ಹಾಸನ: ಹಾಸನಾಂಬ ಜಾತ್ರಾ ಮಹೋತ್ಸವವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬ ಅಧಿಕಾರಿ ಮತ್ತು ಸಿಬ್ಬಂದಿಗಳು ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಸಿ.ಸತ್ಯಭಾಮಾ ಸೂಚನೆ ನೀಡಿದರು.
ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಹಾಸನಾಂಬ ಜಾತ್ರಾ ಮಹೋತ್ಸವದ ಸಂಬಂದ ಪೂರ್ವ ಸಿದ್ದತೆ ಸಭೆಯಲ್ಲಿ ಮಾತನಾಡಿ, ಶಕ್ತಿ ಯೋಜನೆ ಜಾರಿಯಲ್ಲಿವ ಕಾರಣ ಜಿಲ್ಲೆ ಹಾಗೂ ಬೇರೆ ಬೇರೆ ಜಿಲ್ಲೆಗಳಿಂದ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ನಿರೀಕ್ಷೆ ಇದೆ. ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಕ್ರವಹಿಸಬೇಕು ಎಂದು ಹೇಳಿದರು.
ದೇವರ ದರ್ಶನಕ್ಕೆ ಆಗಮಿಸುವ ಸಾರ್ವಜನಿಕರ ಅನುಕೂಲಕ್ಕಾಗಿ 8 ಕಡೆಗಳಲ್ಲಿ ತಾತ್ಕಾಲಿಕವಾಗಿ ನಿರ್ಮಿಸುವ ಒಟ್ಟು 50 ಶೌಚಾಲಯಗಳ ಸ್ವಚ್ಚತೆಗೆ ಹೆಚ್ಚಿನ ಗಮನಹರಿಸಬೇಕು, ಕುಡಿಯುವ ನೀರು ಒದಗಿಸಲು ಕ್ರಮವಹಿಸುವಂತೆ ತಿಳಿಸಿದರು.
ಆಹ್ವಾನ ಪತ್ರಿಕೆ, ಪೂಜಾ ವೇಳಾ ಪಟ್ಟಿ, ಲಾಡು ಪ್ರಸಾದ, ದೀಪಾಲಂಕಾರ, ಪ್ರಸಾದ ವಿತರಣೆ, ಹೂವಿನ ಅಲಂಕಾರ, ಬ್ಯಾರಿಕೇಡ್, ಸಿ.ಸಿ.ಟಿ.ವಿ. ಅಳವಡಿಕೆ, ವಾಹನಗಳ ಪಾರ್ಕಿಂಗ್ ವ್ಯವಸ್ಥೆ, ಆಗ್ನಿ ಶಾಮಕ ವಾಹನ ಹಾಗೂ ಅಂಬುಲೆನ್ಸ್ ವ್ಯವಸ್ಥೆ, ದೇವರ ಪೂಜೆಯನ್ನು ಸಾರ್ವಜನಿಕರು ವೀಕ್ಷಣೆ ಮಾಡಲು ಅನುಕೂಲವಾಗುವಂತೆ ನೇರ ಪ್ರಸಾರಕ್ಕೆ ಎಲ್.ಇ.ಡಿ. ಪರದೆ ವ್ಯವಸ್ಥೆ, ಜಾತ್ರಾ ಸಂದರ್ಭದಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಗುರುತಿನ ಚೀಟಿ ವಿತರಣೆಗೆ ಕ್ರಮವಹಿಸಲು ಸೂಚಿಸಿದರು.
ದೇವರ ದರ್ಶನಕ್ಕಾಗಿ ವಿತರಿಸುವ ರೂ.300 ರೂ.1000 ಪಾಸ್ ಹಾಗೂ ವಿ.ವಿ.ಐ.ಪಿ ಪಾಸ್‌ಗಳಿಗೆ ಬಾರ್ ಕೋಡ್ ಅಳವಡಿಸಲಾಗುವುದು. ಈ ಪಾಸ್‌ಗಳನ್ನು ಸ್ಕ್ಯಾನ್ ಮಾಡಿದ ನಂತರ ಪ್ರವೇಶ ಕಲ್ಪಿಸಲಾಗುವುದು ಎಂದು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ ಮಾತನಾಡಿ, ಬಂದುಬಸ್ತ್‌ಗೆ ಸಂಬಂದಿಸಿದಂತೆ ರೂಟ್ ಮ್ಯಾಪ್ ತಯಾರಿಸಿಕೊಂಡು ಅಗತ್ಯ ಸಿದ್ದತೆ ಮಾಡಿಕೊಳ್ಳುವಂತೆ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು. ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಹಿನ್ನಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ ಎಂದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಕ ಅಧಿಕಾರಿ ಬಿ.ಆರ್.ಪೂರ್ಣಿಮ, ಅಪರ ಜಿಲ್ಲಾಧಿಕಾರಿ ಕೆ.ಟಿ.ಶಾಂತಲಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತಮ್ಮಯ್ಯ, ಉಪ ವಿಭಾಗಾಧಿಕಾರಿ ಮಾರುತಿ ಮತ್ತಿತರ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.