ಜಿಲ್ಲೆ

ಎಸ್‌ಸಿಎಸ್‌ಪಿ-ಟಿಎಸ್‌ಪಿ ಅನುದಾನ ಪೂರ್ಣ ಬಳಕೆಯಾಗಬೇಕು : ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ

Mysuru

ಮೈಸೂರು: ವಿವಿಧ ಇಲಾಖೆಗಳಿಗೆ ಬಿಡುಗಡೆಯಾಗಿರುವ ಎಸ್‌ಸಿಎಸ್‌ಪಿ, ಟಿಎಸ್‌ಪಿ ಅನುದಾನವನ್ನು ಪೂರ್ಣ ಪ್ರಮಾಣದಲ್ಲಿ ಸದ್ಬಳಕೆ ಮಾಡ ಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಎಸ್‌ಸಿಎಸ್‌ಪಿ, ಟಿಎಸ್‌ಪಿ ಜಿಲ್ಲಾ ಮೇಲ್ವಿಚಾರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಎಸ್‌ಸಿಎಸ್‌ಪಿ, ಟಿಎಸ್‌ಪಿ ಅನುದಾನವನ್ನು ಆಯಾ ಆರ್ಥಿಕ ವರ್ಷದಲ್ಲಿಯೇ ಬಳಕೆ ಮಾಡಬೇಕು. ಸರ್ಕಾರದ ಅನುದಾನ ಬರುವ ಮೊದಲೇ ಫಲಾನುಭವಿಗಳನ್ನು ಆಯ್ಕೆ ಮಾಡಿಕೊಂಡಿರಬೇಕು ಎಂದು ನಿರ್ದೇಶನ ನೀಡಿದರು.

ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಇತರೆ ಇಲಾಖೆಯ ಎಸ್‌ಸಿಎಸ್‌ಪಿ, ಟಿಎಸ್‌ಪಿ ಅನುದಾನವನ್ನು ಹಾಗೂ ಕಾಮಗಾರಿಗಳನ್ನು ಪರಿಶೀಲಿಸಬೇಕು. ಅನುದಾನ ಬಳಕೆ ಮಾಡದೆ ವ್ಯರ್ಥವಾದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಅಲೋಕೇಶನ್ ಆಗಿರುವ ಅನುದಾನ ಶೇ.100 ರಷ್ಟು ಬರುತ್ತದೆ. ಆದ್ದರಿಂದ ಕ್ರೀಯಾಯೋಜನೆ ರೂಪಿಸಿಕೊಂಡು ಕಾರ್ಯಾದೇಶ ನೀಡುವ ನೀಡುವ ಹಂತದಲ್ಲಿ ಇಟ್ಟುಕೊಂಡಿರಬೇಕು ಎಂದು ಸಲಹೆ ನೀಡಿದರು.

ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಜನಸಂಖ್ಯೆ ಹೆಚ್ಚು ಇದ್ದು, ಎಸ್‌ಸಿಎಸ್‌ಪಿ, ಟಿಎಸ್‌ಪಿ ಕಾಮಗಾರಿಗಳಲ್ಲಿ ಅಸೆಟ್ ಕ್ರಿಯೇಟ್ ಆಗುವಂತಹ ಕಾಮಗಾರಿಗಳನ್ನು ಕೈಗೊಳ್ಳಬೇಕು. ಅರ್ಹರಿಗೆ ಮಾತ್ರ ಸೌಲಭ್ಯಗಳನ್ನು ತಲುಪಿಸಬೇಕು ಎಂದು ಹೇಳಿದರು.
ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಮಾಲತಿ ಹಾಗೂ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.