ಜಿಲ್ಲೆ

ಒಳ ಮೀಸಲಾತಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ

ಹಾಸನ: ಸುಪ್ರೀಂಕೋರ್ಟ್ ಆದೇಶದನ್ವಯ ರಾಜ್ಯ ಸರ್ಕಾರ ವಿಳಂಬ ಧೋರಣೆ ಮಾಡದೆ ಪರಿಶಿಷ್ಟ ಜಾತಿ, ಪಂಗಡಗಳ ಒಳ ಮೀಸಲಾತಿ ಆದೇಶವನ್ನು ಶೀಘ್ರ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಡಿಸಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.
ಈ ವೇಳೆ ಮಾತನಾಡಿದ ದಂಸದ ಹಿರಿಯ ಮುಖಂ ಎಚ್.ಕೆ.ಸಂದೇಶ್, ಪರಿಶಿಷ್ಟರ ಮೀಸಲಾತಿ ಅನೇಕ ಒಳ ಜಾತಿಗಳಿಗೆ ಸಮನಾಗಿ ಹಂಚಿಕೆ ಯಾಗಿಲ್ಲ ಎಂಬ ಆತಂಕ ಹಾಗೂ ಅಸಹನೆಯಿಂದ ಕಳೆದ ಮೂರು ದಶಕಗಳಿಂದ ನಿರಂತರ ಹೋರಾಟ ನಡೆಯುತ್ತಿವೆ. ಹೋರಾಟದಲ್ಲಿ ಅನೇಕರು ಜೀವ, ಜೀವನ ಹಾಗೂ ಬದುಕನ್ನೇ ಕಳೆದು ಕೊಂಡಿದ್ದಾರೆ. ಇದೀಗ ಸುಪ್ರೀಂ ಕೋರ್ಟ್ ಒಳ ಮೀಸಲಾತಿ ನೀಡಲು ಗ್ರೀನ್ ಸಿಗ್ನಲ್ ನೀಡಿ ರಾಜ್ಯ ಸರ್ಕಾರಕ್ಕೆ ಸಂವಿಧಾನದತ್ತ ಅಧಿಕಾರ ನೀಡಿದೆ ಎಂದರು.
ಸುಪ್ರೀ ಕೋರ್ಟ್ ತೀರ್ಪು ನೀಡಿ 40 ದಿನ ಕಳೆದಿದ್ದರೂ, ಇನ್ನೂ ತೀರ್ಪು ಜಾರಿಗೆ ಬಂದಿಲ್ಲ. ಸರ್ಕಾರ ಈ ಬಗ್ಗೆ ಇನ್ನೂ ದೃಢ ನಿಲುವು ತಳೆದಿಲ್ಲ. ಈ ನಿಟ್ಟಿನಲ್ಲಿ ಕೂಡಲೇ ಕಾರ್ಯಪ್ರವೃತ್ತರಾಗಬೇಕು ಎಂದು ಸರ್ಕಾರದ ಮೇಲೆ ಒತ್ತಡ ಹೇರಲು, ಪರಿಶಿಷ್ಟರ ಮೀಸಲಾತಿ ವರ್ಗೀಕರಣಕ್ಕೆ ಒತ್ತಾಯಿಸಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಿಂದ ಮುಖ್ಯಮಂತ್ರಿ ಅವರ ನಿವಾಸಕ್ಕೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ಮನವಿ ಸಲ್ಲಿಸಲಾಗುತ್ತಿದೆ.ಕೂಡಲೇ ಮುಖ್ಯಮಂತ್ರಿಗಳು ಸಚಿವ ಸಂಪುಟದ ಸಭೆ ನಡೆಸಿ ನಿವೃತ್ತ ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿಯಂತೆ ಪರಿಶಿಷ್ಟರ ಮೀಸಲಾತಿ ವರ್ಗೀಕರಣ ಜಾರಿ ಮಾಡಬೇಕು ಎಂದು ಮನವಿ ಮಾಡಿದರು.
ಸುಪ್ರೀಂಕೋರ್ಟ್‌ನ 7 ನ್ಯಾಯಾಧೀಶರ ತೀರ್ಪಿನಂತೆ ಪರಿಶಿಷ್ಟರ ಒಳಮೀಸಲಾತಿ ಅನುಷ್ಠಾನ ಮಾಡಬೇಕು. 2023-24 ಮತ್ತು 2024-25 ನೇ ಸಾಲಿನಲ್ಲಿ 25,391 ಕೋಟಿ ಪರಿಶಿಷ್ಟ ಜಾತಿ, ವರ್ಗದ ಎಸ್‌ಸಿಎಸ್‌ಪಿ, ಟಿಎಸ್‌ಪಿ ಅಭಿವೃದ್ಧಿ ಹಣವನ್ನು ಸಾಮಾನ್ಯ ಯೋಜನೆಗೆ ಬಳಸಲಾಗಿದೆ. ರಾಜ್ಯ ಸರ್ಕಾರ ಈ ಹಣವನ್ನು ಸಮಾಜದ ಅಭಿವೃದ್ಧಿಗೆ ವಾಪಸ್ಸು ನೀಡಲು ವಿನಂತಿಸಿದರು.
ಪರಿಶಿಷ್ಟ ಜಾತಿ, ವರ್ಗದ ವಿದ್ಯಾರ್ಥಿ ವೇತನವನ್ನು ಸಕಾಲಕ್ಕೆ ನೀಡುತ್ತಿಲ್ಲ. ಹಾಗೂ ಮೆರಿಟ್ ವಿದ್ಯಾರ್ಥಿ ವೇತನ ಮತ್ತು ವಿದೇಶ ವ್ಯಾಸಂಗದ ಪ್ರಬುದ್ಧ ಯೋಜನೆ ರದ್ದಾಗಿರುವ ದಟ್ಟ ವದಂತಿ ಹಬ್ಬಿದ್ದು, ಅದನ್ನು ಪುನಾರಂಭಿಸಲಿ ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ದಸಂಸ ಮೈಸೂರು ವಲಯದ ಪ್ರಧಾನ ಕಾರ್ಯದರ್ಶಿ ಟಿ.ಕುಮಾರಸ್ವಾಮಿ, ಹಿರಿಯ ಮುಖಂಡ ಕೃಷ್ಣದಾಸ್, ಜಿಲ್ಲಾ ಗೌರವಾಧ್ಯಕ್ಷ ಸಿ.ಆರ್. ಧರ್ಮಯ್ಯ, ಜಿಲ್ಲಾ ಕಾರ್ಯದರ್ಶಿ ಎನ್.ಆರ್. ಧರ್ಮ, ಶಿವಕುಮಾರ್, ಉಮೇಶ್, ತೇಜೂರು ಮಂಜು, ಕೇಶವಮೂರ್ತಿ, ಹರೀಶ್, ರಾಜೇಶ್ ಇತರರು ಉಪಸ್ಥಿತರಿದ್ದರು.