ಚಿತ್ರದುರ್ಗ: ಕಲ್ಲಿನಕೋಟೆ ಸೇರಿ ಜಿಲ್ಲೆಯ ಎಲ್ಲ ಐತಿಹಾಸಿಕ ಸ್ಥಳಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಸಾರ್ವಜನಿಕರು ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಆರ್.ಜೆ.ದಿವ್ಯಾಪ್ರಭು ಸಲಹೆ ನೀಡಿದರು.
ಕೋಟೆ ಆವರಣದಲ್ಲಿ ಜಿಲ್ಲಾಡಳಿತ, ಜಿಪಂ, ಪ್ರವಾಸೋದ್ಯಮ ಇಲಾಖೆಯಿಂದ ಬುಧವಾರ ಹಮ್ಮಿಕೊಂಡಿದ್ದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕೋಟೆನಾಡಿನ ಪ್ರಸಿದ್ಧ ಪ್ರವಾಸಿ ತಾಣಗಳನ್ನು ಕಣ್ತುಂಬಿಕೊಳ್ಳಲು ದೇಶ-ವಿದೇಶಗಳಿಂದ ಪ್ರವಾಸಿಗರು ಆಗಮಿಸುತ್ತಾರೆ. ಆದ್ದರಿಂದ ಅಗತ್ಯ ಮೂಲಸೌಕರ್ಯ ಕಲ್ಪಿಸಬೇಕಿದೆ. ಆ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯುತ್ತಿದ್ದು, ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ ಎಂದರು.
ಜಿಲ್ಲೆಯ ಹೆಮ್ಮೆಯನ್ನು ಪ್ರತಿಬಿಂಬಿಸುವ ಪುರಾತನ ಸ್ಮಾರಕಗಳು, ಪ್ರಾಚೀನ ತಾಣಗಳು ಹಾಗೂ ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸದಾ ಸ್ವಚ್ಛವಾಗಿ ಇಟ್ಟುಕೊಳ್ಳುವುದರ ಜತೆಗೆ ಪ್ಲಾಸ್ಟಿಕ್ ಮುಕ್ತವಾಗಿಸಬೇಕು. ನಾಡಿನ ಕಲೆ, ಸಂಸ್ಕೃತಿ ಜತೆಗೆ ರಾಜ್ಯದ ಪ್ರಸಿದ್ಧ ಸ್ಥಳಗಳ ಕುರಿತು ತಿಳಿವಳಿಕೆ ಹೊಂದಿರಬೇಕು. ಪರಿಸರಕ್ಕೆ ಹಾನಿ ಉಂಟು ಮಾಡುವ ವಸ್ತುಗಳನ್ನು ನಿಗದಿತ ಸ್ಥಳದಲ್ಲಿಯೇ ಹಾಕಬೇಕು. ಇದಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ಈ ಬಾರಿ ಪ್ರವಾಸೋದ್ಯಮ ಮತ್ತು ಹಸಿರು ಹೂಡಿಕೆ ಎಂಬ ಧ್ಯೇಯವಾಕ್ಯದೊಂದಿಗೆ ದಿನಾಚರಣೆ ಆಚರಿಸುತ್ತಿದ್ದೇವೆ. ಶಾಲಾ-ಮಕ್ಕಳ, ಆರ್ಕಿಟೆಕ್ಟ್, ವೈದ್ಯಕೀಯ, ಇಂಜಿನಿಯರಿಂಗ್, ಇಕೋ, ರಿಲಿಜಿಯಸ್ ಹೀಗೆ ವಿವಿಧ ರೀತಿಯ ಪ್ರವಾಸೋದ್ಯಮ ಕಾಣಬಹುದಾಗಿದೆ. ಟೂರಿಸಂ ಮನೋರಂಜನೆ ಜತೆಗೆ ಶಿಕ್ಷಣವನ್ನು ನೀಡಲಿದೆ ಎಂದರು.
ಡಿಎಚ್‌ಒ ಡಾ.ಆರ್.ರಂಗನಾಥ್ ಮಾತನಾಡಿ, ಪರಿಸರಕ್ಕೆ ಹಸಿರು ಬಹಳ ಮುಖ್ಯ. ಹೀಗಾಗಿ ಉತ್ತಮ ವಾತಾವರಣ ನಿರ್ಮಾಣಕ್ಕೆ ಹಸಿರು ಬೆಳೆಸಿ, ಉಸಿರು ಉಳಿಸುವ ಕಾರ್ಯಕ್ಕೆ ಎಲ್ಲರೂ ಸಹಕರಿಸಬೇಕು. ಸ್ವಚ್ಛತೆ ಎಲ್ಲಿರುತ್ತದೋ ಅಲ್ಲಿ ಆರೋಗ್ಯ ಸದೃಢವಾಗಿರುತ್ತದೆ. ಆದ್ದರಿಂದ ಎಲ್ಲರೂ ಸ್ವಯಂ ಪ್ರೇರಿತರಾಗಿ ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಬೇಕು ಎಂದು ಸಲಹೆ ನೀಡಿದರು.
ದಿನಾಚರಣೆ ಅಂಗವಾಗಿ ವೀರವನಿತೆ ಒನಕೆ ಓಬವ್ವ ವೃತ್ತದಿಂದ ಕೋಟೆ ಮುಂಭಾಗದವರೆಗೂ ನಡೆದ ಪ್ರವಾಸಿ ನಡಿಗೆಯಲ್ಲಿ ನೂರಾರು ಮಂದಿ ಪಾಲ್ಗೊಂಡಿದ್ದರು. ನಂತರ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರಬಂಧ, ರಸಪ್ರಶ್ನೆ, ಕಾಲೇಜು ವಿದ್ಯಾರ್ಥಿಗಳಿಗಾಗಿ ಚರ್ಚಾ ಸ್ಪರ್ಧೆ ಮತ್ತು ಚಿತ್ರಕಲಾ ಶಿಬಿರ ನಡೆಯಿತು.
ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಜಿತೇಂದ್ರನಾಥ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ, ಗೃಹರಕ್ಷಕ ದಳದ ಜಿಲ್ಲಾ ಕಮಾಂಡೆಟ್ ಸಿ.ಕೆ.ಸಂಧ್ಯಾ, ಭಾರತೀಯ ಪುರಾತತ್ವ ಇಲಾಖೆಯ ರಾಣಿ, ಶಿಕ್ಷಕಿ ಮಾಲತಿ ಇತರರಿದ್ದರು.