ಚಿತ್ರದುರ್ಗ: ಮೂರು ದಶಕದ ಹೋರಾಟದ ಫಲ, ಸುಪ್ರೀಂ ಕೋರ್ಟ್ ತೀರ್ಪು ಬಳಿಕ ದೇಶದ ವಿವಿಧ ರಾಜ್ಯಗಳಲ್ಲಿ ಒಳಮೀಸಲಾತಿ ಜಾರಿಗೆ ಅಲ್ಲಿನ ಸರ್ಕಾರಗಳು ಕ್ರಮ ಕೈಗೊಂಡಿರುವುದು ಸಂತಸದ ವಿಷಯ ಎಂದು ಮಾಜಿ ಸಚಿವ ಎಚ್. ಆಂಜನೇಯ ತಿಳಿಸಿದ್ದಾರೆ.
ಏ. 14ರ ಅಂಬೇಡ್ಕರ್ ಜಯಂತಿಯಂದು ತೆಲಂಗಾಣದಲ್ಲಿ ಒಳಮೀಸಲಾತಿ ಅನುಷ್ಠಾನಗೊಳಿಸಲಾಗಿದೆ. ಅದೇ ರೀತಿ ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ನಿಖರ ದತ್ತಾಂಶ ಸಂಗ್ರಹಕ್ಕಾಗಿ ಸರ್ವೇ ಮೂಲಕ ಅವರವರ ಜನಸಂಖ್ಯೆಗೆ ಅನುಗುಣವಾಗಿ ಮೀಸಲು ಸೌಲಭ್ಯ ಹಂಚಿಕೆ ಮಾಡಲು ದಿಟ್ಟ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದ್ದು, ಜೂನ್ ತಿಂಗಳಾಂತ್ಯದ ಒಳಗೆ ಒಳಮೀಸಲಾತಿ ಅನುಷ್ಠಾನಗೊಳ್ಳುವ ವಿಶ್ವಾಸವಿದೆ ಎಂದು ಬುಧವಾರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಒಳಮೀಸಲಾತಿ ಜಾರಿ ವಿಷಯದಲ್ಲಿ ದಿಟ್ಟ ಕ್ರಮವಹಿಸಿದ ತೆಲಂಗಾಣ ಸಿಎಂ ರೇವಂತ್ ರೆಡ್ಡಿ, ಸಿದ್ದರಾಮಯ್ಯ ಅವರನ್ನು ಅಭಿನಂದಿಸಲು ಮಾದಿಗ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿರುವ ರಾಯಚೂರಿನಲ್ಲಿ ಬೃಹತ್ ಕಾರ್ಯಕ್ರಮ ಆಯೋಜಿಸಲಾಗುವುದು. ಈ ಮೂಲಕ ನೊಂದ, ಸೌಲಭ್ಯ ವಂಚಿತ, ಅಸ್ಪಶ್ಯ ಸಮಾಜಕ್ಕೆ ಸಾಮಾಜಿಕ ನ್ಯಾಯ ಕಲ್ಪಿಸಲು ಬದ್ಧರಾಗಿರುವ ಇಬ್ಬರನ್ನು ಇದೇ ವೇಳೆ ಗೌರವಿಸಲಾಗುವುದು ಎಂದು ತಿಳಿಸಿದ್ದಾರೆ.
ಲಕ್ಷಾಂತರ ಸಂಖ್ಯೆಯಲ್ಲಿ ಮಾದಿಗ ಸಮುದಾಯ ಒಂದೆಡೆ ಸೇರಿ ಸಂಭ್ರಮಿಸುವ ಕಾಲ ಸಮೀಪಿಸುತ್ತಿದೆ. ಮುಖ್ಯವಾಗಿ ಒಗ್ಗಟ್ಟು ಪ್ರದರ್ಶನದ ಮೂಲಕ ಭವಿಷ್ಯದಲ್ಲಿ ಇನ್ನಷ್ಟು ನ್ಯಾಯಯುತ ಹಕ್ಕುಗಳನ್ನು ಪಡೆಯಲು ಮುಂದಾಗಬೇಕಾಗಿದೆ ಎಂದು ಮನವಿ ಮಾಡಿದ್ದಾರೆ.
ಆಂಧ್ರಪ್ರದೇಶದಲ್ಲಿ ಮೊದಲ ಬಾರಿಗೆ ಮಂದಕೃಷ್ಣ ಮಾದಿಗ ಅವರ ನೇತೃತ್ವದಲ್ಲಿ ಆರಂಭಗೊಂಡ ಒಳಮೀಸಲಾತಿ ಹೋರಾಟ ದೇಶದ ವಿವಿಧ ರಾಜ್ಯಗಳಲ್ಲಿ ಕಿಚ್ಚನ್ನು ಹಚ್ಚಿದ್ದು, ಕರ್ನಾಟಕದಲ್ಲಿ ಬಹಳಷ್ಟು ನಾಯಕರು, ಹೋರಾಟಗಾರರು ಚಳವಳಿಯನ್ನು ಮುನ್ನ್ನಡೆಸಿದ್ದಾರೆ. ಅಲ್ಲದೆ, ರಾಜಕಾರಣಿಗಳು ಧ್ವನಿ ಎತ್ತಿದ್ದಾರೆ. ಎಲ್ಲರ ಹೋರಾಟದ ಫಲವಾಗಿ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿತು ಎಂದು ತಿಳಿಸಿದ್ದಾರೆ.