ಹೂವಿನಹಡಗಲಿಯ ಜಿಪಿಜಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗಾಗಿ ಮುಖ್ಯಶಿಕ್ಷಕರ ಶೈಕ್ಷಣಿಕ ಸಮಾಲೋಚನಾ ಸಭೆಯಲ್ಲಿ ಬಿಇಒ ಎಸ್.ಎನ್.ಹಳ್ಳಿಗುಡಿ ಮಾತನಾಡಿದರು.  
ಜಿಲ್ಲೆ

ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಿಸಲು ಶ್ರಮಿಸಿ

ಹೂವಿನಹಡಗಲಿ: ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಶೈಕ್ಷಣಿಕ ಫಲಿತಾಂಶ ಹೆಚ್ಚಿಸಲು ಶಾಲೆಯ ಮುಖ್ಯಶಿಕ್ಷಕರು ಹೆಚ್ಚಿನ ಶ್ರಮ ವಹಿಸಬೇಕು ಎಂದು ಬಿಇಒ ಎಸ್.ಎನ್.ಹಳ್ಳಿಗುಡಿ ಹೇಳಿದರು.

ಪಟ್ಟಣದ ಜಿಪಿಜಿ ಪ್ರೌಢಶಾಲೆಯಲ್ಲಿ ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ಹಾಗೂ ತಾಲೂಕು ಪ್ರೌಢಶಾಲಾ ಮುಖ್ಯಶಿಕ್ಷಕರ ಸಂಘ ಗುರುವಾರ ಆಯೋಜಿಸಿದ್ದ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗಾಗಿ ಮುಖ್ಯಶಿಕ್ಷಕರ ಶೈಕ್ಷಣಿಕ ಸಮಾಲೋಚನಾ ಸಭೆಯಲ್ಲಿ ಮಾತನಾಡಿದರು. ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ತಾಲೂಕಿನ ಎಲ್ಲ ಪ್ರೌಢಶಾಲಾ ಶಿಕ್ಷಕರಿಗೆ ಕಾರ್ಯಾಗಾರ ನಡೆಸಿ ತರಬೇತಿ ನೀಡಲಾಗಿದೆ. ಪ್ರತಿಯೊಬ್ಬ ಶಿಕ್ಷಕ ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಯನ್ನು ಗುರುತಿಸಿ, ಅವರಿಗೆ ಕಠಿಣವೆನಿಸಿದ ವಿಷಯಗಳನ್ನು ಪುನರ್ಮನನ ಮಾಡಬೇಕು. ಕಠಿಣ ವಿಷಯಗಳಾದ ಗಣಿತ, ವಿಜ್ಞಾನ, ಇಂಗ್ಲಿಷ್ ಸೇರಿ ಎಲ್ಲ ವಿಷಯಗಳಲ್ಲಿ ಉತ್ತೀರ್ಣರಾಗುವಂತೆ ಸೂಕ್ತ ಮಾರ್ಗದರ್ಶನ ನೀಡಬೇಕು ಎಂದು ಸೂಚನೆ ನೀಡಿದರು.

ಈಗಾಗಲೇ ಎಲ್ಲ ಪ್ರೌಢಶಾಲೆಗಳಿಗೆ ಕಲಿಕಾಸೆರೆ ಪುಸ್ತಕ ವಿತರಿಸಲಾಗಿದೆ. ಮಾ.9ರಿಂದ 17ರವರೆಗೆ ನಡೆಯುವ 5 ಮತ್ತು 8ನೇ ತರಗತಿ ಮೌಲ್ಯಾಂಕನ ಪರೀಕ್ಷೆಗೆ ಸಕಲ ಸಿದ್ಧತೆ ಮಾಡಿಕೊಂಡಿಕೊಳ್ಳಬೇಕು ಎಂದರು.

ತಾಲೂಕು ಕ್ಷೇತ್ರ ಸಮನ್ವಯಾಧಿಕಾರಿ ಎ.ಕೋಟೆಪ್ಪ, ತಾಲೂಕು ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಹನುಮಂತಪ್ಪ, ತಾಲೂಕು ಪ್ರೌಢಶಾಲಾ ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ ಪಿ.ಪ್ರಕಾಶ್, ಕಾರ್ಯದರ್ಶಿ ಸುರೇಶ ಅಂಗಡಿ, ಬಿಆರ್‌ಪಿ ಕಾಶಿ ವಿಶ್ವನಾಥ, ಮುಖ್ಯಶಿಕ್ಷಕ ಕಡ್ಲಿ ದಾದಾ ಸಾಹೇಬ್, ಎಸ್ಸೆಸ್ಸೆಲ್ಸಿ ನೋಡಲ್ ಅಧಿಕಾರಿಗಳಾದ ಎಚ್.ಮಲ್ಲಿಕಾರ್ಜುನ, ಸಚಿನ್ ಆರಾಧ್ಯ ಇತರರಿದ್ದರು.