ಹಾಸನ: ಕಾವೇರಿ ನದಿ ರಕ್ಷಣಾ ಸಮಿತಿಯಿಂದ ನ್ಯಾಯಯುತ ನೀರಿನ ಹಕ್ಕಿಗಾಗಿ ಏ.5 ರಂದು ಬೆಂಗಳೂರಿನಲ್ಲಿ ಒಂದು ದಿನದ ಕಾರ್ಯಾಗಾರ ಹಾಗೂ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಅಧ್ಯಕ್ಷ ಎಚ್.ಕೆ.ರಾಮು ತಿಳಿಸಿದರು.
ಏ.5ರಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ಕುವೆಂಪು ಕಲಾಕ್ಷೇತ್ರದಲ್ಲಿ ಕಾರ್ಯಾಗಾರ ನಡೆಯಲಿದೆ. ಮೈಸೂರಿನ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ ಹಾಗೂ ಶ್ರೀ ಆದಿ ಚುಂಚನಗಿರಿ ಮಹಾ ಸಂಸ್ಥಾನ ಮಠದ ಪರಮಪೂಜ್ಯ ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಕಾರ್ಯಾಗಾರದಲ್ಲಿ ದಿವ್ಯ ಸಾನಿಧ್ಯ ವಹಿಸುವರು. ಸಿಎಂ ಸಿದ್ದರಾಮಯ್ಯ ಅವರು ಉದ್ಘಾಟನೆ ನೆರವೇರಿಸುವರು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ರಾಜ್ಯ ಸರ್ಕಾರದ ಹಲವು ಸಚಿವರು, ಸಂಸದರು ಕಾರ್ಯಾಗಾರದಲ್ಲಿ ಭಾಗಿಯಾಗಲಿದ್ದು, ನೀರಾವರಿ ತಜ್ಞರಾದ ಕೆ.ಎ.ತಿಪ್ಪೇಸ್ವಾಮಿ, ಜಯಪ್ರಕಾಶ್, ರಾಮಯ್ಯ, ವೆಂಕಟರಾಮು, ಹಿರಿಯ ವಕೀಲರು ಹಾಗೂ ರೈತ ಮುಖಂಡರು ವಿಷಯ ಮಂಡನೆ ಮಾಡಲಿದ್ದಾರೆ ಎಂದರು.
ಅದೇ ದಿನ ಸಂಜೆ 4 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಪರಮಪೂಜ್ಯ ಶ್ರೀ ನಂಜಾವಧೂತ ಮಹಾಸ್ವಾಮೀಜಿ, ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸುವರು. ಮುಖ್ಯ ಅತಿಥಿಗಳಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಮೊದಲಾದ ಸಚಿವರು ಭಾಗಿಯಾಗುವರು ಎಂದು ವಿವರಿಸಿದರು.
ಕಾವೇರಿ ವಿಚಾರದಲ್ಲಿ ಹಿಂದಿನಿಂದ ಏನಾಗಿದೆ, ಹಲವು ವರ್ಷಗಳ ಸಮಸ್ಯೆಗೆ ಪರಿಹಾರ ಕಂಡು ಹಿಡಿಯುವುದು ಹೇಗೆ ಎಂಬಿತ್ಯಾದಿಯಾಗಿ ಚರ್ಚೆ ನಡೆಯಲಿದೆ. ಅದಕ್ಕಾಗಿ ಎಲ್ಲರನ್ನೂ ಒಂದೇ ವೇದಿಕೆಯಲ್ಲಿ ಕರೆ ತರುವ ಪ್ರಯತ್ನ ಮಾಡಲಾಗುತ್ತಿದೆ. ನ್ಯಾಯವಾದಿಗಳು, ನೀರಾವರಿ ತಜ್ಞರು, ವಿಚಾರವಂತರು ಈ ಕಾರ್ಯಾಗಾರದಲ್ಲಿ ಭಾಗಿಯಾಗಲಿದ್ದಾರೆ. ಸಮಸ್ಯೆಗೆ ಪರಿಹಾರ ಕಂಡು ಹಿಡಿಯಬೇಕು ಎಂಬುದು ನಮ್ಮ ಪ್ರಯತ್ನವಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಸಮಿತಿಯ ಪದಾಧಿಕಾರಿಗಳಾದ ಕೆ.ವಿ.ಯಶೋಧಾ ರಾಜಣ್ಣ, ಎಸ್.ದ್ಯಾವೇಗೌಡ ಸಂಗಂ, ಧರ್ಮರಾಜ ಕಡಗ, ಜಗದೀಶ್ ರಾಮಘಟ್ಟ ಇದ್ದರು.