ಮೈಸೂರು: ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರಾಗಿದ್ದ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ತಂಡ ಮೈಸೂರಿನಲ್ಲಿ ಶನಿವಾರ ದಾಳಿ ಮಾಡಿದೆ.
ನಿಷೇಧಿತ ಸಂಘಟನೆಯಲ್ಲಿ ಸಕ್ರಿಯರಾಗಿದ್ದ ಮಂಡಿ ಮೊಹಲ್ಲಾದ ಸುಲೈಮಾನ್ ಎಂಬುವರ ಮನೆ ಮೇಲೆ ದಾಳಿ ನಡೆಸಿ ಅವರನ್ನು ವಶಕ್ಕೆ ಪಡೆದ ಅಧಿಕಾರಿಗಳು ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸಿದ್ದಾರೆ. ಹಲವು ಗಂಟೆಗಳ ಕಾಲ ವಿಚಾರಣೆ ಮಾಡಿದ ನಂತರ ಅವರನ್ನು ಬಿಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಜುಲೈ 26ರಂದು ಪ್ರವೀಣ್ ನೆಟ್ಟಾರು ಅವರನ್ನು ಪುತ್ತೂರು ತಾಲೂಕಿನ ಬೆಳ್ಳಾರೆಯಲ್ಲಿ ಮಾರಕಾಸ್ತ್ರಗಳಿಂದ ಹತ್ಯೆ ಮಾಡಲಾಗಿತ್ತು. ಜುಲೈ 27ರಂದು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ರಾಜ್ಯಾದ್ಯಂತ ಸಾಕಷ್ಟು ಸದ್ದು ಮಾಡಿದ್ದ ಈ ಪ್ರಕರಣವನ್ನು ಆಗಸ್ಟ್ 4ರಂದು ರಾಜ್ಯ ಸರ್ಕಾರ ಎನ್‌ಐಎಗೆ ವಹಿಸಿತ್ತು. ಇದೀಗ ತನಿಖೆಯನ್ನು ಚುರುಕುಗೊಳಿಸಿದೆ.
ಎನ್‌ಐಎ ಅಧಿಕಾರಿಗಳ ದಾಳಿ ಮತ್ತು ವಶಕ್ಕೆ ಪಡೆದಿರುವ ಕುರಿತಂತೆ ಯಾವುದೇ ಮಾಹಿತಿ ಇಲ್ಲ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.