ಚಿತ್ರದುರ್ಗ: ಡಾ. ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 1ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನವನ್ನು ಆಚರಿಸಲಾಗುತ್ತಿದೆ ಎಂದು ಎಡಿಸಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.
ಅಪರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಜಿಲ್ಲಾ ಮಟ್ಟದ ವ್ಯಸನ ಮುಕ್ತ ದಿನಾಚರ ಣೆ ಹಾಗೂ ವ್ಯಸನ ಮುಕ್ತ ಶಿಬಿರದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಎಲ್ಲ ತಾಲೂಕುಗಳಲ್ಲೂ ವ್ಯಸನ ಮುಕ್ತ ದಿನಾಚರಣೆ ಹಾಗೂ ಜಾಗೃತಿ ಜಾಥಾ ಆಯೋಜಿಸಬೇಕು. ಶಿವಯೋಗಿಗಳ ಜನ್ಮ ದಿನವನ್ನು ವ್ಯಸನಮುಕ್ತ ದಿನವನ್ನಾಗಿ ಆಚರಿಸಲು ಸರ್ಕಾರ ಆದೇಶಿಸಿದೆ. ಅಂದು ಬೆಳಗ್ಗೆ 11ಕ್ಕೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾರ‌್ಯಕ್ರಮ ಏರ್ಪಡಿಸಲಾಗುವುದು ಎಂದರು.
ಬೆಳಗ್ಗೆ 9ಕ್ಕೆ ಒನಕೆ ಓಬವ್ವ ವೃತ್ತದ ಬಳಿ ಆರಂಭವಾಗುವ ಜಾಥಾದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಂಡು, ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮಗಳೆಡೆ ಜಾಗೃತಿ ಮೂಡಿಸಲಾಗುತ್ತದೆ ಎಂದು ಹೇಳಿದರು..
ಮದ್ಯ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮ ಕುರಿತು ಸರ್ಕಾರಿ ಕಚೇರಿ ಅಧಿಕಾರಿ, ಸಿಬ್ಬಂದಿ ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧನೆ ಜತೆಗೆ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲಾಗುತ್ತದೆ ಎಂದರು.
ಆರೋಗ್ಯ ಇಲಾಖೆ ಜಿಲ್ಲಾಮಟ್ಟದಲ್ಲಿ ಆಗಸ್ಟ್‌ನಲ್ಲೇ ಮದ್ಯವರ್ಜನ ಶಿಬಿರ ಹಾಗೂ ವಿಚಾರ ಸಂಕಿರಣ ಏರ್ಪಡಿಸುವಂತೆ ಡಿಎಚ್‌ಒ ಡಾ.ಜಿ.ಪಿ.ರೇಣುಪ್ರಸಾದ್ ಹಾಗೂ ಜಿಲ್ಲಾ ವಾರ್ತಾಧಿಕಾರಿ ಬಿ.ವಿ.ತುಕಾರಾಂರಾವ್ ಅವರಿಗೆ ಸೂಚಿಸಿದರು.
ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಚಿದಾನಂದ, ಜಿಪಂ ಸಹಾಯಕ ಯೋಜನಾಧಿಕಾರಿ ಸುಮಾ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹರೀಶ್, ಗ್ರೇಡ್-2 ತಹಸೀಲ್ದಾರ್ ನಾಗರಾಜ್ ಇದ್ದರು.