ಜಿಲ್ಲೆ

ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಶ್ರಮಿಸಿ

ಚಿಕ್ಕಬಳ್ಳಾಪುರ: ಸಾಂಕ್ರಾಮಿಕ ರೋಗಗಳ ಹರಡುವಿಕೆಗೆ ಕಡಿವಾಣ ಹಾಕುವುದರ ಮೂಲಕ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಶ್ರಮಿಸಬೇಕು ಎಂದು ಜಿಪಂ ಸಿಇಒ ಪಿ.ಶಿವಶಂಕರ್ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳವಾರ ಆಯೋಜಿಸಿದ್ದ ಡೆಂಘೆ ಮತ್ತು ಚಿಕೂನ್ ಗುನ್ಯಾ ಜ್ವರ ನಿಯಂತ್ರಣ ಸಂಬಂಧ ಅಂತರ್ ಇಲಾಖಾ ಸಮನ್ವಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಡೆಂಘೆ ತಡೆಗಟ್ಟುವಿಕೆ ಮನೆಯಿಂದಲೇ ಪ್ರಾರಂಭ ಎಂಬ ಧ್ಯೇಯ ವಾಕ್ಯದೊಂದಿಗೆ ಜಿಲ್ಲಾದ್ಯಂತ ಡೆಂಘೆ ವಿರೋಧಿ ಮಾಸಾಚರಣೆ ಹಮ್ಮಿಕೊಳ್ಳಲಾಗಿದ್ದು ಇದೇ ವೇಳೆ ಡೆಂಘೆ, ಚಿಕೂನ್ ಗುನ್ಯಾ, ಜಿಕಾ ವೈರಸ್ ನಿಯಂತ್ರಣಕ್ಕೆ ಶ್ರಮಿಸಬೇಕು. ಈ ನಿಟ್ಟಿನಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

ಸಾಮಾನ್ಯವಾಗಿ ಮಳೆಗಾಲವು ಸಾಂಕ್ರಾಮಿಕ ರೋಗಗಳ ಹರಡುವಿಕೆಗೆ ಅನುಕೂಲಕರ ವಾತಾವರಣ. ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಿರುತ್ತದೆ. ಇದಕ್ಕೆ ಅವಕಾಶ ನೀಡದಿರಲು ಎಲ್ಲೂ ಸಹ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ತೊಟ್ಟಿ, ಡ್ರಮ್, ಬ್ಯಾರೆಲ್‌ಗಳು ಸೇರಿ ನೀರು ಸಂಗ್ರಹಕಗಳನ್ನು ವಾರಕ್ಕೊಮ್ಮೆ ಖಾಲಿ ಮಾಡಿ, ವಾರದ ಒಣಗಲು ದಿನವನ್ನು ಆಚರಿಸಬೇಕು. ನೀರು ಭರ್ತಿ ಮಾಡಿ ಮೇಲ್ಭಾಗವನ್ನು ಮುಚ್ಚಿರಬೇಕು. ಇದರ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.

ಗ್ರಾಮೀಣ ಭಾಗದಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಗ್ರಾಮಗಳಲ್ಲಿ ಕನಿಷ್ಠ 15 ದಿನಗಳಿಗೊಮ್ಮೆ ಲಾರ್ವಾ ಸಮೀಕ್ಷೆ ನಡೆಸಬೇಕು. ಇದಕ್ಕೆ ಜಿಲ್ಲಾ ಮತ್ತು ತಾಲೂಕು ಆರೋಗ್ಯಾಧಿಕಾರಿಗಳು, ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಅಂತರ್ ಇಲಾಖಾ ಸಮನ್ವಯ ಸಮಿತಿ ಸಭೆಗಳನ್ನು ನಡೆಸಿ ಕೀಟಜನ್ಯ ರೋಗಗಳ ನಿಯಂತ್ರಣ ಕುರಿತು ಇಲಾಖಾವಾರು ಜವಾಬ್ದಾರಿ ಹಂಚಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಇಂದಿರಾ ಆರ್.ಕಬಾಡೆ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಪ್ರಕಾಶ್, ತಾಲೂಕು ಆರೋಗ್ಯಾಧಿಕಾರಿ ಡಾ.ಮಂಜುಳಾ ಮತ್ತಿತರರು ಇದ್ದರು.