ಗುಂಡ್ಲುಪೇಟೆ : ದೇಶದ ಭವಿಷ್ಯವನ್ನು ಉತ್ತಮವಾಗಿಸಲು ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಸರ್ಕಾರ ಪೌಷ್ಟಿಕ ಆಹಾರ ಸರಬರಾಜು ಮಾಡುತ್ತಿದೆ ಎಂದು ಹಿರಿಯ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಧೀಶರಾದ ಬಸವರಾಜ ತಳವಾರ್ ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಆರೋಗ್ಯ ಇಲಾಖೆ ವತಿಯಿಂದ ಪಟ್ಟಣದ ಶಿಶುಪಾಲನಾ ಕೇಂದ್ರದಲ್ಲಿ ಬುಧವಾರ ಆಯೋಜಿಸಿದ್ದ ರಾಷ್ಟ್ರೀಯ ಪೋಷಣ್ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಆರೋಗ್ಯವಂತ ಜನರಿಂದ ದೇಶದ ಅಭಿವೃದ್ಧಿ ಸಾಧ್ಯವಾಗುತ್ತದೆ. ಸರ್ಕಾರ ಪ್ರತಿ ಸಾವಿರ ಜನಸಂಖ್ಯೆಗೆ ಒಂದು ಅಂಗನವಾಡಿ ಕೇಂದ್ರ ಸ್ಥಾಪಿಸಿ ಆಯಾ ಪ್ರದೇಶಗಳಲ್ಲಿನ ಕಿಶೋರಿಯರು, ಗರ್ಭಿಣಿಯರು, ಬಾಣಂತಿಯರು ಹಾಗೂ ಮಕ್ಕಳಿಗೆ ಪೌಷ್ಟಿಕ ಆಹಾರ ಸರಬರಾಜು ಮಾಡುತ್ತಿದೆ ಎಂದು ಹೇಳಿದರು.
ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಮಂಜುನಾಥ್ ಮಾತನಾಡಿ, ಸಾಂಪ್ರದಾಯಿಕ ಆಹಾರ ಸೇವನೆಯಿಂದ ಪೋಷಕಾಂಶಗಳ ಕೊರತೆ ಉಂಟಾಗುತ್ತಿದ್ದು, ಮಕ್ಕಳು ಹಾಗೂ ಮಹಿಳೆಯರಲ್ಲಿ ಆರೋಗ್ಯ ಸಮಸ್ಯೆಗಳು ಕಂಡುಬರುತ್ತಿವೆ. ಇದರ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಆಗಬೇಕು ಎಂದು ಹೇಳಿದರು.
ಶಿಶು ಅಭಿವೃದ್ಧಿ ಅಧಿಕಾರಿ ಹೇಮಾವತಿ, ತಾಲೂಕು ಆರೋಗ್ಯಾಧಿಕಾರಿ ಆಲೀಂಪಾಷಾ, ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ರಾಜಶೇಖರ್, ಪೋಷಣ್ ಅಭಿಯಾನ್ ಜಿಲ್ಲಾ ಸಂಯೋಜಕ ಚೇತನ್ ಕುಮಾರ್ ಇತರರು ಇದ್ದರು.