ಜಿಲ್ಲೆ

ಇಂದು ರಾಜ್ಯಮಟ್ಟದ ಗಾಳಿಪಟ ಉತ್ಸವ

ನಾಗಮಂಗಲ: ಆದಿ ಚುಂಚನಗಿರಿಯ ಬಿ.ಜಿ.ಎಸ್. ಕ್ರೀಡಾಂಗಣದಲ್ಲಿ ಆ.13(ಭಾನುವಾರ) ರಂದು 33ನೇ ರಾಜ್ಯ ಮಟ್ಟದ ಗಾಳಿಪಟ ಉತ್ಸವ ಆಯೋಜಿಸಲಾಗಿದ್ದು, ಸಕಲ ಸಿದ್ಧತೆ ಕೈಗೊಳ್ಳಲಾಗಿದೆ.


250ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗವಹಿಸುವ ನಿರೀಕ್ಷೆ ಇದ್ದು, ಬೆಳಗ್ಗೆ 9 ಗಂಟೆಗೆ ನೋಂದಣಿ ಪ್ರಾರಂಭವಾಗಲಿದೆ. ಉತ್ಸವದಲ್ಲಿ ಕಲಾ ತಂಡಗಳು ಭಾಗವಹಿಸಿ ವಿಶೇಷ ಮೆರಗು ನೀಡಲಿವೆ. ಸ್ಥಳದಲ್ಲಿ ಸಾರ್ವಜನಿಕರಿಗೆ ಮಾಹಿತಿ ನೀಡುವ ವಸ್ತುಪ್ರದರ್ಶನ ಮಳಿಗೆಗಳನ್ನು ತೆರೆಯಲಾಗುವುದು. ಇದೇ ಸಂದರ್ಭ ಗಾಳಿಪಟ ಸಿದ್ಧಪಡಿಸುವ ಬಗ್ಗೆ ಪ್ರಾತ್ಯಕ್ಷಿಕೆ ನಡೆಯಲಿದೆ. ವಸತಿ, ಊಟದ ವ್ಯವಸ್ಥೆ, ವಾಹನ ನಿಲುಗಡೆ, ಸ್ವಚ್ಛತೆ, ಕುಡಿಯುವ ನೀರಿನ ವ್ಯವಸ್ಥೆಯನ್ನು ಜಿಲ್ಲಾಡಳಿತದಿಂದ ಮಾಡಲಾಗಿದೆ.


ಉತ್ಸವದ ನಿಯಮಗಳು: ಗಾಳಿಪಟ ಉತ್ಸವದಲ್ಲಿ ಗಂಡು ಮತ್ತು ಹೆಣ್ಣು ಮಕ್ಕಳಿಗೆ ಪ್ರತ್ಯೇಕ ಸ್ಪರ್ಧೆ ಆಯೋಜಿಸಲಾಗಿದೆ. ಕಿರಿಯ (14 ವರ್ಷದೊಳಗೆ), ಹಿರಿಯ (15 ರಿಂದ 20 ವರ್ಷದೊಳಗೆ) ವಿಭಾಗದಲ್ಲಿ ಸ್ಪರ್ಧೆ ಆಯೋಜಿಸಲಾಗಿದೆ. ಪ್ರತಿ ವಿಭಾಗಕ್ಕೂ ಪ್ರಥಮ, ದ್ವಿತೀಯ ಹಾಗೂ ತೃತೀಯ ನಗದು ಬಹುಮಾನ ನೀಡಲಾಗುವುದು. ಅತ್ಯುತ್ತಮ ಸಂದೇಶ ಹಾಗೂ ಸುಂದರ ಗಾಳಿಪಟಕ್ಕೆ ನಾಡೋಜ ಡಾ.ಎಚ್.ಎಲ್.ನಾಗೇಗೌಡ ಹೆಸರಿನ ಪಾರಿತೋಷಕ ನೀಡಲಾಗುವುದು.


ಸಚಿವರಿಂದ ಚಾಲನೆ: ಉತ್ಸವವನ್ನು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಉದ್ಘಾಟಿಸಲಿದ್ದಾರೆ. ಕಾರ್ಯಾಗಾರವನ್ನು ಪ್ರವಾಸೋದ್ಯಮ ಇಲಾಖೆ ಸಚಿವ ಎಚ್.ಕೆ.ಪಾಟೀಲ್ ಉದ್ಘಾಟಿಸುವರು. ವಸ್ತುಪ್ರದರ್ಶನ ಮಳಿಗೆಗಳನ್ನು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ಎಸ್.ತಂಗಡಗಿ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಸಾನಿಧ್ಯವನ್ನು ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ವಹಿಸಲಿದ್ದಾರೆ.


ವಿಕೆ ರಾವ್ ತಂಡ ಭೇಟಿ: ಅಂತಾರಾಷ್ಟ್ರೀಯ ಖ್ಯಾತಿಯ ವಿ.ಕೆ. ರಾವ್ ಮತ್ತು ತಂಡದವರು ಭಾಗವಹಿಸಿ ವೈವಿಧ್ಯಮಯ ಹಾಗೂ ಸಾಮಾಜಿಕ ಸಂದೇಶ ಸಾರುವ ಗಾಳಿಪಟಗಳನ್ನು ಹಾರಿಸಲಿದ್ದಾರೆ.