ಹಾಸನ : ಕುಲದೀಪ್‌ಸಿಂಗ್ ಆಯೋಗ ಕ್ಷೇತ್ರ ಪುನರ್ ವಿಂಗಡಣೆ ಸಂದರ್ಭದಲ್ಲಿ ಕಟ್ಟಾಯ ಹೋಬಳಿಯನ್ನು ಸಕಲೇಶಪುರ ವಿಧಾನಸಭಾ ಕ್ಷೇತ್ರಕ್ಕೆ ಭೌಗೋಳಿಕ ಮತ್ತು ಜನಸಂಖ್ಯೆ ಆಧಾರದ ಮೇಲೆ ಸೇರಿಸಿದೆ. ಆದರೆ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ವಿನಾಕಾರಣ ಆರೋಪ ಮಾಡುತ್ತಿದ್ದಾರೆ ಎಂದು ಜೆಡಿಎಸ್ ಮುಖಂಡ ಕಾರ್ಲೆ ಇಂದ್ರೇಶ್ ತಿರುಗೇಟು ನೀಡಿದರು.
ಕ್ಷೇತ್ರ ಪುನರ್‌ವಿಂಗಡಣೆ ಸಂದರ್ಭದಲ್ಲಿ ಜೆಡಿಎಸ್ ಪ್ರತಿಭಟನೆ ನಡೆಸಿತ್ತಲ್ಲದೆ, ಬೆಂಗಳೂರಿನಲ್ಲಿ ನಡೆದ ಅಹವಾಲು ಸ್ವೀಕಾರ ಸಭೆಯಲ್ಲು ಕೂಡ ಕಟ್ಟಾಯವನ್ನು ಹಾಸನ ಅಥವಾ ಅರಕಲಗೂಡಿಗೆ ಸೇರಿಸುವಂತೆ ಬೇಡಿಕೆ ಇಟ್ಟಿದ್ದೆವು. ಆದರೆ ಒಂದು ದಿನ ಕಾಂಗ್ರೆಸ್ ನಾಯಕರು ಈ ಬಗ್ಗೆ ಬೀದಿಗಿಳಿದು ಪ್ರತಿಭಟಿಸಲಿಲ್ಲ. ಈಗ ಚುನಾವಣೆ ಸಂದರ್ಭದಲ್ಲಿ ಗಿಮಿಕ್ ಮಾಡಲು ಹೊರಟಿದ್ದಾರೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಕಟ್ಟಾಯ ಜೆಡಿಎಸ್ ಭದ್ರಕೋಟೆಯಾಗಿದೆ. ಕಳೆದ ಬಾರಿಯೂ 16 ಸಾವಿರಕ್ಕೂ ಹೆಚ್ಚು ಮತಗಳು ನಮ್ಮ ಪಕ್ಷಕ್ಕೆ ಬಂದಿತ್ತು. ಕಾಂಗ್ರೆಸ್ ಮೂರನೇ ಸ್ಥಾನದಲ್ಲಿದೆ. ಜಿಪಂ, ತಾಪಂ, ಗ್ರಾಪಂಗಳು ಕೂಡ ಜೆಡಿಎಸ್ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಆದರೂ ಸುರೇಶ್ ಅವರು ಸಂಸದರಾಗಿ ಸರಿಯಾದ ಮಾಹಿತಿ ಪಡೆದುಕೊಳ್ಳದೆ ಸಭೆಯಲ್ಲಿ ಜನರನ್ನು ಮೆಚ್ಚಿಸಲು ಮಾತನಾಡಬಾರದು ಎಂದು ಹೇಳಿದರು.
ಶಾಸಕರಾದ ಎಚ್.ಕೆ. ಕುಮಾರಸ್ವಾಮಿ ಮತ್ತು ಎಚ್.ಡಿ.ರೇವಣ್ಣ ಅವರ ಪರಿಶ್ರಮದಿಂದ ಕಟ್ಟಾಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ 300ರಿಂದ 350 ಕೋಟಿ ರೂ.ಗೂ ಹೆಚ್ಚು ಕಾಮಗಾರಿಗಳು ನಡೆದಿವೆ. ಈ ಕ್ಷೇತ್ರಕ್ಕೆ ಕಾಂಗ್ರೆಸ್ ಕೊಡುಗೆ ಏನು ಎಂಬುದನ್ನು ಬಹಿರಂಗಪಡಿಸಲಿ ಎಂದು ಸವಾಲು ಹಾಕಿದರು.
ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಎಸ್.ದ್ಯಾವೇಗೌಡ, ನಿಂಗರಾಜಯ್ಯ, ಶಿವಣ್ಣ ಇತರರು ಇದ್ದರು.