಧಿಕಾರಿಯಾಗಿ ಜಿಲ್ಲೆಯಲ್ಲಿ ಕೆಲಸ ಮಾಡಿದ ಅನುಭವವಿದೆ. ಸಮಸ್ಯೆಗಳ ಅರಿವೂ ಇದೆ. ನೂರಾರು ಕಿ.ಮೀ. ದೂರದ ಊರುಗಳಿಂದ ಬರುವಂಥ ಸಾರ್ವಜನಿಕರು, ಡಿಸಿ ಇಲ್ಲ ಎಂದು ನಿರಾಶೆಯಿಂದ ಮರಳುವಂತಾಗಬಾರದು. ಅವರ ಅಹವಾಲು ಸ್ವೀಕರಿಸಿ ಸೂಕ್ತ ಪರಿಹಾರ ಕಲ್ಪಿಸಲು ಸ್ಥಾಪಿಸಿರುವ ಕೌಂಟರ್‌ಗೆ ಪ್ರತ್ಯೇಕ ತಂತ್ರಾಂಶವನ್ನೂ ಸಿದ್ಧಪಡಿಸಲಾಗುತ್ತದೆ. ಕೌಂಟರ್‌ನಲ್ಲಿ ಸ್ವೀಕರಿಸಿದ ಅರ್ಜಿಗಳು, ಅವುಗಳ ಕಾಲಮಿತಿಯೊಳಗೆ ವಿಲೇವಾರಿ ಮಾಡುವುದು, ಪರಿಹಾರ ಕಲ್ಪಿಸಿರುವ ಕುರಿತಂತೆ ಪ್ರತಿ ತಿಂಗಳು ಪರಿಶೀಲಿಸಲಾಗುವುದು ಎಂದರು.
ಜಿಲ್ಲಾದ್ಯಂತ ಪ್ರವಾಸ ನಡೆಸಿ ಜನರ ಸಮಸ್ಯೆಗಳಿಗೆ ಸಾಧ್ಯವಾದಷ್ಟು ಸ್ಥಳದಲ್ಲೇ ಪರಿಹಾರ ಕಲ್ಪಿಸುವ ಮೂಲಕ ಜನಸ್ನೇಹಿ ಆಡಳಿತಕ್ಕೆ ಒತ್ತು ನೀಡಲಾಗುವುದು. ಜಿಲ್ಲಾಸ್ಪತ್ರೆ ಸಮಸ್ಯೆಗಳು, ನಗರದ ರಸ್ತೆ ಸೇರಿದಂತೆ ಮೂಲ ಸೌಕರ್ಯಗಳ ಸುಧಾರಣೆಗೆ ಗಮನ ಹರಿಸಲಾಗುವುದು. ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಸೂಕ್ತ ಅನುಕೂಲ ಕಲ್ಪಿಸಲಾಗುವುದು. ಬಸ್ಸುಗಳ ಸಂಖ್ಯೆ ಹೆಚ್ಚಿಸಬೇಕಿದ್ದು, ಈ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಈಗಾಗಲೇ ಸಭೆ ನಡೆಸಿದ್ದೇನೆ ಎಂದು ಹೇಳಿದರು.
ನಗರದ ಸಬ್‌ರಿಜಿಸ್ಟ್ರಾರ್ ಕಚೇರಿ ಸ್ಥಳಾಂತರಗೊಳಿಸುವ ಇಂಗಿತ ವ್ಯಕ್ತಪಡಿಸಿದ ಜಿಲ್ಲಾಧಿಕಾರಿ, ಸದ್ಯಕ್ಕೆ ತಾತ್ಕಾಲಿಕ ಕಟ್ಟಡವನ್ನು ಗುರುತಿಸು ವುದಾಗಿ ಹೇಳಿದರು.
ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಜಿಲ್ಲಾ ವಾರ್ತಾಧಿಕಾರಿ ಬಿ.ವಿ.ತುಕಾರಾಂರಾವ್ ಇದ್ದರು.