ವಿಜಯವಾಣಿ ಸುದ್ದಿಜಾಲ ಬಾಗಲಕೋಟೆ: ಕರ್ನಾಟಕ ಲೋಕಸೇವಾ ಆಯೋಗವು ಹೊರಡಿಸಲಾದ ಗೆಜೆಟೆಡ್ ಪ್ರೊಬೇಷರ‍್ಸ್ ಗ್ರೂಪ್ ಎ ಮತ್ತು ಬಿ ಹುದ್ದೆಗಳಿಗೆ ಆ.೨೭ ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿವೆ ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಹೇಳಿದರು.
ಜಿಲ್ಲಾಽಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜರುಗಿದ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವ ಸಿದ್ದತಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗೆಜೆಟೆಡ್ ಪ್ರೊಬೇಷರ‍್ಸ್ ಗ್ರೂಪ್ ಎ ಮತ್ತು ಬಿ ಹುದ್ದೆಗಳಿಗೆ ಜಿಲ್ಲೆಯಲ್ಲಿ ನಗರದಲ್ಲಿ ೨೩ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು, ಒಟ್ಟು ೮೩೭೨ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಬಾಗಲಕೋಟೆ ನಗರದಲ್ಲಿರುವ ಸರ್ಕಾರಿ ಮತ್ತು ಖಾಸಗಿ ಅನುದಾನಿತ ಶಾಲಾ-ಕಾಲೇಜುಗಳನ್ನು ಪರೀಕ್ಷಾ ಕೇಂದ್ರಗಳಾಗಿ ಲೋಕಸೇವಾ ಆಯೋಗವು ಆಯ್ಕೆ ಮಾಡಿದೆ ಎಂದರು.
ನಗರದಲ್ಲಿ ಸ್ಥಾಪಿಸಲಾದ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗೆ ಎಲ್ಲ ರೀತಿಯ ಸಿದ್ದತೆಗಳನ್ನು ಕೈಗೊಳ್ಳಲು ಸೂಚಿಸಿದರು. ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಬಿ ವೃಂದದ ಅಽಕಾರಿಗಳನ್ನು ಸ್ಥಾನಿಕ ಜಾಗೃತ ದಳದ ಅಧಿಕಾರಿಗಳನ್ನು ನೇಮಿಸಲಾಗಿದೆ. ನಾಲ್ಕು ಪರೀಕ್ಷಾ ಉಪಕೇಂದ್ರಗಳಿಗೆ ಒಬ್ಬರಂತೆ ಎ ವೃಂದದ ಅಧಿಕಾರಿಗಳನ್ನು ವೀಕ್ಷಕರನ್ನಾಗಿ ನೇಮಿಸಿ ಆದೇಶಿಸಲಾಗಿದೆ. ಪರೀಕ್ಷೆ ಶಾಂತ ಹಾಗೂ ಸುಗಮವಾಗಿ ನಡೆಸಲು ಪೊಲೀಸ್ ಬಂದೋಬಸ್ತ ವ್ಯವಸ್ಥೆ ಕಲ್ಪಿಸಲಾಗುತ್ತಿದೆ ಎಂದು ತಿಳಿಸಿದರು.
ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ, ಬಾಡಿ ಕ್ಯಾಮರಾ, ಜಾಮರ, ಪ್ರಿಸ್ಕಿಂಕ್, ಫೇಸ್ ರಿಕಾಗ್ನಾಷನ್ ಕಾರ್ಯವನ್ನು ಆಯೋಗದ ವತಿಯಿಂದ ನೇಮಿಸಲಾದ ಎಜೆನ್ಸಿಯವರು ಮಾಡಲಿದ್ದು, ಇವುಗಳು ಸಮರ್ಪಕವಾಗಿ ಕಾರ್ಯನಿರ್ವಸುತ್ತಿರುವ ಬಗ್ಗೆ ವೀಕ್ಷಕರು ಪರೀಕ್ಷೆ ನಡೆಯುವ ಒಂದು ದಿನದ ಮುಂಚೆಯೆ ಕೇಂದ್ರಕ್ಕೆ ತೆರಳಿ ಪರಿಶೀಲನೆ ಮಾಡಿ ವರದಿ ಸಲ್ಲಿಸಲು ಜಿಲ್ಲಾಧಿಕಾರಿಗಳು ಸೂಚಿಸಿದರು. ಪರೀಕ್ಷೆಯಲ್ಲಿ ಯಾವುದೇ ರೀತಿಯ ಲೋಕ ಆಗದಂತೆ ಎಲ್ಲ ರೀತಿಯ ಕ್ರಮಕೈಗೊಳ್ಳಬೇಕು. ಮಾರ್ಗಾಧಿಕಾರಿಗಳು ಸಮಯಕ್ಕೆ ಸರಿಯಾಗಿ ಪ್ರಶ್ನೆ ಬಂಡಲ್‌ಗಳನ್ನು ಪರೀಕ್ಷಾ ಕೇಂದ್ರಕ್ಕೆ ತಲುಪಿಸುವ ಕೆಲಸವಾಗಬೇಕು ಎಂದರು.
ಪರೀಕ್ಷೆಗಳು ಬೆಳಗ್ಗೆ ೧೦ ರಿಂದ ಮಧ್ಯಾಹ್ನ ೧೨ ಗಂಟೆವರೆಗೆ ಹಾಗೂ ಮಧ್ಯಾಹ್ನ ೨ ರಿಂದ ಸಂಜೆ ೪ ಗಂಟೆವರೆಗೆ ನಡೆಯಲಿದೆ. ಪರೀಕ್ಷೆ ನಡೆಯುವ ಒಂದು ಗಂಟೆ ಮುಂಚಿತವಾಗಿಯೇ ಪರೀಕ್ಷಾ ಕೇಂದ್ರಗಳಿಗೆ ಅಭ್ಯರ್ಥಿಗಳು ಹಾಜರಾಗಬೇಕು. ಪರೀಕ್ಷಾ ಕೇಂದ್ರ ೧ರಲ್ಲಿ ೨೦ ಅಂಧ ಪರೀಕ್ಷಾರ್ಥಿಗಳು ಸಹಾಯಕರೊಂದಿಗೆ ಪರೀಕ್ಷೆಗೆ ಹಾಜರಾಗಲಿದ್ದಾರೆ. ಅವರಿಗೆ ಮುಖ್ಯ ಅಧೀಕ್ಷಕರು ನಿಯಮಾನುಸಾರ ಅಗತ್ಯ ಕ್ರಮಕೈಗೊಳ್ಳುವಂತೆ ತಿಳಿಸಿದರು. ಎಲ್ಲ ಪರೀಕ್ಷಾ ಕೇಂದ್ರಗಳಿಗೆ ಅಗತ್ಯ ಅರೆ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿಗಳನ್ನು ನಿಯೋಜಿಸುವಂತೆ ಆರೋಗ್ಯ ಇಲಾಖೆಗೆ ಸೂಚಿಸಿದರು.
ಪರೀಕ್ಷೆ ಸುಸೂತ್ರವಾಗಿ ನಡೆಸಲು ಪರೀಕ್ಷಾ ಕೇಂದ್ರದ ಸುತ್ತಮುತ್ತಲೂ ೨೦೦ ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ, ಜಿಲ್ಲಾ ಪೊಲೀಸ್ ವರಿಷ್ಠಾಽಕಾರಿ ಅಮರನಾಥ ರೆಡ್ಡಿ, ಉಪ ವಿಭಾಗಾಽಕಾರಿ ಸಂತೋಷ ಜಗಲಾಸರ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಿ.ಕೆ.ನಂದನೂರ ಸೇರಿದಂತೆ ಆಯಾ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಉಪಸ್ಥಿತರಿದ್ದರು.