ಚಿತ್ರದುರ್ಗ: ಎಸ್ಸೆಸ್ಸೆಲ್ಸಿ ಪಾವಿತ್ರ್ಯತೆ, ನೈತಿಕತೆ ಕಾಪಾಡುವ ನಿಟ್ಟಿನಲ್ಲಿ ಪರೀಕ್ಷಾ ಕಾರ್ಯ ಬಹಳ ಎಚ್ಚರಿಕೆಯಿಂದ ನಿರ್ವಹಿಸಿ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.
ಎಸ್ಸೆಸ್ಸೆಲ್ಸಿ ಪರೀಕ್ಷೆ ಕುರಿತು ಎಸಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಪರೀಕ್ಷಾ ಪೂರ್ವ ಸಿದ್ಧತಾ ಕಾರ್ಯಗಳ ಸಭೆಯಲ್ಲಿ ಮಾತನಾಡಿದರು.
ಎಸ್ಸೆಸ್ಸೆಲ್ಸಿ ಜೀವನದ ಮಹತ್ತರ ಘಟ್ಟವಾಗಿದೆ. ಈ ಪರೀಕ್ಷೆ ವಿದ್ಯಾರ್ಥಿಗಳ ಮೌಲ್ಯಮಾಪನದ ಜೊತೆಗೆ, ಶಿಕ್ಷಕರ ಬೋಧನಾ ಸಾಮರ್ಥ್ಯ ಹಾಗೂ ಶೈಕ್ಷಣಿಕ ವ್ಯವಸ್ಥೆಯ ಮೌಲ್ಯಮಾಪನದ ಮಾನದಂಡವು ಆಗಿದೆ ಎಂದರು.
ಸರ್ಕಾರ ಕೂಡ ಎಸ್ಸೆಸ್ಸೆಲ್ಸಿ ಪರೀಕ್ಷೆ ಗಂಭೀರವಾಗಿ ಪರಿಗಣಿಸಿದೆ. ಹೀಗಾಗಿ ಎಲ್ಲಿಯೂ ಲೋಪವಾಗದಂತೆ ನೋಡಿಕೊಳ್ಳಿ. ಪ್ರಶ್ನೆ ಪತ್ರಿಕೆ, ಖಾಲಿ ಉತ್ತರ ಪತ್ರಿಕೆ ಹೊರತೆಗೆಯುವಾಗ, ಪರೀಕ್ಷೆ ನಂತರ ಉತ್ತರ ಪತ್ರಿಕೆಗಳನ್ನು ಸ್ಟ್ರಾಂಗ್ ರೂಂಗೆ ತಲುಪಿಸುವಾಗ ಪೊಲೀಸ್ ಭದ್ರತೆ ಪಡೆದುಕೊಳ್ಳಿ ಎಂದು ಸಲಹೆ ನೀಡಿದರು.
ಜಿಲ್ಲೆಯಲ್ಲಿ ಗುರುತಿಸಿರುವ 5 ಸೂಕ್ಷ್ಮ್ಮ ಪರೀಕ್ಷಾ ಕೇಂದ್ರಗಳಲ್ಲಿ ಭದ್ರತೆಗಾಗಿ ಹೆಚ್ಚುವರಿ ಪೊಲೀಸರನ್ನು ನೇಮಿಸಬೇಕು. ಬೇಸಿಗೆ ಕಾಲವಾದ್ದರಿಂದ ಎಲ್ಲ ಕೇಂದ್ರಗಳಲ್ಲೂ ವಿದ್ಯಾರ್ಥಿಗಳಿಗೆ ಶುದ್ಧ ಕುಡಿಯವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಪ್ರಥಮ ಚಿಕಿತ್ಸಾ ಪರಿಕರದೊಂದಿಗೆ ಆರೋಗ್ಯ ಸಿಬ್ಬಂದಿ ನೇಮಿಸಬೇಕು. ಸಾರಿಗೆ ಅಧಿಕಾರಿಗಳು ಮಾರ್ಗಾಧಿಕಾರಿಗಳಿಗೆ ಅಗತ್ಯ ಇರುವ ವಾಹನಗಳನ್ನು ಒದಗಿಸಬೇಕು ಎಂದು ಸೂಚಿಸಿದರು.
ಬಿಇಒ ನಾಗಭೂಷಣ್ ಮಾತನಾಡಿ, ಮಾ. 25ರಿಂದ ಏ. 6ವರೆಗೆ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ನಡೆಯಲಿದೆ. ಜಿಲ್ಲೆಯ 78 ಕೇಂದ್ರದಲ್ಲಿ 24,228 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪ್ರಶ್ನೆ ಪತ್ರಿಕೆ ಹಾಗೂ ಉತ್ತರ ಪತ್ರಿಕೆಗಳ ಸಾಗಾಟಕ್ಕೆ ಒಟ್ಟು 34 ಮಾರ್ಗಗಳನ್ನು ಗುರುತಿಸಲಾಗಿದೆ ಎಂದು ಮಾಹಿತಿ ನೀಡಿದರು.
ಚಳ್ಳಕೆರೆ ತಾಲೂಕಿನಲ್ಲಿ 5,387 ವಿದ್ಯಾರ್ಥಿಗಳು, ಚಿತ್ರದುರ್ಗ-6,662, ಹಿರಿಯೂರು-3,716, ಹೊಳಲ್ಕೆರೆ-2,739, ಹೊಸದುರ್ಗ-3,333, ಮೊಳಕಾಲ್ಮೂರು ತಾಲೂಕಿನ 2,391 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ವಿವರಿಸಿದರು.
ಎಎಸ್‌ಪಿ ಎ.ವಿ.ಲಕ್ಷ್ಮಿನಾರಾಯಣ, ಡಿಡಿಪಿಐ ನಾಸಿರುದ್ದೀನ್, ಆರ್‌ಟಿಒ ಭರತ್ ಎಂ. ಕಾಳೆಸಿಂಘೆ ಇತರರಿದ್ದರು.