ಕಾರವಾರ: ನವೆಂಬರ್ ಕೊನೆಯ ವಾರ ಅಥವಾ ಡಿಸೆಂಬರ್ ತಿಂಗಳಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನೂತನ ಆಸ್ಪತ್ರೆ ಕಟ್ಟಡ ಶಂಕುಸ್ಥಾಪನೆ ನೆರವೇರಿಸುವ ಸಾಧ್ಯತೆ ಇದೆ ಎಂದು ಶಾಸಕಿ ರೂಪಾಲಿ ನಾಯ್ಕ ತಿಳಿಸಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿರುವ ಅವರು, ಬುಧವಾರ ಸಿಎಂ ಅವರನ್ನು ಗೃಹಕಚೇರಿ ಕೃಷ್ಣಾದಲ್ಲಿ ಭೇಟಿಯಾಗಿ ಈ ಸಂಬಂಧ ಚರ್ಚೆ ನಡೆಸಿದ್ದಾಗಿ ತಿಳಿಸಿದ್ದಾರೆ.
ಈಗಿರುವ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಜತೆ 450 ಹಾಸಿಗೆಗಳ ಹೆಚ್ಚುವರಿ ಕಟ್ಟಡ ನಿರ್ವಣಕ್ಕೆ 160 ಕೋಟಿ ರೂ.ಗಳನ್ನು ಈಗಾಗಲೇ ಸರ್ಕಾರ ಮಂಜೂರು ಮಾಡಿದೆ. ಸರ್ಕಾರಿ ಮೆಡಿಕಲ್ ಕಾಲೇಜ್ಗೆ ಎನ್ಎಂಸಿ ಮಾನ್ಯತೆಗಾಗಿ ಶೀಘ್ರದಲ್ಲಿ ಆಸ್ಪತ್ರೆ ನಿರ್ಮಾಣ ಕಾಮಗಾರಿ ಪ್ರಾರಂಭ ಮಾಡಬೇಕಿದ್ದು, ಶಂಕುಸ್ಥಾಪನೆ ನೆರವೇರಿಸಿಕೊಡುವಂತೆ ಮನವಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.