ದಾವಣಗೆರೆ: ಪರಿಶಿಷ್ಟ ಪಂಗಡ, ಹಿಂದುಳಿದ, ಅಲ್ಪಸಂಖ್ಯಾತ ಸಮುದಾಯಗಳು ಆರ್ಥಿಕ ಅಭಿವೃದ್ಧಿಯಾದಾಗ ರಾಷ್ಟ್ರವೇ ಬಲಿಷ್ಠವಾಗಲಿದೆ ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಹೇಳಿದರು.
ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 107ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಅರಸು ಅವರು ಹಾಕಿಕೊಟ್ಟ ಧ್ಯೇಯೋದ್ದೇಶಗಳಿಗೆ ಪೂರಕವಾಗಿ ಎಲ್ಲ ಸಮುದಾಯಗಳು ಅಭಿವೃದ್ಧಿಯಾಗಬೇಕು. ಇದರ ಮೂಲಕ ಅವಕಾಶ ವಂಚಿತವರನ್ನು ಮುಖ್ಯವಾಹಿನಿಗೆ ತರುವ ಕೆಲಸವಾಗಬೇಕು. ಕುಲಕಸುಬುಗಳನ್ನು ನೆಚ್ಚಿಕೊಂಡ ಶೋಷಿತ ಮತ್ತು ಹಿಂದುಳಿದ ಸಮುದಾಯಗಳ ಜನರ ಕಲ್ಯಾಣಕ್ಕಾಗಿ ಸರ್ಕಾರ ನಿಗಮಗಳನ್ನು ಸ್ಥಾಪಿಸಬೇಕಿದೆ ಎಂದು ಆಶಿಸಿದರು.
ಉಪನ್ಯಾಸಕ ದಾದಾಪೀರ್ ನವಿಲೇಹಾಳ್ ಮಾತನಾಡಿ, ದೇಶದಲ್ಲಿ ಮೊದಲ ಬಾರಿಗೆ ಭೂ ಸುಧಾರಣಾ ಕಾಯ್ದೆ ಜಾರಿಗೆ ತಂದು, ಸಾವಿರಾರು ಎಕರೆ ಭೂಮಿಯನ್ನು ಭೂ ರಹಿತ ಕುಟುಂಬಗಳಿಗೆ ಒದಗಿಸಿ ಆತ್ಮಾಭಿಮಾನ ತುಂಬಿದವರು ದೇವರಾಜ ಅರಸು ಎಂದರು.
ಗೊಲ್ಲರ ಯಾದವ ಸಂಘಕ್ಕೆ ದೇವರಾಜ ಅರಸು ಪ್ರಶಸ್ತಿ ವಿತರಿಸಲಾಯಿತು. ಸಂಘದ ಅಧ್ಯಕ್ಷ ಎಸ್. ತಿಪ್ಪೇಸ್ವಾಮಿ, ಜಿಪಂ ಸಿಇಒ ಡಾ.ಎ.ಚನ್ನಪ್ಪ, ಎಸ್ಪಿ ಸಿ.ಬಿ.ರಿಷ್ಯಂತ್, ದೂಡಾ ಅಧ್ಯಕ್ಷ ಸುರೇಶ್, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ರಮೇಶ್ ಆರ್.ಮದರಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ರೇಷ್ಮಾ ಕೌಸರ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜಾನಾಯ್ಕ, ಅಂಬೇಡ್ಕರ್ ಅಭಿವೃದ್ಧಿ ನಿಗಮದ ರಮೇಶ್ ಇತರರಿದ್ದರು. ಕಾರ್ಯಕ್ರಮಕ್ಕೂ ಮುನ್ನ ವಿವಿಧ ಕಲಾ ತಂಡಗಳೊಂದಿಗೆ ದೇವರಾಜ ಅರಸು ಅವರ ಭಾವಚಿತ್ರ ಮೆರವಣಿಗೆ ನಡೆಸಲಾಯಿತು.