ಜಿಲ್ಲೆ

ಎಸ್ಸೆಸ್ಸೆಲ್ಸಿ ಪರೀಕ್ಷೆ ಇಂದಿನಿಂದ

Haveri

ಹಾವೇರಿ: ಕರೊನಾ ಎರಡನೇ ಅಲೆ ಹಿನ್ನೆಲೆಯಲ್ಲಿ ಈ ಬಾರಿ ವಿದ್ಯಾರ್ಥಿಗಳ ಆರೋಗ್ಯದ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಿ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲಾಗುತ್ತಿದ್ದು, ಅದಕ್ಕಾಗಿ ಭಾನುವಾರ ಕೊನೆಯ ಹಂತದ ಪೂರ್ವ ಸಿದ್ಧತೆ ಮಾಡಿಕೊಳ್ಳಲಾಯಿತು.
ಜು. 19 ಮತ್ತು 22ರಂದು ಎರಡು ದಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ನಡೆಯಲಿದ್ದು, ಭಾನುವಾರ ಪರೀಕ್ಷಾ ಕೇಂದ್ರಗಳ ಎಲ್ಲ ಕೊಠಡಿಗಳನ್ನು ಸ್ಯಾನಿಟೈಸ್ ಮಾಡಲಾಯಿತು. ಡಿಡಿಪಿಐ ಹಾಗೂ ಆಯಾ ತಾಲೂಕಿನ ಬಿಇಒಗಳು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ, ವ್ಯವಸ್ಥೆ ಪರಿಶೀಲಿಸಿದರು.
ಜಿಲ್ಲೆಯಲ್ಲಿ ಒಟ್ಟು 24,089 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಕರೊನಾ ಹಿನ್ನೆಲೆಯಲ್ಲಿ ಪರಸ್ಪರ ಅಂತರ ಕಾಪಾಡುವ ಸಲುವಾಗಿ 1 ಕೊಠಡಿಯಲ್ಲಿ 12 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಕರೊನಾ ಸೋಂಕು ಇಳಿಮುಖವಾಗಿದ್ದರೂ ವಿದ್ಯಾರ್ಥಿಗಳ ಸುರಕ್ಷತೆಗೆ ಗರಿಷ್ಠ ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿದೆ. ಹಾವೇರಿ ತಾಲೂಕಿನಲ್ಲಿ 29, ಬ್ಯಾಡಗಿ 14, ಹಾನಗಲ್ಲ 29, ಹಿರೇಕೆರೂರ 18, ರಾಬೆನ್ನೂರ 28, ಶಿಗ್ಗಾಂವಿ 20 ಹಾಗೂ ಸವಣೂರ ತಾಲೂಕಿನಲ್ಲಿ 17 ಸೇರಿ ಜಿಲ್ಲೆಯಲ್ಲಿ ಒಟ್ಟು 155 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸಲು 7,135 ಶಿಕ್ಷಕರು ಮತ್ತು ಸಿಬ್ಬಂದಿ ನೇಮಕ ಮಾಡಲಾಗಿದೆ. ಇದರಲ್ಲಿ 4,764 ಜನರು ಪರೀಕ್ಷಾ ಕೊಠಡಿ ಮೇಲ್ವಿಚಾರಕರಾಗಿದ್ದು, 2,371 ಜನರನ್ನು ಇತರ ಕಾರ್ಯಕ್ಕೆ ನಿಯೋಜನೆಗೊಳಿಸಲಾಗಿದೆ. ಜು. 19ರಂದು ಗಣಿತ, ವಿಜ್ಞಾನ, ಸಮಾಜವಿಜ್ಞಾನ ಹಾಗೂ ಜು. 22ರಂದು ಪ್ರಥಮ, ದ್ವಿತೀಯ, ತೃತೀಯ ಭಾಷೆಗಳ ಪರೀಕ್ಷೆ ನಡೆಯಲಿವೆ ಎಂದು ಡಿಡಿಪಿಐ ಅಂದಾನೆಪ್ಪ ವಡಗೇರಿ ‘ವಿಜಯವಾಣಿ’ಗೆ ಮಾಹಿತಿ ನೀಡಿದರು.
ಈ ಬಾರಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಮೊದಲ ಬಾರಿಗೆ ವಿವರಣಾತ್ಮಕ ಉತ್ತರದ ಬದಲಾಗಿ ಬಹು ಆಯ್ಕೆ ಮಾದರಿ ಪ್ರಶ್ನೆ ಪತ್ರಿಕೆಗೆ ಉತ್ತರ ಬರೆಯಲಿದ್ದಾರೆ. ಅದಕ್ಕಾಗಿ ಒಎಂಆರ್ ಶೀಟ್ ಯಾವ ರೀತಿ ಭರ್ತಿ ಮಾಡಬೇಕು ಎಂಬ ತರಬೇತಿಯನ್ನು ಈಗಾಗಲೇ ಎಲ್ಲ ವಿದ್ಯಾರ್ಥಿಗಳಿಗೆ ನೀಡಲಾಗಿದೆ.
ಆತಂಕ ಬೇಡ… ಆತ್ಮವಿಶ್ವಾಸ ಇರಲಿ…
ಬ್ಯಾಡಗಿ:
ವಿದ್ಯಾರ್ಥಿಗಳು ಯಾವುದೇ ಆತಂಕಕ್ಕೊಳಗಾಗದೆ ನಿರ್ಭಯವಾಗಿ ಪರೀಕ್ಷೆ ಬರೆಯಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಕೆ. ರುದ್ರಮುನಿ ಹೇಳಿದರು.
ತಾಲೂಕಿನ ಕದರಮಂಡಲಗಿ ಗ್ರಾಮದ ಸ್ಪಂದನಾ ಪ್ರೌಢಲೆಯ ಪರೀಕ್ಷೆ ಕೇಂದ್ರವನ್ನು ಭಾನುವಾರ ಪರಿಶೀಲಿಸಿ ಅವರು ಮಾತನಾಡಿದರು. ‘ತಾಲೂಕಿನಲ್ಲಿ 14 ಕೇಂದ್ರಗಳನ್ನು ತೆರೆಯಲಾಗಿದೆ. ಅಧಿಕಾರಿಗಳಿಗೆ ಆಯಾ ಕೇಂದ್ರಗಳ ಜವಾಬ್ದಾರಿ ನೀಡಲಾಗಿದೆ. ಎಲ್ಲ ಕೊಠಡಿಗಳನ್ನು ಸ್ಯಾನಿಟೈಸ್ ಮಾಡಿಸಿದ್ದು, ಒಂದು ಕೊಠಡಿಯಲ್ಲಿ 12 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ತಾಲೂಕಿನಲ್ಲಿ 2253 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಯಾವುದೇ ತೊಂದರೆಯಾಗದಂತೆ ಕ್ರಮವಹಿಸಲಾಗಿದೆ ಎಂದರು.
ಬಿಆರ್​ಸಿ ಶಿಕ್ಷಕರಾದ ಬಸವರಾಜ ಸೋಮಕ್ಕಳವರ, ಎಂ.ಎಫ್. ರ್ಬಾ, ಡಿ.ಬಿ. ಕುಸಗೂರು ಇದ್ದರು.