ಹನೂರು: ಪ್ರತಿಯೊಬ್ಬರೂ ಸಾರ್ವಭೌಮತ್ವವನ್ನು ಎತ್ತಿ ಹಿಡಿಯುವ ಮೂಲಕ ದೇಶದ ಏಕತೆಗೆ ಶ್ರಮಿಸಬೇಕು, ಇದರಿಂದ ಸದೃಢ ರಾಷ್ಟ್ರ ನಿರ್ಮಿಸಲು ಸಾಧ್ಯ ಎಂದು ತಹಸೀಲ್ದಾರ್ ವೈ.ಕೆ.ಗುರುಪ್ರಸಾದ್ ತಿಳಿಸಿದರು.
ಪಟ್ಟಣದ ಲೋಕೋಪಯೋಗಿ ಇಲಾಖೆಯ ಅತಿಥಿ ಗೃಹದ ಸಭಾಂಗಣದಲ್ಲಿ ಮಂಗಳವಾರ ಕಂದಾಯ ಇಲಾಖೆ ವತಿಯಿಂದ ಆಯೋಜಿಸಿದ್ದ ಸಂವಿಧಾನ ದಿನ ಆಚರಣೆಯಲ್ಲಿ ಪ್ರಸ್ತಾವನೆಯ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದರು.
ಸಂವಿಧಾನದ ಕರಡು ಸಮಿತಿ ಅಧ್ಯಕ್ಷರಾಗಿದ್ದ ಡಾ.ಬಿ.ಆರ್. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದ ಪ್ರಸ್ತಾವನೆಯು 1949ರಲ್ಲಿ ಅಂಗೀಕಾರವಾಯಿತು. ಹಾಗಾಗಿ ಈ ದಿವಸವನ್ನು ಸಂವಿಧಾನ ದಿನ ಎಂದು ಆಚರಿಸಲಾಗುತ್ತಿದೆ. ಸಂವಿಧಾನವು ದೇಶದ ಏಕತೆಯ ಪ್ರತೀಕವಾಗಿದ್ದು, ಸ್ವಾತಂತ್ರೃ, ಸಮಾನತೆ ಹಾಗೂ ಭಾತೃತ್ವವನ್ನು ವೃದ್ಧಿಸುತ್ತದೆ. ಈ ಮೂಲಕ ದೇಶದ ನಾವೆಲ್ಲರೂ ಒಂದೇ ಎಂಬ ಭಾವನೆ ಮೂಡಿಸುತ್ತಿದೆ. ಶಾಸಕಾಂಗ, ಕಾರ್ಯಾಂಗ ಹಾಗೂ ನ್ಯಾಯಾಂಗದ ಮೂಲಕ ಸುಭದ್ರ ಆಡಳಿತವನ್ನು ನೀಡುತ್ತಿದೆ. ಆದ್ದರಿಂದ ಪ್ರತಿಯೊಬ್ಬರೂ ಸಂವಿಧಾನದ ಅಡಿಯಲ್ಲೇ ಕಾರ್ಯನಿರ್ವಹಿಸಬೇಕಿದೆ. ಹಾಗಾಗಿ ಪ್ರತಿಯೊಬ್ಬರೂ ಸಂವಿಧಾನದ ಪೀಠಿಕೆಯನ್ನು ಓದುವುದರ ಮೂಲಕ ಅದರ ಆಶಯಗಳನ್ನು ಈಡೇರಿಸಬೇಕು, ದೇಶದ ಉನ್ನತಿಗೆ ಶ್ರಮಿಸಬೇಕು ಎಂದು ತಿಳಿಸಿದರು.
ಇದೇ ವೇಳೆ ಡಾ.ಬಿ.ಆರ್ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.
ತಾಲೂಕು ಉಸ್ತುವಾರಿ ಕಾರ್ಯದರ್ಶಿ ಆರ್.ವೀಣಾ, ಗ್ರಾಮ ಆಡಳಿತ ಅಧಿಕಾರಿಗಳಾದ ಶೇಷಣ್ಣ, ಕಾವ್ಯಾ, ಕಂದಾಯ ಇಲಾಖೆಯ ನೌಕರರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಇದ್ದರು.