ಜಿಲ್ಲೆ

ಎಲ್ಲರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡಲಾಗುವುದು ಬಿಜೆಪಿ: ದೆಹಲಿ ಶಾಸಕ ಅಭಯ್ ವರ್ಮ

ಹಾಸನ : ರಾಜ್ಯದಲ್ಲಿ ಬಿಜೆಪಿ ಸರ್ಕಾರ ಉತ್ತಮ ಆಡಳಿತ ನೀಡುವ ಮೂಲಕ ಜನಪರ ಸರ್ಕಾರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಮುಂಬರುವ ಚುನಾವಣೆಯಲ್ಲಿ ಕೂಡ ಎಲ್ಲಾ ವರ್ಗದವರ ಸಮಗ್ರ ಅಭಿವೃದ್ಧಿಗಾಗಿ ಜನಪರ ಪ್ರಣಾಳಿಕೆಯನ್ನು ಬಿಜೆಪಿ ಬಿಡುಗಡೆ ಮಾಡಿದೆ ಎಂದು ಹಾಸನ ಚುನಾವಣಾ ಉಸ್ತುವಾರಿ ಹಾಗೂ ದೆಹಲಿಯ ಲಕ್ಷ್ಮೀನಗರ ಕ್ಷೇತ್ರದ ಬಿಜೆಪಿ ಶಾಸಕ ಅಭಯ್ ವರ್ಮ ತಿಳಿಸಿದರು.

ಕೇಂದ್ರದಲ್ಲಿ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಉತ್ತಮ ಆಡಳಿತ ನೀಡುವ ಮೂಲಕ ಹೆಚ್ಚು ಜನಮನ್ನಣೆ ಪಡೆದುಕೊಂಡಿದೆ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜನಸಾಮಾನ್ಯರ ಅಭಿವೃದ್ಧಿಗಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ. ಮುಂದೆ ಕೂಡ ಈ ಡಬ್ಬಲ್ ಇಂಜಿನ್ ಸರ್ಕಾರ ಉತ್ತಮ ಆಡಳಿತ ನೀಡುವ ದೃಷ್ಟಿಯಿಂದ ಹಲವು ಜನಪರ ಯೋಜನೆಗಳನ್ನು ಜಾರಿಗೆ ತರಲಾಗುವುದು. ಇದರಿಂದ ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಬೆಂಬಲಿಸುವಂತೆ ನಗರದ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು.

ಹಾಸನ ಅಭ್ಯರ್ಥಿ ಪ್ರೀತಂ ಗೌಡ ಅವರು ಜನಪರ ಕೆಲಸದ ಮೂಲಕ ಮತಯಾಚನೆ ಮಾಡುತ್ತಿದ್ದಾರೆ. ಆದರೆ ಜೆಡಿಎಸ್ ಅಭ್ಯರ್ಥಿ ಎಚ್.ಪಿ ಸ್ವರೂಪ್ ಅವರು ದೇಣಿಗೆ ಸಂಗ್ರಹದಲ್ಲಿ ತೊಡಗುವ ಮೂಲಕ ಮತದಾರರನ್ನು ಸೆಳೆಯುವ ತಂತ್ರಗಾರಿಕೆಯಲ್ಲಿ ತೊಡಗಿದ್ದಾರೆ ಎಂದು ಲೇವಡಿ ಮಾಡಿದರು.

ಬಿಜೆಪಿ ಬಿಡುಗಡೆ ಮಾಡಿರುವ ಪ್ರಣಾಳಿಕೆಯಲ್ಲಿ ರೈತರು, ಬಡವರು, ಕೂಲಿ-ಕಾರ್ಮಿಕರು, ಮಧ್ಯಮ ವರ್ಗದವರು, ಮಹಿಳೆಯರು, ಯುವಕರು ಸೇರಿದಂತೆ ಎಲ್ಲಾ ವರ್ಗದವರನ್ನು ಕೂಡ ಆರ್ಥಿಕವಾಗಿ ಸದೃಢ ಮಾಡಲಾಗುವುದು. ಇದರ ಜತೆಗೆ ಇದೇ ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಚಿಂತನೆ ಇಟ್ಟುಕೊಂಡು ಉತ್ತಮ ಯೋಜನೆಗಳನ್ನು ಜಾರಿಗೆ ತರಲು ಮುಂದಾಗಿದೆ. ಆದ್ದರಿಂದ ಈ ಬಾರಿ ಕೂಡ ರಾಜ್ಯದ ಜನರು ಹೆಚ್ಚು ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಹೇಮಂತ್ ಕುಮಾರ್, ಜಿಲ್ಲಾ ರೈತ ಮೋರ್ಚಾದ ಉಪಾಧ್ಯಕ್ಷ ಗಂಗಾಧರ್, ಜಿಲ್ಲಾ ಸಹ ವಕ್ತಾರರಾದ ವೇದಾವತಿ, ಮಾಧ್ಯಮ ವಕ್ತಾರ ಐನೆಟ್ ವಿಜಿ ಕುಮಾರ್ ಸೇರಿದಂತೆ ಇತರರಿದ್ದರು.