ಹಾಸನ: ಕಳೆದ 30 ವರ್ಷಗಳ ಬೇಡಿಕೆ ಆಗಿರುವ ಒಳ ಮೀಸಲಾತಿ ಜಾರಿಗೊಳಿಸಲು ಆಗ್ರಹಿಸಿ ಅ.16ರ ಬುಧವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ಹಮ್ಮಿಕೊಂಡಿರುವುದಾಗಿ ಕರ್ನಾಟಕ ಮಾದಿಗ ದಂಡೋರ ಸಮಿತಿಯ ಎಚ್.ಪಿ. ಶಂಕರ್ ರಾಜು ತಿಳಿಸಿದರು.
ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಅದೇ ರೀತಿ ಹಾಸನ ಜಿಲ್ಲಾಧಿಕಾರಿ ಕಚೇರಿ ಮುಂದೆಯೂ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ.30 ವರ್ಷಗಳಿಂದ ನಮ್ಮ ಬೇಡಿಕೆಯಾದ ಪರಿಶಿಷ್ಟ ಜಾತಿಯ ಒಳ ಮೀಸಲಾತಿಗಾಗಿ ಇಡೀ ರಾಜ್ಯದಲ್ಲಿ ಹಲವಾರು ಹೋರಾಟ ಮತ್ತು ಪ್ರಾಣತ್ಯಾಗ ನಡೆದಿವೆ. ನಮ್ಮನ್ನಾಳುವ ಸರ್ಕಾರ ಇದುವರೆಗೂ ಒಳ ಮೀಸಲಾತಿ ಜಾರಿಗೊಳಿಸದೇ ಇರುವುದರಿಂದ ನಮ್ಮ ಸಂಘಟನೆ ವತಿಯಿಂದ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದೆವು. ಇದರ ಪರಿಣಾಮ ಕಳೆದ ಆ.1 ರಂದು ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ ಎಂದ ಬುಧವಾರ ಸುದ್ದಿಗೋಷ್ಟಿಯಲ್ಲಿ ಹೇಳಿದರು.
ಆಯಾಯ ರಾಜ್ಯಗಳು ಜನಸಂಖ್ಯೆಗೆ ಅನುಗುಣವಾಗಿ ಒಳ ಮೀಸಲಾತಿ ಜಾರಿಗೊಳಿಸಲು ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದೆ. ಆದರೆ ನಮ್ಮ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್ ಆದೇಶವನ್ನು ಯಥಾವತ್ತಾಗಿ ಜಾರಿಗೊಳಿಸದೆ ವಿಳಂಬ ನೀತಿ ಅನುಸರಿಸುತ್ತಾ ಕಾಲ ತಳ್ಳುತ್ತಿದೆ ಎಂದು ದೂರಿದರು.
ಸರ್ಕಾರದ ಮೇಲೆ ಒತ್ತಡ ಹೇರುವ ಉದ್ದೇಶದಿಂದ ಹಾಸನ ಜಿಲ್ಲಾ ಮಾದಿಗ ಸಂಘಟನೆಗಳ ವತಿಯಿಂದ ಅ.16 ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಹಾಸನ ಜಿಲ್ಲೆಯ ಸಮಸ್ತ ಮಾದಿಗ ಸಮಾಜದ ಬಂಧುಗಳು ಪ್ರತಿಭಟನೆಯಲ್ಲಿ ಭಾಗವಿಹಿಸಿ ಯಶಸ್ವಿಗೊಳಿಸಬೇಕಾಗಿ ಮನವಿ ಮಾಡಿದರು.
ಕೂಡಲೇ ಒಳ ಮೀಸಲಾತಿ ಜಾರಿಗೊಳಿಸಿ ಎಂದು ಜಿಲ್ಲಾಧಿಕಾರಿ ಅವರ ಮೂಲಕ ಸರ್ಕಾರಕ್ಕೆ ಒತ್ತಾಯ ಮಾಡುತ್ತೇವೆ. ಮಾದಿಗ ಸಮಾಜದ ಸರ್ಕಾರಿ ನೌಕರರು, ವಿದ್ಯಾರ್ಥಿಗಳು ಮತ್ತು ದಲಿತ ಸಂಘರ್ಷ ಸಮಿತಿಯ ಎಲ್ಲಾ ಪದಾಧಿಕಾರಿಗಳು ಭಾಗವಹಿಸಬೇಕಾಗಿ ಕೋರಲಾಗಿದೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಮಾದಿಗ ದಂಡೋರ ಜಿಲ್ಲಾಧ್ಯಕ್ಷ ವೆಂಕಟೇಶ್, ಕಾರ್ಯದರ್ಶಿ ಸುರೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆಲೂರು ವೆಂಕಟಯ್ಯ, ಲೋಕೇಶ್ ಇತರರಿದ್ದರು.