ಮೈಸೂರು: ಡಾ.ಎಂ.ಎಸ್. ಸ್ವಾಮಿನಾಥನ್ ವರದಿ ಶಿಫಾರಸಿನ ಪ್ರಕಾರ ಕನಿಷ್ಠ ಬೆಂಬಲ ಬೆಲೆ ಖಾತ್ರಿ ನೀಡುವ ಕಾನೂನು ಜಾರಿ ಮಾಡಬೇಕು. ಜತೆಗೆ ರೈತರ ಎಲ್ಲ ಕೃಷಿ ಉತ್ಪನ್ನಗಳನ್ನು ಖರೀದಿ ಮಾಡಬೇಕು ಎಂದು ಜಿಲ್ಲಾ ರೈತ ಸಮಾವೇಶದಲ್ಲಿ ನಿರ್ಣಯಿಸಲಾಯಿತು.
ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಪುರಭವನದಲ್ಲಿ ಆವರಣದಲ್ಲಿ ಗುರುವಾರ ಆಯೋಜಿಸಿದ್ದ ಪ್ರೊ.ಎಂ.ಡಿ.ನಂಜುಂಡಸ್ವಾಮಿ-89 ನೆನಪು ಮತ್ತು ಜಿಲ್ಲಾ ರೈತ ಸಮಾವೇಶದಲ್ಲಿ ರೈತ ಸಮುದಾಯದ ಉಳಿವಿಗಾಗಿ ಹಕ್ಕೊತ್ತಾಯ ಜಾರಿಗೆ ತರಬೇಕು ಎಂದು ಆಗ್ರಹಿಸಲಾಯಿತು.
ಕೇಂದ್ರ ಬಜೆಟ್‌ನಲ್ಲಿ ರೈತರ ಕನಿಷ್ಠ ಆದಾಯ ಖಾತ್ರಿಗಾಗಿ ಯಾವುದೇ ಯೋಜನೆ ಘೋಷಿಸಲಿಲ್ಲ. ಗ್ರಾಮೀಣ ಮೂಲಸೌಕರ್ಯಕ್ಕೆ ಒತ್ತು ನೀಡಿಲ್ಲ. ಕೃಷಿ ಕ್ಷೇತ್ರಕ್ಕೆ ನೀಡಬೇಕಾದ ಆದ್ಯತೆ ನೀಡದೆ ನಿರ್ಲಕ್ಷೃ ಮಾಡಲಾಗಿದೆ. ರಸಗೊಬ್ಬರಗಳ ಮೇಲಿನ ಸಬ್ಸಿಡಿ ಮೊತ್ತ, ಸಾಲದ ಮೊತ್ತವನ್ನು ಕಡಿಮೆ ಮಾಡಲಾಗಿದೆ. ಈ ಸಾಲಿನ ಬಜೆಟ್ ಕೃಷಿ ವಿರೋಧಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಲಾಯಿತು.
ರೈತ ಹೋರಾಟಗಾರರ ಮೇಲಿನ ಮೊಕದ್ದಮೆ ಮತ್ತು ವಿದ್ಯುತ್ ಖಾಸಗೀಕರಣ ಮಸೂದೆಯನ್ನು ವಾಪಸ್ ಪಡೆಯಬೇಕು. ಕೃಷಿ ಕಾಯ್ದೆಯ ತದ್ರೂಪವಾಗಿರುವ ಕೃಷಿ ಮಾರುಕಟ್ಟೆ ನೀತಿ ಹಿಂದಕ್ಕೆ ಪಡೆಯಬೇಕು. ರೈತರ ಸಾಲವನ್ನು ಮನ್ನಾ ಮಾಡಬೇಕು. ಸರಳ ಸಾಲದ ನೀತಿ ರೂಪಿಸಿ ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡಬೇಕು ಎಂದು ಹಕ್ಕೊತ್ತಾಯ ಮಂಡಿಸಲಾಯಿತು
ನಬಾರ್ಡ್ ಮೂಲಕ ನೀಡುವ ಕೃಷಿ ಸಾಲ ಕಡಿತ ಖಂಡನೀಯ. ಹೆಚ್ಚು ಸಾಲ ನೀಡಬೇಕು. 60 ವರ್ಷ ದಾಟಿದ ಕೃಷಿಕರಿಗೆ ಮಾಸಿಕ 5 ಸಾವಿರ ರೂ. ಪಿಂಚಣಿ ನೀಡಬೇಕು. ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ನೀಡಿ ಕೊಟ್ಟ ಮಾತು ಉಳಿಸಿಕೊಳ್ಳಬೇಕು. ಮೇಕೆದಾಟು, ಕಳಸಾ ಬಂಡೂರಿ ಯೋಜನೆಗೆ ಅನುಮತಿ ನೀಡಬೇಕು ಎಂದು ಆಗ್ರಹಿಸಿ ನಿರ್ಣಯ ತೆಗೆದುಕೊಳ್ಳಲಾಯಿತು.