ಚಿಕ್ಕಬಳ್ಳಾಪುರ : ಎತ್ತಿನಹೊಳೆ ನೀರಾವರಿ ಯೋಜನೆಯ ತ್ವರಿತ ಅನುಷ್ಠಾನಕ್ಕೆ ಬಾಕಿ ಉಳಿದಿರುವ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಸರ್ಕಾರದ ಮೇಲೆ ಒತ್ತಡ ಹೇರಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ ಕೆ.ಸುಧಾಕರ್ ಹೇಳಿದರು.
ತಾಲೂಕಿನ ನಂದಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶನಿವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಈಗಾಗಲೇ ಎಚ್.ಎನ್.ವ್ಯಾಲಿ ಯೋಜನೆ ಮೂಲಕ ಜಿಲ್ಲೆಯ ಕೆರೆಗಳನ್ನು ತುಂಬಿಸಲಾಗುತ್ತಿದೆ. ಇದರ ಜತೆಗೆ ಇತರ ಮೂಲಗಳಿಂದಲೂ ನೀರಾವರಿ ಸೌಲಭ್ಯವನ್ನು ಒದಗಿಸಿದಾಗ ಈ ಭಾಗದಲ್ಲಿನ ಹಾಹಾಕಾರ ನಿವಾರಣೆಯಾಗುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಮನುಷ್ಯನ ದೇಹಕ್ಕೆ ರಕ್ತನಾಳಗಳು ಎಷ್ಟು ಮುಖ್ಯವೂ ಒಂದು ದೇಶದ ಸವಾಂಗೀಣ ಪ್ರಗತಿಗೆ ರಸ್ತೆಗಳ ಅಭಿವೃದ್ಧಿ ಮುಖ್ಯ. ಜಿಲ್ಲೆಗೆ ಕುಡಿಯುವ ನೀರು, ಚರಂಡಿ, ವಿದ್ಯುತ್ ದೀಪ ಸೇರಿ ಇತರ ಸೌಲಭ್ಯ ಕಲ್ಪಿಸಲು ಶ್ರಮಿಸಲಾಗುತ್ತಿದೆ ಎಂದರು.ರಾಜ್ಯ ಸರ್ಕಾರದಿಂದ ಹೆಚ್ಚಿನ ಅನುದಾನ ತಂದು ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳಲಾಗುತ್ತಿದೆ. ಜಿಲ್ಲೆಯನ್ನು ಮತ್ತಷ್ಟು ಪ್ರಗತಿಯತ್ತ ಕೊಂಡೊಯ್ಯಲು ಪ್ರತಿಯೊಬ್ಬರು ಸಹಕಾರ ಅಗತ್ಯವಾಗಿದೆ ಎಂದು ಜಿಪಂ ಅಧ್ಯಕ್ಷ ಎಂ.ಬಿ.ಚಿಕ್ಕನರಸಿಂಹಯ್ಯ ಮನವಿ ಮಾಡಿದರು.
ರಾಜ್ಯ ಮಾವು ಮತ್ತು ಮಾರುಕಟ್ಟೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ.ವಿ.ನಾಗರಾಜು, ಜಿಪಂ ಸದಸ್ಯ ಪಿ.ಎನ್.ಕೇಶವರೆಡ್ಡಿ, ತಾಪಂ ಅಧ್ಯಕ್ಷ ಬಿ.ಎಂ.ರಾಮಸ್ವಾಮಿ, ನಗರಸಭೆ ಅಧ್ಯಕ್ಷ ಡಿ.ಎಸ್.ಆನಂದರೆಡ್ಡಿ, ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್, ಅಪರ ಜಿಲ್ಲಾಧಿಕಾರಿ ಎಚ್.ಅಮರೇಶ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಅರಸಲನ್ ಮತ್ತಿತರರು ಇದ್ದರು.