ಚಾಮರಾಜನಗರ: ವಿವಿಧ ಇಲಾಖೆಗಳು ಹಾಗೂ ಎಲ್ಲ ನಗರ, ಸ್ಥಳೀಯ ಸಂಸ್ಥೆಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಉಪಯೋಜನೆಯಡಿ ಸೌಲಭ್ಯಗಳ ವಿತರಣೆಯಲ್ಲಿ ಫಲಾನುಭವಿಗಳ ಆಯ್ಕೆ ಪಾರದರ್ಶಕತೆಯಿಂದ ಕೂಡಿರುವಂತೆ ನೋಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಉಪಯೋಜನೆಯ ಜಿಲ್ಲಾಮಟ್ಟದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೊಳ್ಳೇಗಾಲದಲ್ಲಿ ಪೌರಕಾರ್ಮಿಕರ ಮಕ್ಕಳಿಗೆ ಲ್ಯಾಪ್‌ಟಾಪ್ ನೀಡದಿರುವ ದೂರುಗಳು ಬಂದಿವೆ. ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳು ಕ್ರಿಯಾಯೋಜನೆ ಅಂತಿಮಗೊಳಿಸಿ, ಶೀಘ್ರವಾಗಿ ಸೌಲಭ್ಯ ವಿತರಿಸಲು ಮುಂದಾಗಬೇಕು. ಸೌಲಭ್ಯಗಳ ವಿತರಣೆಯಲ್ಲಿ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಪಾರದರ್ಶಕವಾಗಿರಬೇಕು. ಈ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬರದ ಹಾಗೆ ಸೌಲಭ್ಯಗಳನ್ನು ಸಮರ್ಪಕವಾಗಿ ವಿತರಿಸುವ ಕೆಲಸವಾಗಬೇಕು. ಜಿಲ್ಲಾ ನಗರಾಭಿವೃದ್ಧಿ ಕೋಶ ಎಲ್ಲಾ ನಗರ, ಸ್ಥಳೀಯ ಸಂಸ್ಥೆಗಳ ಕಾರ್ಯ ಚಟುವಟಿಕೆಗಳನ್ನು ಚುರುಕುಗೊಳಿಸಬೇಕು ಎಂದರು.
ಕೃಷಿ ಇಲಾಖೆಗೆ ಸಂಬಂಧಿಸಿದಂತೆ ಯಾಂತ್ರೀಕರಣ, ಸೂಕ್ಷ್ಮ ನೀರಾವರಿ ಯೋಜನೆ, ಇತರೆ ಯೋಜನೆಗಳಿಗೆ ಮೊದಲ ಕಂತಿನ ಅನುದಾನ ಬಿಡುಗಡೆಯಾಗಿದ್ದು, ನಿಗದಿತ ಕಾಲಮಿತಿಯಲ್ಲಿ ಸೌಲಭ್ಯಗಳು ಫಲಾನುಭವಿಗಳಿಗೆ ತಲುಪಬೇಕು. ಯೋಜನೆಗಳ ಬಗ್ಗೆ ಆಯಾ ಭಾಗದ ಜನಪ್ರತಿನಿಧಿಗಳ ಗಮನಕ್ಕೆ ತಂದು ಸೌಲಭ್ಯ ವಿತರಣೆಯನ್ನು ವೇಗಗೊಳಿಸಿ ಒಂದು ತಿಂಗಳೊಳಗೆ ಕ್ರಮ ವಹಿಸಬೇಕು. ತೋಟಗಾರಿಕೆ ಇಲಾಖೆಯು ನರೇಗಾ ಯೋಜನೆಯ ಸಹಯೋಗದಲ್ಲಿ ಆಯಾ ಪ್ರದೇಶದ ಮಣ್ಣಿನ ಫಲವತ್ತತೆಯನ್ನು ಆಧರಿಸಿ ಹೆಚ್ಚು ಬೇಡಿಕೆಯುಳ್ಳ ಡ್ರ್ಯಾಗನ್ ಪ್ರೂಟ್ ಬೆಳೆಯಲು ಅದ್ಯತೆ ನೀಡಬೇಕು. ಇತರೆ ಜಿಲ್ಲೆಗಳ ಪ್ರಗತಿಪರ ಅನುಷ್ಠಾನ ಕಾರ್ಯಕ್ರಮಗಳನ್ನು ನಾವು ಮಾದರಿಯಾಗಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.
ನಗರದ ಹೊರವಲಯದಲ್ಲಿರುವ ವೈದ್ಯಕೀಯ (ಸಿಮ್ಸ್) ಆಸ್ಪತ್ರೆಯ ರಸ್ತೆಯಲ್ಲಿ ಚಾಮರಾಜನಗರ ಪಟ್ಟಣದಿಂದ ಸಾರ್ವಜನಿಕರು ಹಾಗೂ ಬಸ್‌ಗಳು ಸೇರಿದಂತೆ ಇತರೆ ವಾಹನಗಳ ಓಡಾಟ ಅಧಿಕವಾಗುತ್ತಿದೆ. ಕಿರಿದಾಗಿರುವ ರಸ್ತೆಯ ಇಕ್ಕೆಲಗಳಲ್ಲಿ ಪಾದಚಾರಿಗಳಿಗೂ ಸುಗಮ ಸಂಚಾರಕ್ಕೆ ಸಮಸ್ಯೆಯಾಗುತ್ತಿರುವುದು ಕಂಡುಬಂದಿದೆ. ಮುಂದಿನ ದಿನಗಳಲ್ಲಿ ರಸ್ತೆ ಒತ್ತುವರಿಯಾಗುವ ಸಂಭವವಿದೆ. ಭವಿಷ್ಯದ ಹಿತದೃಷ್ಠಿಯಿಂದ ಸಿಮ್ಸ್ ಆಸ್ಪತ್ರೆವರೆಗೆ ಜೋಡಿರಸ್ತೆಯನ್ನಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಅವಶ್ಯ ಕ್ರಮಗಳನ್ನು ವಹಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಬಿಂದ್ಯಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್. ಚಿದಂಬರ, ನಗರಸಭೆ ಪೌರಾಯುಕ್ತ ರಾಮದಾಸ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಾಮಚಂದ್ರರಾಜೇ ಅರಸ್, ಜಿಲ್ಲಾಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.