ಹಾಸನ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಹಾರ್ ಜೈಲಿಗೆ ಹೋಗುತ್ತಾರೆ ಎಂದು ಮಾಜಿ ಸಿಎಂ ಎಚ್.ಕೆ. ಕುಮಾರಸ್ವಾಮಿ ನೀಡಿರುವ ಹೇಳಿಕೆ ಖಂಡನೀಯ. ಅವರು ಇದೇ ರೀತಿ ಹೇಳಿಕೆಗಳನ್ನು ಮುಂದುವರಿಸಿದರೆ ಅವರ ವಿರುದ್ಧ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಕಾಂಗ್ರೆಸ್ ಸೇವಾದಳದ ಜಿಲ್ಲಾಧ್ಯಕ್ಷ ಎನ್.ಬಿ. ದಿನೇಶ್ ಎಚ್ಚರಿಸಿದರು.
ಇತ್ತೀಚೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಡಿಕೆ ಶಿವಕುಮಾರ್ ವಿರುದ್ಧ ಏಕವಚನದಲ್ಲಿ ಮಾತನಾಡುವ ಮೂಲಕ ಅಗೌರವ ತೋರುವ ಕೆಲಸ ಮಾಡುತ್ತಿದ್ದಾರೆ. ಇದನ್ನು ಕಾಂಗ್ರೆಸ್ ಕಾರ್ಯಕರ್ತ ಸಹಿಸುವುದಿಲ್ಲ. ಜಾತ್ಯತೀತ ಎಂದು ಹೆಸರಿಟ್ಟು ಪಕ್ಷ ಕಟ್ಟಿ ಇದೀಗ ಕೋಮುವಾದಿಗಳ ಜತೆ ಸೇರಿ ಮನ ಬಂದಂತೆ ಮಾತನಾಡುವ ಮನಸ್ಥಿತಿಯನ್ನು ಕುಮಾರಸ್ವಾಮಿ ಅವರು ಬದಲಾಯಿಸಿಕೊಳ್ಳಬೇಕು, ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯದ ಜನರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಎಚ್ಚರಿಕೆ ನೀಡಿದರು.
ಕುಮಾರಸ್ವಾಮಿ ಅವರು ಅಧಿಕಾರ ಇಲ್ಲದೆ ಧೃತಿಗೆಟ್ಟಿದ್ದಾರೆ. ಏಕವಚನದಲ್ಲಿ ಮಾತನಾಡುತ್ತಿದ್ದಾರೆ. ಡಿ.ಕೆ. ಶಿವಕುಮಾರ್ ಕೆಪಿಸಿಸಿ ರಾಜ್ಯಾಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿ. ಅವರ ಬಗ್ಗೆ ಏಕವಚನದಲ್ಲಿ ಮಾತನಾಡುವುದನ್ನು ನಾವು ಸಹಿಸುವುದಿಲ್ಲ. ಕಾಂಗ್ರೆಸ್ ಪಕ್ಷದ ಬಗ್ಗೆ ಹಾಗೂ ಮುಖಂಡರ ಬಗ್ಗೆ ಲಘುವಾಗಿ ಮಾತನಾಡಿದರೆ ನಾವು ಖಂಡಿಸಲೇಬೇಕಾಗುತ್ತದೆ. ಲಘುವಾಗಿ ಮಾತನಾಡುವುದನ್ನು ಇಲ್ಲಿಗೆ ಬಿಡಬೇಕು ಎಂದು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಎಸ್. ಮಂಜುನಾಥ್ ಶರ್ಮಾ, ಮಂಜೇಗೌಡ, ಪ್ರಕಾಶ್, ಸುಪ್ರೀತ್, ಜಗದೀಶ್ ಇತರರು ಉಪಸ್ಥಿತರಿದ್ದರು.