ಕೂಡ್ಲೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಮಂತರ್‌ಗೌಡ, ಮಂಜುನಾಥ್‌ಕುಮಾರ್, ಪುಟ್ಟಸ್ವಾಮಿ ಅವರನ್ನು ಸನ್ಮಾನಿಸಲಾಯಿತು. ಟಿ.ಜಿ.ಪ್ರೇಮಕುಮಾರ್, ಕೆ.ಪಿ.ಚಂದ್ರಕಲಾ, ವಿ.ಪಿ.ಶಶಿಧರ್, ಸೌಮ್ಯಾ, ಕೆ.ವಿ.ಸುರೇಶ್ ಇದ್ದರು  
ಜಿಲ್ಲೆ

ಉತ್ತಮ ಭವಿಷ್ಯಕ್ಕಾಗಿ ಮಕ್ಕಳು ಶಿಕ್ಷಣಕ್ಕೆ ಒತ್ತು ನೀಡಲಿ

ಕುಶಾಲನಗರ: ವಿದ್ಯಾರ್ಥಿಗಳು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕೆಂದರೆ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕಿದ್ದು, ಇದಕ್ಕೆ ಪೂರಕವಾಗಿ ಶಾಲೆಗಳಿಗೆ ಮೂಲಸೌಕರ್ಯ ಕಲ್ಪಿಸಿಕೊಡಲು ಆದ್ಯತೆ ನೀಡಲಾಗುತ್ತಿದೆ ಎಂದು ಶಾಸಕ ಡಾ.ಮಂತರ್‌ಗೌಡ ಹೇಳಿದರು.

ಸಮೀಪದ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಮಂಗಳವಾರ ನೂತನ ಕೊಠಡಿ ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳಿಗೆ ಹೆಚ್ಚಿನ ಒತ್ತಡ ನೀಡದೆ ಅವರನ್ನು ಸ್ನೇಹಿತರಂತೆ ಕಾಣುವ ಮೂಲಕ ಅವರಲ್ಲಿ ಆತ್ಮಸ್ಥೈರ್ಯ ತುಂಬುವ ಕೆಲಸವಗಬೇಕು. ಆ ಮೂಲಕ ಕಲಿಕೆಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು ಎಂದರು.

ಶಾಲೆಗಳ ಅಗತ್ಯತೆಗೆ ಅನುಗುಣವಾಗಿ ಕೊಠಡಿ ಮತ್ತು ಇತರ ಕಟ್ಟಡಗಳನ್ನು ನಿರ್ಮಿಸಲು ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಇ ಂಜಿನಿಯರ್‌ಗಳು ನೀಲಿನಕ್ಷೆ ರೂಪಿಸಬೇಕು ಎಂದ ಅವರು, ಹಂತ ಹಂತವಾಗಿ ಶಾಲೆಗೆ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ.ಸುರೇಶ್ ಮಾತನಾಡಿ, ವಿದ್ಯಾರ್ಥಿಗಳು ಸರ್ಕಾರಿ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು. ಈ ಶಾಲೆಯಲ್ಲಿ ಮಕ್ಕಳ ಶೈಕ್ಷಣಿಕ ಹಾಗೂ ಪಠ್ಯೇತರ ಚಟುವಟಿಕೆ ಉತ್ತಮವಾಗಿವೆ ಎಂದು ಶ್ಲಾಘಿಸಿದರು.

ಶಾಸಕ ಡಾ.ಮಂತರ್‌ಗೌಡ, ನಿವೃತ್ತ ಮುಖ್ಯ ಶಿಕ್ಷಕ ಕೆ.ಕೆ.ಮಂಜುನಾಥ್‌ಕುಮಾರ್ ಹಾಗೂ ಎಸ್‌ಡಿಎಂಸಿ ಅಧ್ಯಕ್ಷ ಎಸ್.ಎನ್.ಪುಟ್ಟಸ್ವಾಮಿ ಅವರನ್ನು ಗೌರವಿಸಲಾಯಿತು. ಜಿಲ್ಲಾ ಹಾಗೂ ರಾಜ್ಯ ಮಟ್ಟದ ವಿಜ್ಞಾನ ಸಮಾವೇಶದಲ್ಲಿ ವೈಜ್ಞಾನಿಕ ಪ್ರಬಂಧ ಮಂಡಿಸಿದ ವಿದ್ಯಾರ್ಥಿಗಳಾದ ರಾಜೇಶ್ ಹಾಗೂ ಪ್ರಜ್ವಲ್ ಅವರಿಗೆ ಶಾಸಕ ಡಾ.ಮಂತರ್‌ಗೌಡ ಪ್ರಶಸ್ತಿ ಪತ್ರ ವಿತರಿಸಿದರು. ಇಕೋ ಕ್ಲಬ್ ವತಿಯಿಂದ ಪರಿಸರ ಸ್ನೇಹಿ ಅಭಿಯಾನದಡಿ ಬಟ್ಟೆ, ಕೈ ಚೀಲಗಳನ್ನು ಶಾಸಕರು ಬಿಡುಗಡೆಗೊಳಿಸಿದರು.

ಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಶಾಲಾ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು. ಎಸ್‌ಡಿಎಂಸಿ ಅಧ್ಯಕ್ಷ ಎಸ್.ಎನ್.ಪುಟ್ಟಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಜಿ.ಪಂ. ಮಾಜಿ ಅಧ್ಯಕ್ಷೆ ಕೆ.ಪಿ.ಚಂದ್ರಕಲಾ, ಜಿ.ಪಂ. ಶಿಕ್ಷಣ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ವಿ.ಪಿ.ಶಶಿಧರ್, ಗ್ರಾಮದ ಪ್ರಮುಖ ಕೆ.ಕೆ.ಮಂಜುನಾಥ್‌ಕುಮಾರ್, ಪ್ರಭಾರ ಡಿಡಿಪಿಐ ಸೌಮ್ಯಾ ಪೊನ್ನಪ್ಪ, ವಿಷಯ ಪರಿವೀಕ್ಷಕಿ ಬಿಂದು, ಜಿ.ಪಂ. ಸಹಾಯಕ ಕಾರ್ಯಪಾಲಕ ಇಂಜಿನಿಯರ್ ವೀರೇಂದ್ರ, ಎಸ್‌ಡಿಎಂಸಿ ಮಾಜಿ ಅಧ್ಯಕ್ಷ ಕೆ.ಬಿ. ಈರಪ್ಪ, ಸದಸ್ಯರಾದ ಜವರಯ್ಯ, ಎಂ. ನಾಗರಾಜು, ಗ್ರಾಮ ಸಮಿತಿಯ ಪ್ರಮುಖರಾದ ಗೋವಿಂದೇಗೌಡ, ಕೆ.ಎಸ್.ರಾಜಾಚಾರಿ, ಕೆ.ಎನ್.ಪವನ್‌ಕುಮಾರ್, ವೈ.ಟಿ.ಪರಮೇಶ್, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಟಿ.ಕೆ.ಬಸವರಾಜ್ ಇದ್ದರು.