ಚಿಕ್ಕಬಳ್ಳಾಪುರ : ದೇಶದಲ್ಲಿ ಇಂಧನ ಬೆಲೆ ನಿರಂತರ ಏರಿಕೆ ಖಂಡಿಸಿ, ನಗರದ ಪ್ರಮುಖ ರಸ್ತೆಗಳಲ್ಲಿ ಜಿಲ್ಲಾ ಕಾಂಗ್ರೆಸ್ ಮುಖಂಡರು ಸೈಕಲ್ ಜಾಥಾ ನಡೆಸಿದರು.
ನಗರದ ಶಿಡ್ಲಘಟ್ಟ ವೃತ್ತದಿಂದ ಸೈಕಲ್ ತುಳಿದ ಮುಖಂಡರು ಮತ್ತು ಕಾರ್ಯಕರ್ತರು ಬಿ.ಬಿ.ರಸ್ತೆ, ಎಂ.ಜಿ.ರಸ್ತೆ, ಬಜಾರ್ ರಸ್ತೆ, ಗಂಗಮ್ಮನಗುಡಿ ರಸ್ತೆಯಲ್ಲಿ ಸಾಗಿದರು.ಮಾಜಿ ಸಚಿವ ಟಿ.ಬಿ.ಜಯಚಂದ್ರ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಬಡ ಮತ್ತು ಮಧ್ಯಮ ವರ್ಗದ ಆರ್ಥಿಕ ಸಂಕಷ್ಟ, ಅಗತ್ಯ ವಸ್ತುಗಳ ಬೆಲೆ ಏರಿಕೆ, ಭ್ರಷ್ಟಾಚಾರ ನಿಯಂತ್ರಣ ಸೇರಿ ಅಭಿವೃದ್ಧಿಯ ಹೆಸರಿನಲ್ಲಿ ಅಧಿಕಾರಕ್ಕೆ ಬಂದರು. ಹಿಂದಿನ ಯುಪಿಎ ಸರ್ಕಾರದ ಆಡಳಿತ ವೈಖರಿಯ ವಿರುದ್ಧ ನಿರಂತರವಾಗಿ ವ್ಯಂಗ್ಯವಾಡುತ್ತ ಪ್ರಚಾರ ಕೈಗೊಂಡರು. ಆದರೆ, ಇದೀಗ ದೇಶದಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ 100 ರೂ ದಾಟಿದೆ. ಅಡುಗೆ ಅನಿಲ ಸಿಲಿಂಡರ್ ಸೇರಿ ಅಗತ್ಯ ವಸ್ತುಗಳ ಬೆಲೆ ಏರಿಕೆಯು ದಾಖಲೆ ಮಟ್ಟದಲ್ಲಿ ದುಬಾರಿಯಾಗಿದೆ. ಜನ ಸಾಮಾನ್ಯ ಜೀವನ ನಡೆಸಲು ಪರದಾಡುವಂತಾಗಿದೆ. ಆದರೂ ಬೆಲೆ ನಿಯಂತ್ರಣಕ್ಕೆ ಯಾವುದೇ ಕ್ರಮ ಕೈಗೊಳ್ಳದೆ ಕೇಂದ್ರ ಬಿಜೆಪಿ ಸರ್ಕಾರ ಅಸಹಾಯಕತೆ ಪ್ರದರ್ಶಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಲಾಕ್‌ಡೌನ್ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟ ಹೆಚ್ಚಾಗಿದೆ. ನಿರುದ್ಯೋಗ, ಆದಾಯ ಕುಸಿತ ಮತ್ತು ಕುಟುಂಬ ನಿರ್ವಹಣೆ ವೆಚ್ಚ ಹೆಚ್ಚಳವಾಗಿದೆ. ಇದೇ ವೇಳೆ ಅಗತ್ಯ ವಸ್ತುಗಳ ಬೆಲೆ ಏರಿಕೆಯು ಬಡವರನ್ನು ಕಷ್ಟದ ಕೂಪಕ್ಕೆ ತಳ್ಳಿದೆ. ಇದರ ಬಗ್ಗೆ ಸ್ಪಷ್ಟ ಅರಿವಿದ್ದರೂ ಪ್ರಧಾನಿ ಸ್ಪಂದಿಸುತ್ತಿಲ್ಲ. ಕಾರ್ಪೋರೇಟ್ ಕಂಪನಿಗಳ ಹಿತ ಕಾಪಾಡಲು ಪ್ರಮುಖ ಆದ್ಯತೆ ನೀಡುತ್ತಿದ್ದು ಬಡವರ ಪರ ನೀತಿಯು ಭಾಷಣಕ್ಕೆ ಮಾತ್ರ ಸೀಮಿತವಾಗಿದೆ ಎಂದು ವ್ಯಂಗ್ಯವಾಡಿದರು.
ರಾಜ್ಯ ಬಿಜೆಪಿ ಸರ್ಕಾರವು ಅಧಿಕಾರಕ್ಕೆ ಬಂದಾಗಿನಿಂದಲೂ ಪರಸ್ಪರ ಕಚ್ಚಾಟ, ಅಧಿಕಾರಕ್ಕೆ ವಾಮಾ ಮಾರ್ಗ ನೀತಿ, ಭ್ರಷ್ಟಾಚಾರ ಮತ್ತು ಹಣ ಲೂಟಿಯೇ ದೊಡ್ಡ ಸಾಧನೆಯಾಗಿದೆ. ಇದರ ಬಗ್ಗೆ ಸ್ವಪಕ್ಷೀಯರೇ ಸಾರ್ವಜನಿಕವಾಗಿ ಹೇಳಿಕೆ ನೀಡುತ್ತಿದ್ದಾರೆ. ಕರೊನಾ ತುರ್ತು ಸಂದರ್ಭದಲ್ಲಿ ಜನರ ಗೋಳನ್ನು ಆಲಿಸುತ್ತಿಲ್ಲ ಎಂದು ಕಿಡಿಕಾರಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಎನ್.ಕೇಶವರೆಡ್ಡಿ ಮಾತನಾಡಿ, ಈಗಾಗಲೇ ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರದ ಆಡಳಿತ ವೈಖರಿಯು, ನಿರೀಕ್ಷೆಗಳ ಹುಸಿ ಮತ್ತು ಭರವಸೆಗಳ ಕಡೆಗಣನೆಯು ಜನರಲ್ಲಿ ಆಕ್ರೋಶವನ್ನುಂಟು ಮಾಡಿದೆ ಎಂದು ತಿಳಿಸಿದರು.ಕೆಪಿಸಿಸಿ ಸದಸ್ಯ ವಿನಯ್ ಶ್ಯಾಮ್ ಮಾತನಾಡಿ, ವ್ಯಾಪಕ ಟೀಕೆಗೆ ಗುರಿಯಾಗಿರುವ ಸರ್ಕಾರವು ಇಂಧನ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಿಸಬೇಕು. ಇಲ್ಲದಿದ್ದಲ್ಲಿ ಮುಂಬರುವ ದಿನಗಳಲ್ಲಿ ಮತ್ತಷ್ಟು ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಮಾಜಿ ಶಾಸಕ ಎಸ್.ಎಂ.ಮುನಿಯಪ್ಪ, ಜಿ.ಪಂ.ಮಾಜಿ ಅಧ್ಯಕ್ಷ ಮುನೇಗೌಡ, ಎಂ.ವಿ.ಕೃಷ್ಣಪ್ಪ, ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಮಾಜಿ ಅಧ್ಯಕ್ಷ ಯಲುವಹಳ್ಳಿ ಎನ್.ರಮೇಶ್, ಮುಖಂಡರಾದ ರಫೀವುಲ್ಲಾ, ಕೆ.ಎನ್.ರಘು, ಜಯರಾಮ್ ಮತ್ತಿತರರು ಇದ್ದರು.