ಹಾಸನ: ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಜು.19ರ ಶುಕ್ರವಾರ ಆರು ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಣೆ ಮಾಡಿದ್ದಾರೆ.
ಜಿಲ್ಲೆಯ ಸಕಲೇಶಪುರ, ಆಲೂರು, ಬೇಲೂರು, ಹಾಸನ, ಅರಕಲಗೂಡು ಹಾಗೂ ಹೊಳೆನರಸೀಪುರ ತಾಲೂಕುಗಳ ಸರ್ಕಾರಿ, ಅನುದಾನ, ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಸದರಿ ರಜೆ ದಿನವನ್ನು ಆ.10ರ ಶನಿವಾರದಂದು ಸರಿದೂಗಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.
ಗುರುವಾರವೂ ಜಿಲ್ಲೆಯ ವಿವಿಧೆಡೆ ಸುರಿದ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿತು. ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರಕ್ಕೆ ಹೆದ್ದಾರಿಯಲ್ಲಿ ಭೂ ಕುಸಿತ, ತಡೆಗೋಡೆ ಕುಸಿತ ಮುಂದುವರೆದಿದೆ. ಸಕಲೇಶಪುರ ತಾಲೂಕಿನಲ್ಲಿ ಹಲವು ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಂಡು ಕತ್ತಲೆಯಲ್ಲಿ ಕಾಲ ಕಳೆಯುವಂತಾಗಿದೆ.