????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????? 
ಜಿಲ್ಲೆ

ಏಕತೆ ಮೂಡಿಸುವಲ್ಲಿ ಸ್ಕೌಟ್ಸ್, ಗೈಡ್ಸ್ ಸಹಕಾರಿ

ಹನೂರು: ವಿದ್ಯಾರ್ಥಿಗಳಲ್ಲಿ ಶಿಸ್ತನ್ನು ಮೂಡಿಸುವುದರ ಜತೆಗೆ ರಾಷ್ಟ್ರೀಯ ಏಕತೆಯನ್ನು ಮೂಡಿಸುವಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಹಕಾರಿಯಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಗುರುಲಿಂಗಯ್ಯ ಹೇಳಿದರು.

ಪಟ್ಟಣದ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ಬುಧವಾರ ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕದ ವತಿಯಿಂದ ತಾಲೂಕಿನ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಗಾಯನ ಸ್ಪರ್ಧೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಸ್ಕೌಟ್ಸ್ ಮತ್ತು ಗೈಡ್ಸ್ ಬಾಲಕ, ಬಾಲಕಿಯರಿಗಾಗಿ ಇರುವ ಸ್ವಯಂಪ್ರೇರಿತ ಹಾಗೂ ರಾಜಕೀಯೇತರ ಶೈಕ್ಷಣಿಕ ಆಂದೋಲನವಾಗಿದೆ. ಇದು ಜನಾಂಗ, ಜಾತಿ, ಹಾಗೂ ಧರ್ಮವನ್ನು ಲೆಕ್ಕಿಸದೆ ಎಲ್ಲರಿಗೂ ದೊರೆಯುವಂತಾಗಿದೆ. ಈ ಆಂದೋಲನದ ಉದ್ದೇಶ ಯುವಕರಲ್ಲಿ ದೈಹಿಕ, ಬೌದ್ಧಿಕ, ಸಾಮಾಜಿಕ, ಭಾವನಾತ್ಮಕ ಹಾಗೂ ಆಧ್ಯಾತಿಕತೆಯನ್ನು ವೃದ್ಧಿಸುತ್ತದೆ. ಅಲ್ಲದೆ ಸ್ಥಳೀಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಜವಾಬ್ದಾರಿಯುತ ನಾಗರಿಕನಾಗಿ ರೂಪಿಸುತ್ತದೆ. ಶಾಂತಿಗಾಗಿ ಕೈಗೊಳ್ಳುವ ಕಾರ್ಯ ವಿಧಾನವನ್ನು ತಿಳಿಸಿಕೊಡುತ್ತದೆ. ಜೀವನದಲ್ಲಿ ಶಿಸ್ತನ್ನು ಕಲ್ಪಿಸುತ್ತದೆ. ಸಾಮಾಜಿಕ ಪ್ರಗತಿಗೆ ಸೇವಾಭಾವನೆಯನ್ನು ಬೆಳೆಸುತ್ತದೆ. ಆದ್ದರಿಂದ ವಿದ್ಯಾರ್ಥಿ ದಿಸೆಯಲ್ಲೇ ಪಠ್ಯಪುಸ್ತಕ ಕಲಿಕೆಯ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಅದರಲ್ಲೂ ಸ್ಕೌಟ್ಸ್ ಮತ್ತು ಗೈಡ್ಸ್‌ನಲ್ಲಿ ಭಾಗವಹಿಸುವ ಮನೋಭಾವನೆ ಬೆಳೆಸಿಕೊಳ್ಳಬೇಕು. ಇದರಿಂದ ಜೀವನದಲ್ಲಿ ಉತ್ತಮ ಜೀವನವನ್ನು ರೂಪಿಸಿಕೊಳ್ಳಬಹುದು ಎಂದು ತಿಳಿಸಿದರು.

ಇದೇ ವೇಳೆ ಘಟಕದ ಜಿಲ್ಲಾ ಕಾರ್ಯದರ್ಶಿ ರಾಮಚಂದ್ರು ಮಾತನಾಡಿ, ಜಿಲ್ಲೆಯಲ್ಲಿ ಘಟಕವು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ವಿದ್ಯಾರ್ಥಿಗಳಿಗೆ ಅಗತ್ಯ ತರಬೇತಿ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ರಾಜ್ಯ ಮಟ್ಟದ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಆದ್ದರಿಂದ ತಮ್ಮೆಲ್ಲರ ಸಹಕಾರ ಅತ್ಯಗತ್ಯ ಎಂದರು. ವಿದ್ಯಾರ್ಥಿಗಳಿಂದ ಗೀತಗಾಯನ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ವಿಜೇತರಿಗೆ ಬಹುಮಾನ ವಿತರಿಸಲಾಯಿತು. ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಎಂ.ಮಹಾದೇವ, ಘಟಕದ ಜಿಲ್ಲಾ ಸಂಘಟನಾಕಾರ ಅಶೋಕ್‌ಕುಮಾರ್, ಸಂಘಟನಾ ಶಿಕ್ಷಕಿ ಅನ್ನಪೂರ್ಣ, ಶಿಕ್ಷಕರು ಇದ್ದರು.