ಜಿಲ್ಲೆ

ಐವರು ಆರೋಪಿಗಳ ಸೆರೆ, ನಾಳೆ ಬಂದ್‌ಗೆ ಕರೆ ; ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಎಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್

ತುಮಕೂರು: ಬಜರಂಗದಳ ಕಾರ್ಯಕರ್ತರ ಮೇಲಿನ ಹಲ್ಲೆ ಘಟನೆ ಬಳಿಕ ನಗರದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದ್ದು, ಘಟನೆ ಸಂಬಂಧ ವಿಶ್ವ ಹಿಂದು ಪರಿಷತ್ ಹಾಗೂ ಬಜರಂಗದಳ ಶುಕ್ರವಾರ ನಗರ ಬಂದ್‌ಗೆ ಕರೆ ನೀಡಿವೆ.

ನಗರದ ಗುಬ್ಬಿ ಗೇಟ್‌ನಲ್ಲಿ ಮಂಗಳವಾರ ಸಂಜೆ ಬಜರಂಗದಳದ ಜಿಲ್ಲಾ ಸಂಚಾಲಕ ಮಂಜುಭಾರ್ಗವ್ ಹಾಗೂ ಕಾರ್ಯಕರ್ತ ಕಿರಣ್ ಮೇಲೆ ಅನ್ಯಕೋಮಿನ ಯುವಕರು ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ.

ಹಲ್ಲೆ ಪ್ರಕರಣ ಹಿನ್ನೆಲೆಯಲ್ಲಿ ಮಂಗಳವಾರ ರಾತ್ರಿಯೇ ಜಿಲ್ಲಾಸ್ಪತ್ರೆ ಮುಂದೆ ಜಮಾಯಿಸಿದ ನೂರಾರು ಯುವಕರು, ಹಲ್ಲೆಕೋರರನ್ನು ತಕ್ಷಣವೇ ಬಂಧಿಸುವಂತೆ ಒತ್ತಾಯಿಸಿದರು. ಪರಿಸ್ಥಿತಿ ಕೈಮೀರುವ ಸಾಧ್ಯತೆ ಹಿನ್ನೆಲೆಯಲ್ಲಿ ನಗರದೆಲ್ಲೆಡೆ ಪೊಲೀಸ್ ಬಂದೋಬಸ್ತ್ ಮಾಡಲಾಯಿತು.

ಹಲ್ಲೆ ಸುದ್ದಿ ಕಾಡ್ಗಿಚ್ಚಿನಂತೆ ಹರಡುತ್ತಿದ್ದಂತೆ ಮುಂಜಾಗ್ರತಾ ಕ್ರಮವಾಗಿ ಕೇಂದ್ರ ವಲಯ ಐಜಿಪಿ ಚಂದ್ರಶೇಖರ್ ನಗರಕ್ಕೆ ದೌಡಾಯಿಸಿದರು. ಬುಧವಾರ ಇಡೀ ದಿನ ನಗರದಲ್ಲೇ ಮೊಕ್ಕಾಂ ಹೂಡಿದ್ದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪೂರವಾಡ್ ಇದ್ದರು.

500ಕ್ಕೂ ಹೆಚ್ಚು ಪೊಲೀಸರ ನಿಯೋಜನೆ: ನಗರದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ, ಅಹಿತಕರ ಘಟನೆ ನಡೆಯದಂತೆ ತಡೆಯಲು ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರಿಂದ ಬಂದೋಬಸ್ತ್ ಏರ್ಪಡಿಸಲಾಗಿದೆ. ಮೂವರು ಡಿವೈಎಸ್ಪಿ ನೇತೃತ್ವದಲ್ಲಿ 500ಕ್ಕೂ ಹೆಚ್ಚು ಪೊಲೀಸರು ಭದ್ರತಾ ಕಾರ್ಯಕ್ಕೆ ನಿಯೋಜನೆಗೊಂಡಿದ್ದಾರೆ.

ಬಂದ್‌ಗೆ ನಿರ್ಣಯ: ಆರ್‌ಎಸ್‌ಎಸ್ ಸಾಧನಾ ಕಚೇರಿಯಲ್ಲಿ ಬುಧವಾರ ಮಧ್ಯಾಹ್ನ ಆರ್‌ಎಸ್‌ಎಸ್, ವಿಎಚ್‌ಪಿ, ಬಿಜೆಪಿ, ಬಜರಂಗದಳ ಮುಖಂಡರು ಸಭೆ ಸೇರಿ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿದರು. ಅಲ್ಲದೆ, ಶುಕ್ರವಾರ ನಗರ ಬಂದ್‌ಗೆ ಕರೆ ನೀಡಲು ನಿರ್ಧರಿಸಿದರು. ಶಾಸಕ ಜಿ.ಬಿ.ಜ್ಯೋತಿಗಣೇಶ್, ಮೇಯರ್ ಬಿ.ಜಿ.ಕೃಷ್ಣಪ್ಪ ಮತ್ತಿತರರು ಇದ್ದರು.

ಸೊಗಡು ಶಿವಣ್ಣ ಭೇಟಿ: ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಂಜುಭಾರ್ಗವ, ಕಿರಣ್ ಅವರನ್ನು ಮಾಜಿ ಸಚಿವ ಸೊಗಡು ಶಿವಣ್ಣ ಭೇಟಿಯಾಗಿ ಧೈರ್ಯ ತುಂಬಿದರು. ಅನ್ಯ ಧರ್ಮ ಗುರುಗಳ ಬಗ್ಗೆ ಅವಹೇಳನಕಾರಿಯಾಗಿ ಬರೆದಿರುವ ಹಿನ್ನೆಲೆಯಲ್ಲಿ ಬಂಧನಕ್ಕೊಳಗಾಗಿರುವ ಸಹಾಯಕ ಪ್ರಾಧ್ಯಾಪಕ ಬಿ.ಆರ್.ರಾಮಚಂದ್ರಯ್ಯ ಅವರನ್ನು ಕಾರಾಗೃಹದಲ್ಲಿ ಭೇಟಿ ಆದರು.

ಐವರ ಸೆರೆ:  ಗುಬ್ಬಿ ಗೇಟ್ ಬಳಿ ಬಜರಂಗದಳ ಕಾರ್ಯಕರ್ತರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಠಾಣೆ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಪ್ರಕರಣ ತನಿಖಾ ಹಂತದಲ್ಲಿರುವುದರಿಂದ ಐವರು ಆರೋಪಿಗಳ ಹೆಸರನ್ನು ಪೊಲೀಸರು ಬಹಿರಂಗಪಡಿಸಿಲ್ಲ. ದುಷ್ಕರ್ಮಿಗಳ ಪತ್ತೆಗೆ 2 ತಂಡಗಳನ್ನು ರಚಿಸಿದ್ದು ಇನ್ನುಳಿದ ಆರೋಪಿಗಳ ಶೀಘ್ರ ಬಂಧನಕ್ಕೆ ಕ್ರಮಕೈಗೊಳ್ಳಲಾಗಿದೆ.