ಪಾಂಡವಪುರ ತಾಲೂಕು ಕಚೇರಿಗೆ ಸಿಪಿಐ(ಎಂ) ಕಾರ್ಯಕರ್ತರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಟಿ.ಎಲ್.ಕೃಷ್ಣೇಗೌಡ, ಸುರೇಂದ್ರ, ಶಿವಮ್ಮ, ಜಯಲಕ್ಷ್ಮೀ ಇದ್ದರು.  
ಜಿಲ್ಲೆ

ಐದು ಹಕ್ಕೊತ್ತಾಯಗಳನ್ನು ಈಡೇರಿಸಿ

ಪಾಂಡವಪುರ: ಕೇಂದ್ರ ಸರ್ಕಾರದ ಜನ ಹಾಗೂ ಪ್ರಜಾಪ್ರಭುತ್ವ ವಿರೋಧಿ ನಿಲುವು ಖಂಡಿಸಿ ಮತ್ತು ರಾಜ್ಯದ ಜನತೆಯ ಐದು ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಿಪಿಐ(ಎಂ) ಕಾರ್ಯಕರ್ತರು ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಗುರುವಾರ ಪ್ರತಿಭಟನೆ ನಡೆಸಿದರು.

ಪಟ್ಟಣದ ಐದು ದೀಪ ವೃತ್ತದಲ್ಲಿ ಜಮಾವಣೆಗೊಂಡ ಪ್ರತಿಭಟನಾಕಾರರು, ಕೇಂದ್ರ ಸರ್ಕಾರದ ವಿರುದ್ಧ ಘೊಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರದ ನವ ಉದಾರೀಕರಣ ನೀತಿಯ ಪರಿಣಾಮ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ಈ ಕೂಡಲೇ ನಿಯಂತ್ರಣಕ್ಕೆ ಕ್ರಮ ವಹಿಸಬೇಕು. ಕಾಳ ಸಂತೆಕೋರರನ್ನು ನಿಗ್ರಹಿಸಲು ಕಠಿಣ ಕ್ರಮವಹಿಸಬೇಕು. ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆಯನ್ನು ಕಡಿತಗೊಳಿಸಬೇಕು. ಹಣದುಬ್ಬರಕ್ಕೆ ಕಡಿವಾಣ ಹಾಕುವುದರ ಜತೆಗೆ ಆಹಾರ ಧಾನ್ಯಗಳ ಮೇಲಿನ ಜಿಎಸ್‌ಟಿ ಅನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.

ಖಾಲಿ ಇರುವ ಎಲ್ಲ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು. ಗುತ್ತಿಗೆ ಪದ್ಧತಿ ಹಾಗೂ ಗೌರವಧನದ ಚಾಕರಿಗಳನ್ನು ರದ್ದುಪಡಿಸಬೇಕು. ಸಾರ್ವಜನಿಕ ರಂಗದಲ್ಲಿ ಬಂಡವಾಳವನ್ನು ಹೆಚ್ಚಿಸಿ ಉದ್ಯೋಗ ಸೃಷ್ಟಿಗೆ ಅಗತ್ಯ ಕ್ರಮವಹಿಸಬೇಕು. ಉದ್ಯೋಗಖಾತ್ರಿ ಯೋಜನೆಯನ್ನು 200 ದಿನಗಳಿಗೆ ಮತ್ತು ನಗರ ಹಾಗೂ ಪಟ್ಟಣ ಪ್ರದೇಶಗಳಿಗೂ ವಿಸ್ತರಿಸಬೇಕು ಸೇರಿದಂತೆ ಎಂಬಿತ್ಯಾದಿ ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿ ಶಿರಸ್ತೇದಾರ್ ಮೋಹನ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಟಿ.ಎಲ್.ಕೃಷ್ಣೇಗೌಡ, ಸುರೇಂದ್ರ, ಶಿವಮ್ಮ, ಮಂಜುಳಾ, ಜಯಲಕ್ಷ್ಮೀ ಇತರರು ಇದ್ದರು.