ಜಿಲ್ಲೆ

ಆಸಕ್ತಿಗೆ ಅನುಗುಣವಾದ ಕ್ಷೇತ್ರ ಆಯ್ದುಕೊಳ್ಳಿ: ಡಾ.ಸಿ.ವಿ.ವೆಂಕಟೇಶ್

ಹಾಸನ:ಬೇರೆಯವರನ್ನು ಅನುಕರಿಸಲು ಹೋಗದೆ ಆಸಕ್ತಿಗೆ ಅನುಗುಣವಾದ ಕ್ಷೇತ್ರ ಆಯ್ದುಕೊಳ್ಳುವುದು ಸೂಕ್ತ ಎಂದು ಮಲೆನಾಡು ತಾಂತ್ರಿಕ ಮಹಾವಿದ್ಯಾಲಯದ ನಿವೃತ್ತ ಪ್ರಾಂಶುಪಾಲ ಡಾ.ಸಿ.ವಿ.ವೆಂಕಟೇಶ್ ಅವರು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ನಗರದ ಮಲೆನಾಡು ತಾಂತ್ರಿಕ ಮಹಾವಿದ್ಯಾಲಯದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವತಿಯಿಂದ ಶುಕ್ರವಾರ ಆಯೋಜಿಸಿದ್ದ ಓರಿಯಂಟೇಶನ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇಂದು ಎಲ್ಲ ಮಾಹಿತಿಯೂ ಬೆರಳ ತುದಿಯಲ್ಲಿ ಲಭ್ಯವಿದೆ. ಅದನ್ನು ಸದ್ಬಳಕೆ ಮಾಡಿಕೊಳ್ಳುವುದು ಅತ್ಯಗತ್ಯ. ಸಣ್ಣ ಕಂಪನಿಗಳಲ್ಲಿ ಉದ್ಯೋಗಕ್ಕೆ ಸೇರಿದರೆ ಕಲಿಯಲು ಹೆಚ್ಚಿನ ಅವಕಾಶ ದೊರೆಯಲಿದೆ ಎಂದು ಹೇಳಿದರು.
ಮೆಕ್ಯಾನಿಕಲ್ ಮತ್ತು ಸಿವಿಲ್ ಇಂಜಿನಿಯರಿಂಗ್ ಕ್ಷೇತ್ರಗಳು ಎಲ್ಲ ಕಾಲಕ್ಕೂ ಪ್ರಸ್ತುತ. ದೇಶದ ಪ್ರಗತಿಗೆ ಈ ಎರಡು ಕ್ಷೇತ್ರಗಳ ಕೊಡುಗೆ ಅಪಾರ. ಮೆಕ್ಯಾನಿಕಲ್ ಇಂಜಿನಿಯರಿಂಗ್ ಓದಿದವರು ಎಲ ಇಂಜಿನಿಯರಿಂಗ್ ಕ್ಷೇತ್ರಗಳಲ್ಲೂ ವೃತ್ತಿ ಬದುಕು ರೂಪಿಸಿಕೊಳ್ಳಬಹುದು. ಮೆಕ್ಯಾನಿಕಲ್ ಇಂಜಿನಿಯರಿಂಗ್‌ಗೆ ಭೌತ ವಿಜ್ಞಾನ ಮತ್ತು ಗಣಿತ ಶಾಸ್ತ್ರದ ಜ್ಞಾನ ಅತ್ಯಗತ್ಯ. ವಿದ್ಯಾರ್ಥಿಗಳು ಮೂಲತತ್ವಗಳನ್ನು ಕಲಿಯಲು ಹೆಚ್ಚಿನ ಆದ್ಯತೆ ನೀಡಬೇಕು. ತಂತ್ರಜ್ಞಾನಗಳಲ್ಲಿ ಎಷ್ಟೇ ಬದಲಾವಣೆಗಳಾದರೂ ಮೂಲತತ್ವಗಳ ಕುರಿತ ಜ್ಞಾನ ಅಪ್ರಸ್ತುತವಾಗಲಾರದು ಎಂದು ಅಭಿಪ್ರಾಯಪಟ್ಟರು.
ಪ್ರಾಂಶುಪಾಲ ಡಾ.ಎ.ಜೆ.ಕೃಷ್ಣಯ್ಯ ಅವರು ಮಾತನಾಡಿ, ಇಂದು ಮೆಕ್ಯಾನಿಕಲ್ ಇಂಜಿನಿಯರ್‌ಗಳಿಗೆ ಹೆಚ್ಚಿನ ಬೇಡಿಕೆ ಇದೆ. ಕಳೆದ ವರ್ಷ ಮಲೆನಾಡು ಇಂಜಿನಿಯರಿಂಗ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಪದವಿ ಮುಗಿಸಿದ ಶೇ.70ಕ್ಕಿಂತ ಹೆಚ್ಚು ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಸಂದರ್ಶನದ ಮೂಲಕ ಉದ್ಯೋಗಾವಕಾಶಗಳು ದೊರೆತಿವೆ. ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಉಜ್ವಲ ಭವಿಷ್ಯವಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ನಿರ್ದೇಶಕ ಡಾ.ಎಸ್.ಪ್ರದೀಪ್, ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ.ಎಜಿಲ್ ವಣ್ಣನ್, ನಿವೃತ್ತ ಪ್ರಾಧ್ಯಾಪಕ ಡಾ.ಎಚ್.ವಿ.ರಾಮಕೃಷ್ಣ, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.