ಚಿತ್ರದುರ್ಗ: ರಾಜ್ಯದ ಶಿಗ್ಗಾವಿ, ಚನ್ನಪಟ್ಟಣ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ಸಿನ ಗೆಲು ವು, ಬಿಜೆಪಿಗೆ ಎಚ್ಚರಿಕೆ ಗಂಟೆಯಾಗಿದೆ ಎಂದು ಹೊಳಲ್ಕೆರೆ ಬಿಜೆಪಿ ಶಾಸಕ ಡಾ.ಎಂ.ಚಂದ್ರಪ್ಪ ಅಭಿಪ್ರಾಯಪಟ್ಟಿದ್ದಾರೆ.
ಫಲಿತಾಂಶ ಕುರಿತು ಪ್ರತಿಕ್ರಿಯಿಸಿರುವ ಅವರು, ಬಿಜೆಪಿಯೊಳಗಿನ ಗುಂಪುಗಾರಿಕೆ ಫಲಿತಾಂಶದ ಮೇಲೆ ಪರಿಣಾಮ ಬೀರಿರುವ ಸಾಧ್ಯತೆಗಳನ್ನು ಅಲ್ಲಗಳೆಯಲಾಗದು. ಇದನ್ನೆಲ್ಲ ಕೂಡಲೇ ಸರಿದಾರಿಗೆ ತರುವ ನಿಟ್ಟಿನಲ್ಲಿ ಕ್ರಮ ವಹಿಸಬೇಕೆಂದು ಪಕ್ಷದ ವರಿಷ್ಠರಿಗೆ ಮನವಿ ಮಾಡುವುದಾಗಿ ಹೇಳಿದ ಅವರು, ಗುಂಪುಗಾರಿಕೆ ರಹಿತವಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ರಾಜ್ಯದಲ್ಲೂ ಪಕ್ಷ ಸಂಘಟನೆಯ ನ್ನು ಇನ್ನಷ್ಟು ಬಲಿಷ್ಠಗೊಳಿಸಬೇಕಿದೆ. ಆ ಮೂಲಕ ಮುಂದೆ ರಾಜ್ಯದಲ್ಲಿ ಎದುರಾಗಲಿರುವ ಜಿಪಂ,ತಾಪಂ ಮತ್ತಿತರ ಸ್ಥಳೀಯ ಸಂಸ್ಥೆಗಳಲ್ಲಿ ಪಕ್ಷ ಗೆಲುವು ಸಾಧಿಸಬೇಕಿದೆ. ಕಾಂಗ್ರೆಸ್ ಆಡಳಿತದಲ್ಲಿ ಆಗುತ್ತಿರುವ ಲೋಪಗಳನ್ನು ಸಂಘಟಿತವಾಗಿ ರಾಜ್ಯದ ಜನರ ಮುಂದಿಡಬೇಕಿದೆ ಎಂದು ಚಂದ್ರಪ್ಪ ಅಭಿಪ್ರಾಯಪಟ್ಟಿದ್ದಾರೆ.