ಜಿಲ್ಲೆ

ಎಚ್‌ಐವಿ-ಏಡ್ಸ್‌ಜಾಗೃತಿಗಾಗಿ ಜಿಲ್ಲಾ ಮಟ್ಟದ ಮ್ಯಾರಥಾನ್ ಸ್ಪರ್ಧೆ ಚಾಲನೆ

Hassan - Ramesh H R

ಹಾಸನ: ಯುವಜನೋತ್ಸವದ ಅಂಗವಾಗಿ ಎಚ್‌ಐವಿ-ಏಡ್ಸ್‌ಜಾಗೃತಿಗಾಗಿ ಕಾಲೇಜು ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಮ್ಯಾರಥಾನ್ ಸ್ಪರ್ಧೆಯನ್ನು ನಗರದ ಸರ್ಕಾರಿ ಇಂಜಿನೀಯರ್ ಕಾಲೇಜು ಆವರಣದಲ್ಲಿ ಏರ್ಪಡಿಸಲಾಗಿತ್ತು.
ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿದ ಹಿರಿಯ ಸಿವಿಲ್ ನ್ಯಾಯಾಧೀಶರಾದ ಜಿ.ಕೆ.ದಾಕ್ಷಾಯಿಣಿ ಅವರು, ಇತ್ತೀಚಿನ ದಿನಗಳಲ್ಲಿ ಏಡ್ಸ್‌ನಂತಹ ಕಾಯಿಲೆ ಯುವ ಜನಾಂಗದಲ್ಲೇ ಹೆಚ್ಚು ಕಾಣಿಸಿಕೊಳ್ಳುತ್ತಿದ್ದು, ಅದನ್ನು ತಡೆಯುವುದಕ್ಕಾಗಿ ಜಿಲ್ಲಾ ಮಟ್ಟದ ಮ್ಯಾರಥಾನ್ ಓಟ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ. ಯುವ ಜನಾಂಗ ಸೇರಿ ಎಲ್ಲರಿಗೂ ಏಡ್ಸ್ ಬಗ್ಗೆ ಅರಿವು ಹೊಂದಬೇಕು. ಕಾಯಿಲೆ ಬಂದ ಮೇಲೆ ಚಿಕಿತ್ಸೆಪಡೆದುಕೊಳ್ಳುವುದಕ್ಕಿಂತ ಮೊದಲೇ ಎಚ್ಚೆತ್ತುಕೊಂಡರೇ ಉತ್ತಮ ಎಂದು ಕಿವಿಮಾತು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಬಿ.ಎನ್.ಶಿವಸ್ವಾಮಿ ಅವರು ಮಾತನಾಡಿ, ಎಚ್‌ಐವಿ, ಟಿಬಿ ಎರಡೂ ಕಾಯಿಲೆ ಕಡಿಮೆ ಆಗಬೇಕು. ಇಲ್ಲದಿದ್ದರೆ ದೇಶದ ಆರ್ಥಿಕತೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ. ಮೊದಲೇ ಜಾಗೃತರಾಗಿ ಕಾಯಿಲೆ ಬರದಂತೆ ತಡೆಗಟ್ಟುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಹಾಗಾಗಿ ಈ ಬಗ್ಗೆ ಹೆಚ್ಚು ಜಾಗೃತಿ ಮೂಡಿಸಬೇಕಿದೆ ಎಂದು ಹೇಳಿದರು.
ಭಾರತೀಯ ವೈದ್ಯಕೀಯ ಸಂಘದ ಕಾರ್ಯದರ್ಶಿ ಡಾ.ದಿನೇಶ್ ಭೈರೇಗೌಡ ಮಾತನಾಡಿ, ದೈಹಿಕವಾಗಿ, ಮಾನಸಿಕವಾಗಿ, ಸಾಮಾಜಿಕವಾಗಿ ಮನುಷ್ಯ ಸದೃಢರಾಗಿದ್ದರೆ ದೇಶ ಮತ್ತು ನಮ್ಮ ವಿಶ್ವ ಉನ್ನತ ಮಟ್ಟದಲ್ಲಿ ಇರುತ್ತದೆ. ಏಡ್ಸ್‌ಎನ್ನುವ ಮಾರಕ ರೋಗ ದಿನೇ ದಿನೇ ಸೋಂಕಿತ ಸಂಖ್ಯೆ ಹೆಚ್ಚಾಗುತ್ತಾ ಹೋಗುತ್ತಿದೆ. ಜೊತೆಯಲ್ಲಿ ಟಿಬಿ ಕಾಯಿಲೆ ಕೂಡ ಗಣನೀಯವಾಗಿ ಏರಿಕೆಯಾಗಿದೆ. ಆದ್ದರಿಂದ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈ ಜೋಡಿಸಿ ಎಂದು ಕರೆ ನೀಡಿದರು.
ಜಿಲ್ಲಾ ಕ್ಷಯ ಮತ್ತು ಏಡ್ಸ್‌ನಿಯಂತ್ರಣಾಧಿಕಾರಿ ಡಾ.ಬಿ. ಸಂಧ್ಯಾ, ಕುಷ್ಟರೋಗ ನಿಯಂತ್ರಣಾಧಿಕಾರಿ ಡಾ.ನಾಗೇಶ್ ಪಿ.ಆರಾಧ್ಯ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಶಿವಶಂಕರ್, ಜಿಲ್ಲಾ ರೋಗ ನಿಯಂತ್ರಣಾಧಿಕಾರಿ ಡಾ. ನಾಗಪ್ಪ, ಭಾರತೀಯ ರೆಡ್ ಕ್ರಾಸ್ ಕಾರ್ಯದರ್ಶಿ ಶಬ್ಬೀರ್ ಅಹಮದ್ ಹಾಜರಿದ್ದರು.