ತುಮಕೂರು: ಭ್ರಷ್ಟಾಚಾರದ ಆರೋಪ ಹೊತ್ತಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ಹಾಗೂ ಬಿಜೆಪಿ ಸರ್ಕಾರದ 40 ಪರ್ಸೆಂಟ್ ಕಮಿಷನ್ ದಂಧೆ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನಗರದಲ್ಲಿ ಪ್ರತಿಭಟಿಸಲಾಯಿತು.
ನಗರದ ಟೌನ್ಹಾಲ್ ವೃತ್ತದಲ್ಲಿ ಮಂಗಳವಾರ ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ಪದಾಧಿಕಾರಿಗಳು, ಕಾರ್ಯಕರ್ತರು, ರಾಜ್ಯ ಬಿಜೆಪಿ ಸರ್ಕಾರ ಹಾಗೂ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ೂಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರಲ್ಲದೆ, ಈಶ್ವರಪ್ಪರನ್ನು ಬಂಧಿಸುವಂತೆ ಒತ್ತಾಯಿಸಿದರು.
ಪ್ರತಿಭಟನಾನಿರತರನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಶಾಸಕ ಕೆ.ಎನ್.ರಾಜಣ್ಣ, ಬಿಜೆಪಿಯ ಮುಖಂಡನಾಗಿದ್ದ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಮಾಡಿಕೊಳ್ಳುವಂತಹ ದಯನೀಯ ಸ್ಥಿತಿ ಈ ಸರ್ಕಾರದಲ್ಲಿದೆ. ಇದು ಬಿಜೆಪಿ ಹಾಗೂ ಸರ್ಕಾರಕ್ಕೆ ಗೌರವ ತರುವುದಿಲ್ಲ. ಭ್ರಷ್ಟಾಚಾರದ ಆರೋಪ ಹೊತ್ತಿರುವ ಈಶ್ವರಪ್ಪ ಹೆಸರನ್ನು ಎಫ್ಐಆರ್ನಲ್ಲಿ ಸೇರ್ಪಡೆ ಮಾಡಿ ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದರು.
ಭ್ರಷ್ಟಾಚಾರದ ಆರೋಪ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಈಶ್ವರಪ್ಪ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ನೀಡುತ್ತಿರುವ ಹೇಳಿಕೆಯನ್ನು ಗಮನಿಸಿದರೆ ಈಗಾಗಲೇ ಅವರನ್ನು ನಿರ್ದೋಷಿ ಎಂದು ತೀರ್ಮಾನ ಮಾಡಿದಂತೆ ಕಂಡು ಬರುತ್ತಿದೆ. ಸಿಎಂ ಇಂತಹ ಹೇಳಿಕೆಗಳನ್ನು ನೀಡುವುದನ್ನು ಬಿಟ್ಟು ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದರು.
ಬಿಜೆಪಿ ಸರ್ಕಾರದ ಅವಧಿಯಲ್ಲಿ 40 ಪರ್ಸಂಟೇಜ್ ಕಮಿಷನ್ ನೀಡಬೇಕಿದೆ ಎಂದು ಸ್ವತ@ ಗುತ್ತಿಗೆದಾರರೇ ಆರೋಪಿಸಿ ಪ್ರಧಾನ ಮಂತ್ರಿಗಳಿಗೆ ಪತ್ರ ಬರೆದಿದ್ದಾರೆ. ಆದರೂ ಈವರೆಗೆ ಯಾವುದೇ ಕ್ರಮ ಆಗಿಲ್ಲ. ಪ್ರತಿಭಟನೆ ಮಾಡಿದಷ್ಟೂ ಪರ್ಸಂಟೇಜ್ ಜಾಸ್ತಿಯಾಗುತ್ತಿದೆ ಎಂದು ಮಾಜಿ ಸಚಿವ ಟಿ.ಬಿ.ಜಯಚಂದ್ರ ಆರೋಪಿಸಿದರು.
ಭ್ರಷ್ಟ ಬಿಜೆಪಿ ರಾಜ್ಯದಿಂದ ತೊಲಗಬೇಕು. ಈ ನಿಟ್ಟಿನಲ್ಲಿ ರಾಜ್ಯದ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಮಾಡುತ್ತಿದೆ. ಈ ಹಿಂದೆ ಬಿಜೆಪಿಯ ಸಿಎಂ ಭ್ರಷ್ಟಾಚಾರದ ಆರೋಪದ ಮೇಲೆ ಜೈಲಿಗೆ ಹೋಗಿದ್ದರು. ಈಗ ಮಂತ್ರಿಗಳು ಸಹ ಜೈಲಿಗೆ ಹೋಗುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇದನ್ನು ರಾಜ್ಯದ ಜನತೆ ಅರ್ಥ ಮಾಡಿಕೊಂಡು ಭ್ರಷ್ಟ ಬಿಜೆಪಿಯನ್ನು ಕಿತ್ತೊಗೆಯಬೇಕು ಎಂದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ರಾಮಕೃಷ್ಣ, ಶಾಸಕ ವೆಂಕಟರಮಣಪ್ಪ, ಮಾಜಿ ಶಾಸಕರಾದ ಎಸ್.ರಫೀಕ್ಅಹಮದ್, ಕೆ. ಷಡಕ್ಷರಿ, ಆರ್. ನಾರಾಯಣ್, ಎಂ.ಡಿ. ಲ್ಮನಾರಾಯಣ್, ಮುಖಂಡರಾದ ಬಿ.ಬಿ.ರಾಮಸ್ವಾಮಿಗೌಡ, ಹೊನ್ನಗಿರಿಗೌಡ, ಚೌದ್ರಿರಂಗಪ್ಪ, ಇಕ್ಭಾಲ್ ಅಹಮದ್, ಅತೀಕ್ ಅಹಮದ್, ಲೋಕೇಶ್ವರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಂಜುನಾಥ್, ಆಟೋರಾಜು, ಮೆಹಬೂಬ್ ಪಾಷ ಮತ್ತಿತರರು ಪಾಲ್ಗೊಂಡಿದ್ದರು.
ಭ್ರಷ್ಟಾಚಾರ ಎಲ್ಲ ಕಾಲದಲ್ಲೂ ಇದೆ. ಬಿಜೆಪಿ ಸರ್ಕಾರ ಬಂದ ಮೇಲೆ ಸರ್ಕಾರಿ ಕಚೇರಿಗಳು ಲಂಚಮಯವಾಗಿವೆ. ಈ ರೀತಿ ಅತಿರೇಕಕ್ಕೆ ಹೋಗಿದ್ದನ್ನು ನಾನೆಂದೂ ನೋಡಿರಲಿಲ್ಲ. ಇದು ನಾಚಿಕೆಗೇಡಿನ ಸಂಗತಿ. ಸ್ವಾಮೀಜಿಗಳನ್ನು ನಾವು ಎರಡನೇ ದೇವರು ಎಂದು ಕರೆಯುತ್ತೇವೆ. ಆದರೆ, ಬಿಜೆಪಿ ಸರ್ಕಾರವು ಸ್ವಾಮೀಜಿಗಳ ಬಳಿಯೂ ಕಮಿಷನ್ ಪಡೆದಿದೆ ಎಂದರೆ ಏನರ್ಥ? ಈ ಸರ್ಕಾರ ಜನರ ತೆರಿಗೆ ಹಣವನ್ನು ಸ್ವಾರ್ಥಕ್ಕೆ ಬಳಸಿಕೊಳ್ಳುತ್ತಿದೆ. ಇದು ಸರಿಯಲ್ಲ. > ಕೆ.ಎನ್.ರಾಜಣ್ಣ ಮಾಜಿ ಶಾಸಕ ಮಾಜಿ ಸಚಿವ ಈಶ್ವರಪ್ಪ ಹಾಗೂ ಇತರ ಆರೋಪಿಗಳನ್ನು ಕೂಡಲೇ ಬಂಧಿಸಬೇಕು. ಆತ್ಮಹತ್ಯೆ ಮಾಡಿಕೊಂಡಿರುವ ಗುತ್ತಿಗೆದಾರ ಸಂತೋಷ್ ಪಾಟೀಲ್ ಕುಟುಂಬಕ್ಕೆ 1 ಕೋಟಿ ರೂ., ಪರಿಹಾರ ಮತ್ತು ಅವರ ಪತ್ನಿಗೆ ಸರ್ಕಾರಿ ಉದ್ಯೋಗ ನೀಡಬೇಕು. > ಎಸ್.ರಫೀಕ್ ಅಹ್ಮದ್ ಮಾಜಿ ಶಾಸಕ